ಚಿಕ್ಕಮಗಳೂರು: ಹಾಸನ ಜಿಲ್ಲೆಯ ಬೇಲೂರು ಭಾಗದಲ್ಲಿ ಸೆರೆಹಿಡಿಯಲಾಗಿರುವ ಕಾಡಾನೆಗಳನ್ನು ಮೂಡಿಗೆರೆ ಮಾರ್ಗವಾಗಿ ಭದ್ರಾ ಅಭಯಾರಣ್ಯಕ್ಕೆ ಸ್ಥಳಾಂತರಿಸುವ ಅರಣ್ಯ ಇಲಾಖೆಯ ಕ್ರಮ ಇದೀಗ ಮಲೆನಾಡಿನಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸರ್ಕಾರದ ಈ ನಿರ್ಧಾರಕ್ಕೆ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಬಹಿರಂಗವಾಗಿಯೇ ವಿರೋಧ ವ್ಯಕ್ತಪಡಿಸಿದ್ದು, ರಾಜೀನಾಮೆ ನೀಡುವ ಎಚ್ಚರಿಕೆ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದಾರೆ.

ಹಾಸನ ಭಾಗದ ಕಾಡಾನೆಗಳನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಭಾಗದ ಮೂಲಕ ಭದ್ರಾ ಅರಣ್ಯ ಪ್ರದೇಶಕ್ಕೆ ಸ್ಥಳಾಂತರಿಸುವ ನಿರ್ಧಾರದಿಂದ ಸ್ಥಳೀಯ ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ಈಗಾಗಲೇ ಕಾಡಾನೆಗಳ ಹಾವಳಿಯಿಂದ ಸಂಕಷ್ಟ ಅನುಭವಿಸುತ್ತಿರುವ ಮಲೆನಾಡಿನ ಜನರಿಗೆ ಮತ್ತಷ್ಟು ಸಮಸ್ಯೆಯಾಗಲಿದೆ ಎಂಬ ಆತಂಕವನ್ನು ಶಾಸಕಿ ವ್ಯಕ್ತಪಡಿಸಿದ್ದಾರೆ.

ಈ ವಿಚಾರವಾಗಿ ತೀವ್ರ ಅಸಮಾಧಾನಗೊಂಡಿರುವ ನಯನಾ ಮೋಟಮ್ಮ, ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರಕ್ಕೆ ಮುಂದಾಗಿದ್ದಾರೆ. ಅಷ್ಟೇ ಅಲ್ಲದೆ, ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಸಲ್ಲಿಸಿರುವ ಅವರು, ರಾಜೀನಾಮೆ ಪತ್ರವನ್ನು ಪ್ರದರ್ಶಿಸುವ ಮೂಲಕ ತಮ್ಮ ಅಸಮಾಧಾನವನ್ನು ಬಹಿರಂಗಪಡಿಸಿದ್ದಾರೆ.

Leave a Reply

Your email address will not be published. Required fields are marked *