ಯೋಗೇಶ್ ಗೌಡ ಕೊಲೆ ಪ್ರಕರಣ: ಹೈಕೋರ್ಟ್ ನೀಡಿದ್ದ ಜಾಮೀನು ಮತ್ತು ಶಿಕ್ಷೆ ಅಮಾನತು ಆದೇಶ ರದ್ದು

ನವದೆಹಲಿ: ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಹಾಲಿ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನು ಹಾಗೂ ಜೀವಾವಧಿ ಶಿಕ್ಷೆ ಅಮಾನತು ಆದೇಶವನ್ನು ರದ್ದುಗೊಳಿಸಿರುವ ಸರ್ವೋಚ್ಚ ನ್ಯಾಯಾಲಯ, ಮುಂದಿನ ಎರಡು ವಾರಗಳೊಳಗೆ ವಿಚಾರಣಾ ನ್ಯಾಯಾಲಯದ ಮುಂದೆ ಶರಣಾಗುವಂತೆ ನಿರ್ದೇಶನ ನೀಡಿದೆ. ಅಲ್ಲದೆ, ಈ ಹಿಂದೆ ಜಾಮೀನಿಗಾಗಿ ಸಲ್ಲಿಸಲಾಗಿದ್ದ ಬೇಲ್ ಬಾಂಡ್‌ಗಳನ್ನೂ ರದ್ದುಗೊಳಿಸಿದೆ.

ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಅವರ ಜಾಮೀನು ಮುಂದುವರಿಯಲಿದೆಯೇ ಎಂಬ ಕುತೂಹಲಕ್ಕೆ ಸುಪ್ರೀಂ ಕೋರ್ಟ್‌ನ ಈ ತೀರ್ಪು ತೆರೆ ಎಳೆದಿದೆ. ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ನೇತೃತ್ವದ ದ್ವಿಸದಸ್ಯ ಪೀಠವು ಬುಧವಾರ ತೀರ್ಪು ಪ್ರಕಟಿಸಿದೆ.

ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನು ಮತ್ತು ಶಿಕ್ಷೆ ಅಮಾನತು ಆದೇಶವನ್ನು ಪ್ರಶ್ನಿಸಿ ಕೇಂದ್ರ ತನಿಖಾ ದಳ (ಸಿಬಿಐ) ಹಾಗೂ ಮೃತ ಯೋಗೇಶ್ ಗೌಡ ಅವರ ಸಹೋದರ ಗುರುನಾಥ ಗೌಡ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಎರಡೂ ಅರ್ಜಿಗಳ ವಿಚಾರಣೆ ನಡೆಸಿದ್ದ ನ್ಯಾಯಪೀಠ ಕಳೆದ ಅಕ್ಟೋಬರ್‌ನಲ್ಲಿ ತೀರ್ಪು ಕಾಯ್ದಿರಿಸಿತ್ತು. ಇದೀಗ ಸಿಬಿಐ ಮತ್ತು ಗುರುನಾಥ ಗೌಡ ಸಲ್ಲಿಸಿದ್ದ ಮೇಲ್ಮನವಿಗಳನ್ನು ಪುರಸ್ಕರಿಸಿರುವ ಸುಪ್ರೀಂ ಕೋರ್ಟ್, ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಿದೆ.

ವಿನಯ್ ಕುಲಕರ್ಣಿ ಅವರು ಮುಂದಿನ ಎರಡು ವಾರಗಳೊಳಗೆ ವಿಚಾರಣಾ ನ್ಯಾಯಾಲಯದ ಮುಂದೆ ಶರಣಾಗಬೇಕು. ಬಳಿಕ ಅವರನ್ನು ಜೈಲಿಗೆ ಕಳುಹಿಸುವಂತೆ ನ್ಯಾಯಪೀಠ ನಿರ್ದೇಶನ ನೀಡಿದೆ.

ಜೀವಾವಧಿ ಶಿಕ್ಷೆ ಅಮಾನತುಗೊಳಿಸಿದ್ದ ಹೈಕೋರ್ಟ್

ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೇಶ್ ಗೌಡ ಅವರ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ದೋಷಿ ಎಂದು ವಿಶೇಷ ನ್ಯಾಯಾಲಯ ತೀರ್ಪು ನೀಡಿತ್ತು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು 2026ರ ಏಪ್ರಿಲ್‌ನಲ್ಲಿ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ಹಿನ್ನೆಲೆಯಲ್ಲಿ ಅವರು ಜೈಲು ಸೇರಿದ್ದರು.

ವಿಶೇಷ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ವಿನಯ್ ಕುಲಕರ್ಣಿ ಕರ್ನಾಟಕ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ ಕಳೆದ ಜೂನ್‌ನಲ್ಲಿ ಅವರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿ ಜಾಮೀನು ಮಂಜೂರು ಮಾಡಿತ್ತು. ಇದರಿಂದಾಗಿ ಅವರು ಜೈಲಿನಿಂದ ಬಿಡುಗಡೆಯಾಗಿದ್ದರು.

ಆದರೆ, ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು. ಇದೀಗ ಸುಪ್ರೀಂ ಕೋರ್ಟ್ ಹೈಕೋರ್ಟ್‌ನ ಜಾಮೀನು ಹಾಗೂ ಶಿಕ್ಷೆ ಅಮಾನತು ಆದೇಶವನ್ನು ರದ್ದುಗೊಳಿಸಿರುವುದರಿಂದ ವಿನಯ್ ಕುಲಕರ್ಣಿ ಮತ್ತೆ ಜೈಲು ಸೇರಬೇಕಾದ ಪರಿಸ್ಥಿತಿ ಎದುರಾಗಿದೆ.

Leave a Reply

Your email address will not be published. Required fields are marked *