ಹುಬ್ಬಳ್ಳಿ: ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಕೊಲೆ ಪ್ರಕರಣದಲ್ಲಿ ಅಪರಾಧಿ ಗಿರೀಶ್ ಅಲಿಯಾಸ್ ವಿಶ್ವನಾಥ್ ಎಸ್. ಸಾವಂತ್ಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಜೊತೆಗೆ ₹45 ಸಾವಿರ ದಂಡವನ್ನೂ ವಿಧಿಸಿ ನವೆಂಬರ್ 25ರಂದು ಹುಬ್ಬಳ್ಳಿಯ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಪಲ್ಲವಿ ಬಿ.ಆರ್. ಅವರು ಆದೇಶ ಹೊರಡಿಸಿದ್ದಾರೆ.


2024ರ ಮೇ 15ರಂದು ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿರುವ ತನ್ನ ನಿವಾಸದಲ್ಲೇ 20 ವರ್ಷದ ಅಂಜಲಿ ಅಂಬಿಗೇರ ಅವರನ್ನು ಆರೋಪಿ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದಿದ್ದ. ಅಂಜಲಿ ಮತ್ತು ಗಿರೀಶ್ ನಡುವಿನ ಪ್ರೀತಿಯ ವಿಚಾರದಲ್ಲಿ ಉಂಟಾಗಿದ್ದ ಭಿನ್ನಾಭಿಪ್ರಾಯ ಹಾಗೂ ಅಂಜಲಿ ಆತನಿಂದ ದೂರವಾಗಿದ್ದೇ ಕೊಲೆಗೆ ಕಾರಣ ಎನ್ನುವುದು ತನಿಖೆಯಲ್ಲಿ ತಿಳಿದುಬಂದಿತ್ತು.


ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ನವೆಂಬರ್ 21ರಂದು ಆರೋಪಿಯನ್ನು ದೋಷಿ ಎಂದು ಘೋಷಿಸಿತ್ತು. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 451, 302 ಹಾಗೂ 201ರ ಅಡಿಯಲ್ಲಿ ಅಪರಾಧ ಸಾಬೀತಾಗಿದ್ದು, ಶಿಕ್ಷೆಯ ಪ್ರಮಾಣವನ್ನು ನವೆಂಬರ್ 25ಕ್ಕೆ ಕಾಯ್ದಿರಿಸಲಾಗಿತ್ತು. ಇದೀಗ ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ಪ್ರಕಟಿಸಲಾಗಿದೆ.


ಕೊಲೆ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಗಿರೀಶ್ನನ್ನು ದಾವಣಗೆರೆ ಸಮೀಪ ರೈಲ್ವೆ ಪೊಲೀಸರ ನೆರವಿನಿಂದ ವಶಕ್ಕೆ ಪಡೆಯಲಾಗಿತ್ತು. ಚಲಿಸುವ ರೈಲಿನಿಂದ ಬಿದ್ದು ಗಾಯಗೊಂಡಿದ್ದ ಆತನಿಗೆ ಚಿಕಿತ್ಸೆ ಕೊಡಿಸಿದ ಬಳಿಕ ಹುಬ್ಬಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದರು.


ಇನ್ನು, ಅಂಜಲಿ ಕೊಲೆಯಾಗುವ ಮುನ್ನ ಆರೋಪಿಯಿಂದ ಬಂದಿದ್ದ ಬೆದರಿಕೆಗಳ ಕುರಿತು ದೂರು ನೀಡಿದ್ದರೂ ಸೂಕ್ತ ಕ್ರಮ ಕೈಗೊಳ್ಳಲಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಕರ್ತವ್ಯಲೋಪದ ಆರೋಪದ ಮೇಲೆ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿತ್ತು.


ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ರಾಜ್ಯ ಸರ್ಕಾರ ತನಿಖೆಯನ್ನು ಸಿಐಡಿಗೆ ವಹಿಸಿತ್ತು. ತನಿಖೆ ಪೂರ್ಣಗೊಳಿಸಿದ ಸಿಐಡಿ ಅಧಿಕಾರಿಗಳು 2024ರ ಆಗಸ್ಟ್ನಲ್ಲಿ ನ್ಯಾಯಾಲಯಕ್ಕೆ 494 ಪುಟಗಳ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದರು.
ವಾದ-ಪ್ರತಿವಾದಗಳು, ಸಾಕ್ಷಿಗಳ ಹೇಳಿಕೆಗಳು ಹಾಗೂ ಲಭ್ಯವಿದ್ದ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿದ ನ್ಯಾಯಾಲಯ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಈ ಮೂಲಕ ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಅಂಜಲಿ ಅಂಬಿಗೇರ ಕೊಲೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ.




