ಬ್ರಹ್ಮರಕೊಟ್ಲು ಟೋಲ್ ತೆರವುಗೊಳಿಸದೆ ವಳಾಲ್ನಲ್ಲೂ ಟೋಲ್ ಆರಂಭಿಸಿರುವುದು ಜನರಿಗೆ ಮಾಡಿದ ಅನ್ಯಾಯ
ಮಂಗಳೂರು: ಬ್ರಹ್ಮರಕೊಟ್ಲು ಟೋಲ್ ಗೇಟ್ ವಿರುದ್ಧ ಹೋರಾಟ ನಡೆಸಿದ 30 ಮಂದಿ ಹೋರಾಟಗಾರರ ವಿರುದ್ಧ ಪ್ರಕರಣ ದಾಖಲಿಸಿರುವುದು ಖಂಡನೀಯ ಎಂದು ಎಸ್ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಹೇಳಿದ್ದಾರೆ.



ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಸಮೀಪದ ವಳಾಲ್ನಲ್ಲಿ ಟೋಲ್ ಸಂಗ್ರಹ ಆರಂಭಿಸಿದರೆ ಬ್ರಹ್ಮರಕೊಟ್ಲು ಟೋಲ್ ಗೇಟ್ ತೆರವುಗೊಳಿಸಲಾಗುವುದು ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಭರವಸೆ ನೀಡಿದ್ದರು. ಆದರೆ ಇದೀಗ ಬ್ರಹ್ಮರಕೊಟ್ಲು ಟೋಲ್ ಗೇಟ್ ತೆರವುಗೊಳಿಸದೆ ವಳಾಲ್ನಲ್ಲಿಯೂ ಟೋಲ್ ಸಂಗ್ರಹ ಆರಂಭಿಸಿರುವುದು ಸಂಸದರು ನೀಡಿದ್ದ ಭರವಸೆಗೆ ವಿರುದ್ಧವಾಗಿದೆ ಎಂದು ಆರೋಪಿಸಿದರು.



ಟೋಲ್ ಸಂಗ್ರಹ ಆರಂಭಿಸುವ ಮುನ್ನ ಸಾರ್ವಜನಿಕರಿಗೆ ಸಮರ್ಪಕ ಮಾಹಿತಿ ನೀಡಬೇಕಿತ್ತು. ಆದರೆ ಈಗಾಗಲೇ ಇರುವ ಬ್ರಹ್ಮರಕೊಟ್ಲು ಟೋಲ್ ಗೇಟ್ ಅನ್ನು ಬಂದ್ ಮಾಡದೆ ಮತ್ತೊಂದು ಟೋಲ್ ಆರಂಭಿಸಿರುವುದು ಸಾರ್ವಜನಿಕರಿಗೆ ಅನ್ಯಾಯ ಮಾಡಿದಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.



ಟೋಲ್ ವಿರುದ್ಧ ಪ್ರತಿಭಟನೆ ನಡೆಸುವುದು ಪ್ರತಿಯೊಬ್ಬ ನಾಗರಿಕನ ಸಾಂವಿಧಾನಿಕ ಹಕ್ಕು. ಜನರಿಗೆ ಬೇಡವಾದ ಟೋಲ್ ವಿರುದ್ಧ ಹೋರಾಟ ನಡೆಸಿದವರ ಮೇಲೆ ಪ್ರಕರಣ ದಾಖಲಿಸುವ ಮೂಲಕ ಬಂಟ್ವಾಳ ಪೊಲೀಸರು ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಅನ್ವರ್ ಸಾದತ್ ಆರೋಪಿಸಿದರು.



ಈ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಸಲಾಗುವುದು ಎಂದು ತಿಳಿಸಿದ ಅವರು, ಟೋಲ್ ವಿಚಾರದಲ್ಲಿ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ರಾಜಕೀಯ ನಾಯಕರು ಮೌನ ವಹಿಸಿರುವುದು ದುರದೃಷ್ಟಕರ ಎಂದರು.



ಬಿಜೆಪಿ ನಾಯಕರು ಟೋಲ್ ಸಮಸ್ಯೆಯ ಬಗ್ಗೆ ಧ್ವನಿ ಎತ್ತುವ ಬದಲು ಕೋಮು ವಿಚಾರಗಳಿಗೆ ಆದ್ಯತೆ ನೀಡುತ್ತಿದ್ದಾರೆ. ಕಾಂಗ್ರೆಸ್ ಶಾಸಕರಾದ ಯು.ಟಿ. ಖಾದರ್ ಮತ್ತು ಅಶೋಕ್ ರೈ ಕೂಡ ಈ ವಿಚಾರದಲ್ಲಿ ಧ್ವನಿ ಎತ್ತುತ್ತಿಲ್ಲ. ಕಂಬಳ, ಕೋಳಿ ಅಂಕ ಹಾಗೂ ಸಾಮಾಜಿಕ ಜಾಲತಾಣಗಳ ವಿಡಿಯೋಗಳಿಗೆ ಮಾತ್ರ ಸೀಮಿತವಾಗದೆ ಜನಸಾಮಾನ್ಯರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆಯೂ ಜನಪ್ರತಿನಿಧಿಗಳು ಮಾತನಾಡಬೇಕು ಎಂದು ಅವರು ಟೀಕಿಸಿದರು.




