ಆಟೋ ಚಾಲಕನ ಬಂಧನ; ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಮಡಿಕೇರಿ: ಮನೆಗೆ ಡ್ರಾಪ್ ನೀಡುವ ನೆಪದಲ್ಲಿ ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಆಟೋ ಚಾಲಕನನ್ನು ಪೊಲೀಸರು ಬಂಧಿಸಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.



ಮಣಿಕಂಠ ಎಂಬ ಆಟೋ ಚಾಲಕ ಬಾಲಕಿಗೆ ಪರಿಚಿತನಾಗಿದ್ದು, ಮನೆಗೆ ಡ್ರಾಪ್ ನೀಡುವ ನೆಪದಲ್ಲಿ ಆಕೆಯನ್ನು ಆಟೋದ ಮುಂಭಾಗದ ಸೀಟಿನಲ್ಲಿ ಕೂರಿಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.



ಮನೆಗೆ ಮರಳಿದ ಬಾಲಕಿ ನೋವಿನಿಂದ ನರಳುತ್ತಿರುವುದನ್ನು ಗಮನಿಸಿದ ಪೋಷಕರು ತಕ್ಷಣ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ವೇಳೆ ವೈದ್ಯಕೀಯ ತಪಾಸಣೆಯ ಸಂದರ್ಭದಲ್ಲಿ ದೌರ್ಜನ್ಯದ ವಿಚಾರ ಬೆಳಕಿಗೆ ಬಂದಿದೆ ಎನ್ನಲಾಗಿದೆ.


ಘಟನೆಗೆ ಸಂಬಂಧಿಸಿದಂತೆ ಮಡಿಕೇರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರಿಸಿದ್ದಾರೆ.






