ರೂ.54 ಸಾವಿರ ದಂಡ ವಿಧಿಸಿ ನ್ಯಾಯಾಲಯ ಆದೇಶ
ಬಂಟ್ವಾಳ: ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು 10 ವರ್ಷಗಳ ಜೈಲು ಶಿಕ್ಷೆ ಹಾಗೂ ರೂ.54,000 ದಂಡ ವಿಧಿಸಿ ಆದೇಶಿಸಿದೆ.
2021ರಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ಮಹಿಳೆಯ ನೆರೆಮನೆಯ ನಿವಾಸಿ ಅನಿಲ್ ಎಂಬಾತ ಹಲ್ಲೆ ನಡೆಸಿ ಅತ್ಯಾಚಾರ ಎಸಗಿದ್ದಲ್ಲದೆ, ಜೀವ ಬೆದರಿಕೆ ಹಾಕಿದ್ದ ಆರೋಪದಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.


ಅಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾಗಿದ್ದ ಪ್ರಸನ್ನ ಎಂ.ಎಸ್. ಅವರು ಆರೋಪಿಯನ್ನು ಪತ್ತೆಹಚ್ಚಿದ್ದರು. ಬಳಿಕ ತನಿಖಾಧಿಕಾರಿಗಳು ಹಾಗೂ ಅಂದಿನ ಬಂಟ್ವಾಳ ವೃತ್ತ ನಿರೀಕ್ಷಕರಾಗಿದ್ದ ಟಿ.ಡಿ. ನಾಗರಾಜ್ ಅವರು ಪ್ರಕರಣಕ್ಕೆ ಸಂಬಂಧಿಸಿದ ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.


ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಆರೋಪಿಯ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ರಾಜೇಶ ಮಾರುತಿ ಕಾಮಟೆ ಅವರು ಆರೋಪಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ರೂ.54,000 ದಂಡ ವಿಧಿಸಿ ತೀರ್ಪು ನೀಡಿದ್ದಾರೆ.


ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾದ ಮೋತಿಲಾಲ್ ಚೌಧರಿ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.




