ಪೊಲೀಸ್ ಇಲಾಖೆಯಿಂದ ಪೂರ್ವಾನುಮತಿ ಪಡೆಯದೆ ರಾಜಕೀಯ ಪಕ್ಷ ಒಂದರ ಮುಖಂಡರು ಮತ್ತು ಕಾರ್ಯಕರ್ತರು ಟೋಲ್ ಗೇಟ್ ಬಳಿ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಆರೋಪದ ಮೇರೆಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಪ್ಪಿನಂಗಡಿ ಸಮೀಪದ ವಳಾಲಿನಲ್ಲಿ ನೂತನ ಟೋಲ್ ಪ್ಲಾಝಾ ಕಾರ್ಯಾರಂಭಗೊಂಡ ಬೆನ್ನಲ್ಲೇ ಬ್ರಹ್ಮರಕೂಟ್ಟು ಟೋಲ್ ಗೇಟ್ ವಿರುದ್ಧ ಎಸ್ ಡಿ ಪಿ ಐ ಪಕ್ಷದ ಮುಖಂಡರುಗಳು ಹಾಗೂ ಕಾರ್ಯಕರ್ತರು ನವಂಬರ್ 26ರಂದು ಬೆಳಿಗ್ಗೆ ಆಕ್ರೋಶ ವ್ಯಕ್ತಪಡಿಸಿ ಟೋಲ್ ಗೇಟ್‌ಗೆ ಮುತ್ತಿಗೆ ಹಾಕಿದ್ದರು.

ಈ ಸಂದರ್ಭದಲ್ಲಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರತಿಭಟನೆ ನಡೆಸಿದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರನ್ನು ಬಂಧಿಸಿದ್ದರು.

ಘಟನೆಯ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮಂಗಳೂರು ಯೋಜನಾ ನಿರ್ದೇಶಕರು ಬಂಟ್ವಾಳ ಠಾಣೆಯಲ್ಲಿ ದೂರು ನೀಡಿದ್ದು ‘ರಾಜಕೀಯ ಪಕ್ಷವೊಂದರ ಧ್ವಜ ಮತ್ತು ಬ್ಯಾನರ್ ಗಳನ್ನು ಹಿಡಿದು ಕೆಲವು ಜನರು ಯಾವುದೇ ಪೂರ್ವಾನುಮತಿ ಪಡೆಯದೆ ಗುಂಪುಗೂಡಿ, ಬಂಟ್ವಾಳ ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಟೋಲ್ ಕಾರ್ಯಾಚರಣೆಗೆ ಅಡ್ಡಿಪಡಿಸಿದ್ದಲ್ಲದೆ, ಟೋಲ್ ಉಪಕರಣಗಳಿಗೆ ಹಾನಿ ಮಾಡಲು ಪ್ರಯತ್ನಿಸಿರುತ್ತಾರೆ ಎಂಬುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದರು.

ಇದೀಗ ಘಟನೆಯ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಅ.ಕ್ರ: 166/2026, ಕಲಂ:189(2), 191(2), ಜೊತೆಗೆ 190 ಬಿ ಎನ್ ಎಸ್ 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *