ನಿಗಮ ಮಂಡಳಿಯಲ್ಲಿ ಸೂಕ್ತ ಸ್ಥಾನಮಾನ ನೀಡದೆ ಅನ್ಯಾಯ; ಪಕ್ಷಕ್ಕಾಗಿ ದುಡಿಯುವುದಿಲ್ಲ, ಕಾಂಗ್ರೆಸ್ಗೆ ಮತ ಹಾಕಿ ಮನೆಯಲ್ಲೇ ಉಳಿಯುತ್ತೇನೆ – ಯಾಕೂಬ್ ಅಸಮಾಧಾನ
ಮಡಿಕೇರಿ: ರಾಜ್ಯ ನಿಗಮ ಮಂಡಳಿಗಳಲ್ಲಿ ಸೂಕ್ತ ಸ್ಥಾನಮಾನ ನೀಡದಿರುವುದು ಸೇರಿದಂತೆ ಕಾಂಗ್ರೆಸ್ ಪಕ್ಷದಲ್ಲಿ ಅಲ್ಪಸಂಖ್ಯಾತ ಸಮುದಾಯದ ನಾಯಕರಿಗೆ ರಾಜಕೀಯ ಅವಕಾಶಗಳನ್ನು ಕಲ್ಪಿಸುತ್ತಿಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಕೆಪಿಸಿಸಿ ಸದಸ್ಯ ಯಾಕೂಬ್ ಕೆ.ಎ. ಅವರು ಕೆಪಿಸಿಸಿ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.
ಮಡಿಕೇರಿಯ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಶ್ಚಿಮಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಸಮಿತಿಯಲ್ಲಿ ತಮ್ಮನ್ನು ಕೇವಲ ಸದಸ್ಯರನ್ನಾಗಿ ನೇಮಕ ಮಾಡುವ ಮೂಲಕ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಲಾಗಿದೆ. ಈ ಹುದ್ದೆಯನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.


ಕಾಂಗ್ರೆಸ್ ಪಕ್ಷದಲ್ಲಿ ಅಲ್ಪಸಂಖ್ಯಾತ ಸಮುದಾಯದವರಿಗೆ ಮತ ಹಾಕುವ ಜವಾಬ್ದಾರಿಯನ್ನು ಮಾತ್ರ ನೀಡಲಾಗುತ್ತಿದೆಯೇ ಹೊರತು, ಅಧಿಕಾರ ಮತ್ತು ರಾಜಕೀಯ ಸ್ಥಾನಮಾನಗಳನ್ನು ನೀಡುತ್ತಿಲ್ಲ. ಕಳೆದ ಹಲವು ವರ್ಷಗಳಿಂದ ಜಾತ್ಯತೀತ ನೆಲೆಗಟ್ಟಿನಲ್ಲಿ ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದರೂ ಸೂಕ್ತ ಸ್ಥಾನಮಾನ ದೊರೆತಿಲ್ಲ. ಈ ಬಗ್ಗೆ ಬಿಜೆಪಿ ಮುಖಂಡರೇ ತಮ್ಮ ಬಗ್ಗೆ ಅನುಕಂಪ ವ್ಯಕ್ತಪಡಿಸುತ್ತಿದ್ದಾರೆ ಎಂದು ಹೇಳಿದರು.


ಕಾಂಗ್ರೆಸ್ ಪಕ್ಷಕ್ಕೆ ಅತ್ಯಧಿಕ ಮತಗಳನ್ನು ನೀಡಿ ಜಿಲ್ಲೆಯ ಇಬ್ಬರು ಶಾಸಕರು ಆಯ್ಕೆಯಾಗುವಂತೆ ಮಾಡಿರುವ ಅಲ್ಪಸಂಖ್ಯಾತ ಸಮುದಾಯಕ್ಕೆ ಅನ್ಯಾಯವಾಗಿದೆ. ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಹಂಚಿಕೆಯಲ್ಲಿಯೂ ಅಲ್ಪಸಂಖ್ಯಾತರಿಗೆ ಸೂಕ್ತ ಪ್ರಾತಿನಿಧ್ಯ ನೀಡಿಲ್ಲ. ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸ್ಥಾನವನ್ನು ಅಲ್ಪಸಂಖ್ಯಾತರಿಗೆ ನೀಡಬೇಕಾಗಬಹುದು ಎಂಬ ಆತಂಕದಿಂದಲೇ ತಮ್ಮನ್ನು ಸೇರಿದಂತೆ ಸಮುದಾಯದ ನಾಯಕರಿಗೆ ರಾಜಕೀಯ ಅವಕಾಶಗಳನ್ನು ನಿರಾಕರಿಸಲಾಗುತ್ತಿದೆ ಎಂದು ಆರೋಪಿಸಿದರು.


ಜಿಲ್ಲೆಯ ಇಬ್ಬರು ಶಾಸಕರು ಹಾಗೂ ಕಾಂಗ್ರೆಸ್ ಜಿಲ್ಲಾಧ್ಯಕ್ಷರಿಂದ ತಮಗೆ ಅನ್ಯಾಯವಾಗಿದೆ ಎಂದು ದೂರಿದ ಅವರು, ಅಲ್ಪಸಂಖ್ಯಾತರು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕುವುದಕ್ಕೆ ಮಾತ್ರ ಸೀಮಿತವಾಗಬೇಕೇ? ನಮಗೂ ರಾಜಕೀಯ ಸ್ಥಾನಮಾನ ಹಾಗೂ ಗೌರವಯುತ ಅವಕಾಶಗಳು ಬೇಡವೇ ಎಂದು ಪ್ರಶ್ನಿಸಿದರು.


ಇನ್ನು ಮುಂದೆ ಕಾಂಗ್ರೆಸ್ ಪಕ್ಷಕ್ಕಾಗಿ ದುಡಿಯುವುದಿಲ್ಲ. ಕಾಂಗ್ರೆಸ್ಗೆ ಮತ ಹಾಕಿ ಮನೆಯಲ್ಲೇ ಸುಮ್ಮನಿರುತ್ತೇನೆ. ಆದರೆ ಕಾಂಗ್ರೆಸ್ ಪಕ್ಷದ ಸಿದ್ಧಾಂತಕ್ಕೆ ಬದ್ಧನಾಗಿರುತ್ತೇನೆ ಎಂದು ಯಾಕೂಬ್ ಕೆ.ಎ. ಸ್ಪಷ್ಟಪಡಿಸಿದರು.
ಇದೇ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ ಅವರು, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿ, ಅದನ್ನು ಅಂಗೀಕರಿಸುವಂತೆ ಮನವಿ ಮಾಡಿದ್ದಾರೆ.
