ಬೇಡಿಕೆಗಳಿಗೆ ಸ್ಪಂದಿಸದಿದ್ದಲ್ಲಿ ಬೀದಿಗಿಳಿದು ಹೋರಾಟದ ಎಚ್ಚರಿಕೆ

ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಕೊಡಗು ಜಿಲ್ಲಾ ಜೆಡಿಎಸ್ ಬೆಂಬಲ

ಮಡಿಕೇರಿ: ಗ್ರಾಮೀಣ ಹಾಗೂ ನಗರ ಪ್ರದೇಶಗಳ ಆರೋಗ್ಯ ವ್ಯವಸ್ಥೆಯ ಪ್ರಮುಖ ಕೊಂಡಿಯಾಗಿ ಹಗಲಿರುಳು ಶ್ರಮಿಸುತ್ತಿರುವ ಆಶಾ ಕಾರ್ಯಕರ್ತೆಯರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಕೊಡಗು ಜಿಲ್ಲಾ ಜಾತ್ಯತೀತ ಜನತಾದಳದ (ಜೆಡಿಎಸ್) ಜಿಲ್ಲಾಧ್ಯಕ್ಷ ಎಚ್.ಡಿ. ಪ್ರವೀಣ್ ಆರೋಪಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಜೀವದ ಹಂಗು ತೊರೆದು ಸೇವೆ ಸಲ್ಲಿಸಿದ ಆಶಾ ಕಾರ್ಯಕರ್ತೆಯರು, ಇಂದಿಗೂ ವಿವಿಧ ಆರೋಗ್ಯ ಅಭಿಯಾನಗಳು ಹಾಗೂ ಜನಜಾಗೃತಿ ಕಾರ್ಯಕ್ರಮಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಆದರೆ, ಅವರ ಸೇವೆಗೆ ತಕ್ಕ ಗೌರವಧನ ದೊರೆಯುತ್ತಿಲ್ಲ. ಚುನಾವಣೆಗೂ ಮುನ್ನ ಹಲವು ಭರವಸೆಗಳನ್ನು ನೀಡಿದ್ದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಅವರ ಬೇಡಿಕೆಗಳನ್ನು ನಿರ್ಲಕ್ಷಿಸಿದೆ ಎಂದು ದೂರಿದ್ದಾರೆ.

ಗೌರವಧನ ಹೆಚ್ಚಳಕ್ಕೆ ಆಗ್ರಹ:

ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಆಶಾ ಕಾರ್ಯಕರ್ತೆಯರ ಗೌರವಧನವನ್ನು ಹೆಚ್ಚಿಸಬೇಕೆಂಬ ಬೇಡಿಕೆ ಹಲವು ವರ್ಷಗಳಿಂದ ಕೇಳಿಬರುತ್ತಿದೆ. ಈ ಕುರಿತು ಹಲವು ಬಾರಿ ಪ್ರತಿಭಟನೆ ನಡೆಸಿ ಸರ್ಕಾರದ ಗಮನ ಸೆಳೆದಿದ್ದರೂ, ಸೂಕ್ತ ಕ್ರಮ ಕೈಗೊಳ್ಳದೆ ಭರವಸೆಗಳ ಮೂಲಕ ಕಾಲಹರಣ ಮಾಡಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಸಕಾಲದಲ್ಲಿ ಗೌರವಧನ ಪಾವತಿಗೆ ಒತ್ತಾಯ:

ಆಶಾ ಕಾರ್ಯಕರ್ತೆಯರಿಗೆ ಸಕಾಲದಲ್ಲಿ ಗೌರವಧನ ಪಾವತಿಯಾಗದಿರುವುದರಿಂದ ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ. ತಿಂಗಳುಗಟ್ಟಲೆ ಬಾಕಿ ಉಳಿಯುವ ಗೌರವಧನದಿಂದ ಅವರ ಕುಟುಂಬ ನಿರ್ವಹಣೆಗೆ ತೊಂದರೆಯಾಗುತ್ತಿದೆ. ಆದ್ದರಿಂದ ಬಾಕಿ ಇರುವ ಗೌರವಧನವನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಹೆಚ್ಚುವರಿ ಕೆಲಸದ ಒತ್ತಡ:

ನಿಗದಿತ ಆರೋಗ್ಯ ಸೇವೆಗಳ ಜೊತೆಗೆ ವಿವಿಧ ಸಮೀಕ್ಷೆಗಳು ಹಾಗೂ ಹೆಚ್ಚುವರಿ ಜವಾಬ್ದಾರಿಗಳನ್ನು ಆಶಾ ಕಾರ್ಯಕರ್ತೆಯರಿಗೆ ವಹಿಸಲಾಗುತ್ತಿದೆ. ಇದರಿಂದ ಅವರ ಮೇಲೆ ಕೆಲಸದ ಒತ್ತಡ ಹೆಚ್ಚಾಗುತ್ತಿದ್ದು, ಈ ಕುರಿತು ಸರ್ಕಾರ ಸೂಕ್ತ ಗಮನ ಹರಿಸಬೇಕಿದೆ ಎಂದು ಪ್ರವೀಣ್ ತಿಳಿಸಿದ್ದಾರೆ.

ಕೊಡಗು ಜಿಲ್ಲೆಯಂತಹ ಗುಡ್ಡಗಾಡು ಪ್ರದೇಶಗಳಲ್ಲಿ ಮಳೆ, ಗಾಳಿ ಎನ್ನದೆ ಮನೆ ಮನೆಗೆ ತೆರಳಿ ಆರೋಗ್ಯ ಸೇವೆ ಒದಗಿಸುವ ಆಶಾ ಕಾರ್ಯಕರ್ತೆಯರ ಸೇವೆಯನ್ನು ಸರ್ಕಾರ ಗುರುತಿಸಬೇಕು. ಅವರ ಬಾಕಿ ಇರುವ ಗೌರವಧನವನ್ನು ಕೂಡಲೇ ಬಿಡುಗಡೆ ಮಾಡುವುದರೊಂದಿಗೆ ಮಾಸಿಕ ಗೌರವಧನವನ್ನು ಗಣನೀಯವಾಗಿ ಹೆಚ್ಚಿಸಬೇಕು ಎಂದು ಆಗ್ರಹಿಸಿದ್ದಾರೆ.

ಸರ್ಕಾರ ಕೂಡಲೇ ಆಶಾ ಕಾರ್ಯಕರ್ತೆಯರ ಸಮಸ್ಯೆಗಳಿಗೆ ಸ್ಪಂದಿಸಿ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ, ಕೊಡಗು ಜಿಲ್ಲಾ ಜೆಡಿಎಸ್ ವತಿಯಿಂದ ಅವರ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡಲಾಗುವುದು. ಅಲ್ಲದೆ, ಕಾರ್ಯಕರ್ತೆಯರ ಪರವಾಗಿ ಬೀದಿಗಿಳಿದು ಹೋರಾಟ ನಡೆಸಲಾಗುವುದು ಎಂದು ಎಚ್.ಡಿ. ಪ್ರವೀಣ್ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

Leave a Reply

Your email address will not be published. Required fields are marked *