ಕುಶಾಲನಗರದಲ್ಲಿ ತಾಲೂಕು ಆಡಳಿತದಿಂದ ಶ್ರೀ ಕನಕದಾಸರ ಜಯಂತಿ ಆಚರಣೆ

ಮಹನೀಯರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಕರೆ

ಕುಶಾಲನಗರ: ನಮ್ಮ ಧರ್ಮವನ್ನು ಆಚರಿಸುವುದರ ಜೊತೆಗೆ ಇತರ ಧರ್ಮಗಳನ್ನೂ ಗೌರವಿಸುವ ಮನೋಭಾವ ಬೆಳೆಸಿಕೊಂಡಾಗ ಮಾತ್ರ ಉತ್ತಮ ಹಾಗೂ ಸಾಮರಸ್ಯದ ಸಮಾಜ ನಿರ್ಮಾಣ ಸಾಧ್ಯ ಎಂದು ಶಾಸಕ ಡಾ. ಮಂತರ್ ಗೌಡ ಹೇಳಿದರು.

ಮಹಾತ್ಮರ ಜಯಂತಿಯಂದು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವಿಸುವುದರಿಂದ ಮಾತ್ರ ಸಮಾಜದಲ್ಲಿ ಬದಲಾವಣೆ ಸಾಧ್ಯವಿಲ್ಲ. ಅವರು ತೋರಿಸಿಕೊಟ್ಟ ಆದರ್ಶದ ಹಾದಿಯಲ್ಲಿ ನಡೆದು, ಅವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಬದುಕಿನಲ್ಲಿ ಯಶಸ್ಸು ಕಾಣಲು ಸಾಧ್ಯ. ಸಾಮರಸ್ಯದ ಬದುಕು ಕಟ್ಟಿಕೊಳ್ಳಲು ಪ್ರತಿಯೊಬ್ಬರೂ ತಮ್ಮ ಧರ್ಮವನ್ನು ಶ್ರದ್ಧೆಯಿಂದ ಆಚರಿಸುವುದರೊಂದಿಗೆ ಇತರ ಧರ್ಮಗಳಿಗೂ ಗೌರವ ನೀಡುವ ಮನೋಭಾವ ಹೊಂದಿರಬೇಕು. ಇಂತಹ ಮೌಲ್ಯಗಳನ್ನು ಮಕ್ಕಳ ಮನಸ್ಸಿನಲ್ಲಿಯೂ ಬಿತ್ತಬೇಕು. ಆಗ ಮಾತ್ರ ಕನಕದಾಸರು ಸಾರಿದ ಸಮಾನತೆಯ ತತ್ವವನ್ನು ಸಮಾಜದಲ್ಲಿ ಸಾಕಾರಗೊಳಿಸಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.

ಅವರು ನ. 27ರಂದು ಕುಶಾಲನಗರದ ಕಲಾಭವನದಲ್ಲಿ ತಾಲೂಕು ಆಡಳಿತ ಸಮಿತಿ ವತಿಯಿಂದ ಆಯೋಜಿಸಿದ್ದ ದಾಸಶ್ರೇಷ್ಠ ಶ್ರೀ ಕನಕದಾಸರ ಜಯಂತಿ ಸಮಾರಂಭವನ್ನು ಉದ್ಘಾಟಿಸಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸೋಮವಾರಪೇಟೆ ಮತ್ತು ಕುಶಾಲನಗರ ತಾಲೂಕು ಆಡಳಿತ, ಸೋಮವಾರಪೇಟೆ ಪಟ್ಟಣ ಪಂಚಾಯಿತಿ, ಕುಶಾಲನಗರ ಪುರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.

ಶಾಸಕ ಡಾ. ಮಂತರ್ ಗೌಡ ಹಾಗೂ ಅಧಿಕಾರಿಗಳು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಸಲ್ಲಿಸಲಾಯಿತು.

ಕಾರ್ಯಕ್ರಮದ ವೇದಿಕೆಯಲ್ಲಿ ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್, ಸೋಮವಾರಪೇಟೆ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಆದಂ ಕೆ.ಎ., ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷ ಹಾಗೂ ತಹಶೀಲ್ದಾರ್ ರಮೇಶ್ ಬಾಬು, ಕುಶಾಲನಗರ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೆ.ಸಿ. ಅಪ್ಪಣ್ಣ, ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ, ಕಾಗಿನೆಲೆ ಕನಕಗುರು ಪೀಠದ ಧರ್ಮದರ್ಶಿ ನಂಜುಂಡಸ್ವಾಮಿ, ಕೊಡಗು ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಎಚ್.ಎಸ್. ಮಹೇಶ್, ಪುರಸಭೆ ಮುಖ್ಯಾಧಿಕಾರಿ ಕೃಷ್ಣಪ್ರಸಾದ್ ಉಪಸ್ಥಿತರಿದ್ದರು.

ಇವರೊಂದಿಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ಮಾರ್ಗ) ರಾಜ್ಯ ಸಂಘಟನಾ ಸಂಚಾಲಕ ಕೆ.ಬಿ. ರಾಜು, ಜಿಲ್ಲಾ ಸಮಿತಿ ಉಪಾಧ್ಯಕ್ಷ ಸಂಗಮೇಶ್, ನಾಗೇಶ್ ನಾಯಕ್, ವಕೀಲ ಜಯೇಂದ್ರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಶ್ರೀದೇವಿ, ಮುಖ್ಯಾಧಿಕಾರಿ ಮಹೇಶ್ ಕುಮಾರ್, ನಾರಾಯಣಸ್ವಾಮಿ, ದಾಮೋದರ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.

ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡ ಕೊಡಗು ಜಿಲ್ಲಾ ಲೇಖಕರು ಮತ್ತು ಕಲಾವಿದರ ಬಳಗದ ಸದಸ್ಯ ಹಾಗೂ ಶಿಕ್ಷಕರ ಪ್ರಶಸ್ತಿ ಪುರಸ್ಕೃತ ಪ್ರೇಮ್ ಕುಮಾರ್ ಟಿ.ಜಿ. ಅವರು ಕನಕದಾಸರ ಜೀವನ, ಆದರ್ಶಗಳು ಮತ್ತು ಸಮಾಜಕ್ಕೆ ಅವರು ನೀಡಿದ ಸಂದೇಶಗಳ ಕುರಿತು ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಸೋಮವಾರಪೇಟೆ ಮತ್ತು ಕುಶಾಲನಗರ ತಾಲೂಕುಗಳ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ವರ್ಗದವರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಬಿಸಿಎಂ ಇಲಾಖೆಯ ಸಿಬ್ಬಂದಿ ನಿತ್ಯ ಸ್ವಾಗತಿಸಿ ವಂದಿಸಿದರು. ಬಿಸಿಎಂ ನಿಲಯದ ಮೇಲ್ವಿಚಾರಕಿ ಸುಕನ್ಯ, ಸಿಬ್ಬಂದಿಗಳಾದ ಶಿಲ್ಪಾ, ರೇಣುಕಾ ಹಾಗೂ ರಂಗನಾಥ್ ನಾಯಕ್ ಸಹಕರಿಸಿದರು. ಪ್ರಥಮ ದರ್ಜೆ ಸಹಾಯಕ ಮಂಜುನಾಥ್ ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮದ ಆರಂಭದಲ್ಲಿ ಮೌನಶ್ರೀ ತಂಡದ ಬಾಲಕಿಯರಿಂದ ಪ್ರಾರ್ಥನೆ, ವಂದೇ ಮಾತರಂ ಹಾಗೂ ನಾಡಗೀತೆ ಗಾಯನ ನಡೆಯಿತು.

Leave a Reply

Your email address will not be published. Required fields are marked *