ಶಾಸಕ ಡಾ. ಮಂತರ್ ಗೌಡ ಸೇರಿದಂತೆ ಸಾವಿರಾರು ಭಕ್ತರು ಭಾಗಿ

ಭಕ್ತರ ಜಯಘೋಷ, ಮಂಗಳವಾದ್ಯಗಳ ನಡುವೆ ವಿಜೃಂಭಣೆಯಿಂದ ಸಾಗಿದ ಗಣಪತಿ ರಥ

ಕುಶಾಲನಗರ: ಕುಶಾಲನಗರದ ಶ್ರೀ ಮಹಾಗಣಪತಿ ದೇವಾಲಯದ 105ನೇ ವರ್ಷದ ವಾರ್ಷಿಕ ರಥೋತ್ಸವ ನವೆಂಬರ್ 27ರ ಶುಕ್ರವಾರದಂದು ಅತ್ಯಂತ ವಿಜೃಂಭಣೆಯಿಂದ ಜರುಗಿತು. ರಥೋತ್ಸವದಲ್ಲಿ ಶಾಸಕ ಡಾ. ಮಂತರ್ ಗೌಡ ಸೇರಿದಂತೆ ಸಾವಿರಾರು ಭಕ್ತರು ಪಾಲ್ಗೊಂಡು ಗಣಪತಿ ದೇವರ ದರ್ಶನ ಪಡೆದು ಭಕ್ತಿ ಸಮರ್ಪಿಸಿದರು.

ರಥೋತ್ಸವದ ಅಂಗವಾಗಿ ದೇವಾಲಯದಲ್ಲಿ ವಿವಿಧ ಧಾರ್ಮಿಕ ಪೂಜಾ ವಿಧಿವಿಧಾನಗಳು, ಅಭಿಷೇಕ ಹಾಗೂ ವಿಶೇಷ ಪೂಜೆಗಳನ್ನು ನೆರವೇರಿಸಲಾಯಿತು. ಬಳಿಕ ದೇವರ ಉತ್ಸವ ಮೂರ್ತಿಯನ್ನು ಮಂಗಳವಾದ್ಯಗಳೊಂದಿಗೆ ದೇವಾಲಯದಿಂದ ಹೊರತಂದು, ಭಕ್ತರ ಜಯಘೋಷಗಳ ನಡುವೆ ಸುಂದರವಾಗಿ ಅಲಂಕರಿಸಲಾಗಿದ್ದ ಭವ್ಯ ರಥದಲ್ಲಿ ಪ್ರತಿಷ್ಠಾಪಿಸಲಾಯಿತು.

ಮಧ್ಯಾಹ್ನ 1 ಗಂಟೆಗೆ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ನಾಡಿನ ವಿವಿಧ ಭಾಗಗಳಿಂದ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಆಗಮಿಸಿದ್ದ ಸಹಸ್ರಾರು ಭಕ್ತರು ಉತ್ಸಾಹದಿಂದ ರಥವನ್ನು ಎಳೆಯುವ ಮೂಲಕ ತಮ್ಮ ಭಕ್ತಿಯನ್ನು ಸಮರ್ಪಿಸಿದರು. ಮಹಾಗಣಪತಿ ದೇವಾಲಯದಿಂದ ರಥಬೀದಿ ಮೂಲಕ ಆಂಜನೇಯ ದೇವಸ್ಥಾನದವರೆಗೆ ರಥ ಸಾಗಿತು.

ಈ ಸಂದರ್ಭದಲ್ಲಿ ಶಾಸಕ ಡಾ. ಮಂತರ್ ಗೌಡ ಅವರು ಭಾಗವಹಿಸಿ ವಿಶೇಷ ಪೂಜೆ ಸಲ್ಲಿಸಿದರು. ದೇವಾಲಯದ ಪ್ರಧಾನ ಅರ್ಚಕ ಆರ್.ಕೆ. ನಾಗೇಂದ್ರ ಬಾಬು ಅವರ ನೇತೃತ್ವದಲ್ಲಿ ವಿವಿಧ ಪೂಜಾ ವಿಧಿವಿಧಾನಗಳು ನೆರವೇರಿದವು. ದೇವಾಲಯ ಸಮಿತಿ ಅಧ್ಯಕ್ಷ ಎಂ.ಕೆ. ದಿನೇಶ್ ಅವರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆದವು.

ರಥೋತ್ಸವದ ಆರಂಭಕ್ಕೂ ಮುನ್ನ ವಿವಿಧ ಊರುಗಳಿಂದ ಆಗಮಿಸಿದ್ದ ಗೋವುಗಳಿಗೆ ಗೋಪೂಜೆ ನೆರವೇರಿಸಲಾಯಿತು. ಇದೇ ವೇಳೆ ಅಯ್ಯಪ್ಪ ಮಾಲಾಧಾರಿಗಳು ಗಣಪತಿ ದೇವಾಲಯದ ಮುಂಭಾಗದ ರಸ್ತೆಯಲ್ಲಿ ಕರ್ಪೂರದಿಂದ ಓಂ ಆಕಾರ ರಚಿಸಿ, ಕರ್ಪೂರ ಬೆಳಗಿಸಿ ಪ್ರಾರ್ಥನೆ ಸಲ್ಲಿಸಿದರು. ಮಾಲಾಧಾರಿಗಳ ಲಯಬದ್ಧ ಭಜನೆ ಭಕ್ತರ ಗಮನ ಸೆಳೆಯಿತು.

ಮತ್ತೊಂದೆಡೆ, ರಥ ಸಾಗುವ ಮಾರ್ಗದ ಇಕ್ಕೆಲಗಳಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ಹಣ್ಣುಕಾಯಿ ಸೇವೆ ಸಲ್ಲಿಸಲು ಮುಗಿಬಿದ್ದರು. ಹರಕೆ ಹೊತ್ತಿದ್ದ ಭಕ್ತರು ರಥೋತ್ಸವದ ಸಂದರ್ಭದಲ್ಲಿ ರಸ್ತೆಯುದ್ದಕ್ಕೂ ಸಾವಿರಾರು ಈಡುಗಾಯಿಗಳನ್ನು ಒಡೆದು ಭಕ್ತಿ ಸಮರ್ಪಿಸಿದರು.

ರಥೋತ್ಸವದಲ್ಲಿ ದೇವಾಲಯ ಸಮಿತಿಯ ಗೌರವಾಧ್ಯಕ್ಷ ವಿ.ಎನ್. ವಸಂತಕುಮಾರ್, ಉಪಾಧ್ಯಕ್ಷ ಆರ್. ಬಾಬು, ಕಾರ್ಯದರ್ಶಿ ಬಿ.ಕೆ. ಮುತ್ತಣ್ಣ, ಖಜಾಂಚಿ ಎಸ್.ಕೆ. ಸತೀಶ್, ಸಹ ಕಾರ್ಯದರ್ಶಿ ಕೆ.ಎನ್. ದೇವರಾಜ್, ನಿರ್ದೇಶಕರಾದ ಪುಂಡರೀಕಾಕ್ಷ, ವಿ.ಪಿ. ಶಶಿಧರ್, ಟಿ.ಆರ್. ಶರವಣ ಕುಮಾರ್, ಹೆಚ್.ಎಂ. ಚಂದ್ರು ಸೇರಿದಂತೆ ವಿಶೇಷ ಆಹ್ವಾನಿತರು ಉಪಸ್ಥಿತರಿದ್ದರು.

ರಥೋತ್ಸವದಲ್ಲಿ ಪಾಲ್ಗೊಂಡಿದ್ದ ಸಾವಿರಾರು ಭಕ್ತರಿಗೆ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಅನ್ನದಾನದ ವ್ಯವಸ್ಥೆ ಕಲ್ಪಿಸಲಾಗಿತ್ತು. ಭಕ್ತಿಭಾವ, ಧಾರ್ಮಿಕ ಸಂಭ್ರಮ ಹಾಗೂ ಸಾಂಪ್ರದಾಯಿಕ ಆಚರಣೆಗಳೊಂದಿಗೆ 105ನೇ ವರ್ಷದ ಶ್ರೀ ಮಹಾಗಣಪತಿ ದೇವಾಲಯದ ರಥೋತ್ಸವ ಯಶಸ್ವಿಯಾಗಿ ಸಂಪನ್ನಗೊಂಡಿತು.

Leave a Reply

Your email address will not be published. Required fields are marked *