ಮಡಿಕೇರಿ : ನಗರದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಯ ಸ್ಥಳಕ್ಕೆ ಜಿಲ್ಲಾಧಿಕಾರಿ ಸೋಮಶೇಖರ್ ರವರು ನವಂಬರ್ 24ರಂದು ಭೇಟಿ ನೀಡಿ ಕಾಮಗಾರಿಯ ಬಗ್ಗೆ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು ಕಾಮಗಾರಿಯ ಗುಣಮಟ್ಟ ಕಾಯ್ದುಕೊಳ್ಳುವ ಬಗ್ಗೆ ಮತ್ತು ಕ್ಲಪ್ತ ಸಮಯಕ್ಕೆ ಕಾಮಗಾರಿ ಪೂರ್ಣಗೊಳಿಸುವ ಬಗ್ಗೆ ಸೂಚನೆ ನೀಡಿದರು.

ನಗರೋತ್ಥಾನ ಯೋಜನೆ ಅಡಿಯಲ್ಲಿ ನಗರದ ಕಾವೇರಿ ಕಲಾಕ್ಷೇತ್ರ ಸ್ಥಳದಲ್ಲಿ ಸುಮಾರು 950 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಬಹುಮಹಡಿ ಕಲಾಭವನ ನಿರ್ಮಾಣ ಕಾಮಗಾರಿ ಪರಿಶೀಲಿಸಿ ಮಾಹಿತಿ ಪಡೆದ ಜಿಲ್ಲಾಧಿಕಾರಿಯವರು ಪಡೆದರು. 150 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ರಾಜಾಸೀಟು ಸಂಪರ್ಕಿಸುವ ಕಾಂಕ್ರೀಟ್ ರಸ್ತೆ ಕಾಮಗಾರಿಯ ಪ್ರಗತಿಯನ್ನು ಪರಿಶೀಲಿಸಿದರು.

ಬಳಿಕ ನಗರಸಭೆಯ ಉದ್ದಿಮೆ ನಿಧಿಯಡಿ ಗಾಂಧಿ ಮೈದಾನದಲ್ಲಿ ಸುಮಾರು 224 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ರಂಗಮಂದಿರ ನಿರ್ಮಾಣ ಕಾಮಗಾರಿಯನ್ನು ಜಿಲ್ಲಾಧಿಕಾರಿ ಅವರು ಪರಿಶೀಲಿಸಿದರು.

ಅಭಿವೃದ್ಧಿ ಕಾಮಗಾರಿ ಸಂಬಂಧಿಸಿದಂತೆ ಸಾರ್ವಜನಿಕರಿಂದ ಯಾವುದೇ ರೀತಿಯ ದೂರುಗಳು ಬಾರದಂತೆ ಎಂಜಿನಿಯರ್‌ಗಳು ಎಚ್ಚರವಹಿಸಬೇಕು. ಲೋಪ ಕಂಡುಬಂದಲ್ಲಿ ಸಂಬಂಧಪಟ್ಟ ಎಂಜಿನಿಯರ್‌ಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿಯವರು ಎಚ್ಚರಿಸಿದರು.ವಿವಿಧ ಅಭಿವೃದ್ಧಿ ಕಾಮಗಾರಿ ಬಗ್ಗೆ ಪ್ರತೀ ವಾರ ಮಾಹಿತಿ ಒದಗಿಸುವಂತೆ ನಿರ್ದೇಶನ ನೀಡಿದರು.

ಕಾವೇರಿ ಕಲಾಕ್ಷೇತ್ರ ಬಳಿಯ ಸಂಪಿಗೆ ಮರವನ್ನು ಉಳಿಸಿಕೊಂಡು ಕಾವೇರಿ ಕಲಾಕ್ಷೇತ್ರ ಬಹುಮಹಡಿ ಕಟ್ಟಡ ನಿರ್ಮಿಸ ಬೇಕೆಂದು ಅಧಿಕಾರಿಗಳಿಗೆ ಸಲಹೆ ನೀಡಿದರು. ಪ್ರವಾಸಿ ತಾಣವಾದ ರಾಜಾಸೀಟು ಕಾಂಕ್ರೀಟ್ ರಸ್ತೆ ಕಾಮಗಾರಿಯನ್ನು ಡಿಸೆಂಬರ್ ಮೊದಲ ವಾರದೊಳಗೆ ಪೂರ್ಣಗೊಳಿಸುವಂತೆ ತಿಳಿಸಿದರು.ನಂತರ ನಗರದಲ್ಲಿರುವ ಇಂದಿರಾ ಕ್ಯಾಂಟೀನ್‌ಗೆ ಭೇಟಿ ನೀಡಿ ಉಪಾಹಾರ ಸವಿದ ಜಿಲ್ಲಾಧಿಕಾರಿ ಅವರು ಶುಚಿತ್ವಕ್ಕೆ ಒತ್ತು ನೀಡಬೇಕು. ಆಹಾರದಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು ಎಂದು ಸೂಚಿಸಿದರು.

ಬೆಳಗ್ಗಿನ ಉಪಾಹಾರ ಮತ್ತು ಮಧ್ಯಾಹ್ನದ ಊಟ ಹಾಗೂ ರಾತ್ರಿ ಊಟ ತಲಾ 300 ಮಂದಿಗೆ ವಿತರಿಸಲಾಗುತ್ತದೆ ಎಂದು ಪೌರಾಯುಕ್ತರಾದ ಎಚ್.ಆರ್.ರಮೇಶ್ ಅವರು ಮಾಹಿತಿ ನೀಡಿದರು. ನಗರಾಭಿವೃದ್ಧಿ ಪ್ರಾಧಿಕಾರದ ಯೋಜನಾ ನಿರ್ದೇಶಕರಾದ ಮಂಜುನಾಥ್ ರಾಮಣ್ಣ ಅವರು ಕಾಮಗಾರಿ ಪ್ರಗತಿ ಸಂಬಂಧಿಸಿದಂತೆ ಮಾಹಿತಿ ನೀಡಿದರು. ನಗರಾಭಿವೃದ್ಧಿ ಕೋಶದ ಕಾರ್ಯಪಾಲಕ ಅಭಿಯಂತರರಾದ ಶ್ರೀನಿವಾಸ್‌, ನಗರಸಭೆ ಎಇಇ ಸತೀಶ್, ಕಿರಿಯ ಅಭಿಯಂತರರಾದ ಹೇಮಂತ್ ಕುಮಾರ್, ಗುರುರಾಜ್ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *