ಸಂಚಾರಿ ನಿಯಮ ಹಾಗೂ ಸೈಬರ್ ಅಪರಾಧಗಳ ಕುರಿತು ಎಸ್ಐ ಉದಯ ರವಿ ಅವರಿಂದ ಕಾನೂನು ಅರಿವು
ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದ ಪೊಲೀಸ್ ಇಲಾಖೆ
ಅರಂತೋಡು: ಸುಳ್ಯ ಪೊಲೀಸ್ ಠಾಣೆಯ ವತಿಯಿಂದ ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಅರಂತೋಡು ಗ್ರಾಮ ಪಂಚಾಯಿತಿಯಲ್ಲಿ ನವೆಂಬರ್ 27ರಂದು ಪೊಲೀಸ್ ಗ್ರಾಮ ಸಭೆ ನಡೆಯಿತು. ಸಭೆಯಲ್ಲಿ ಸ್ಥಳೀಯ ಸಾರ್ವಜನಿಕರು ಭಾಗವಹಿಸಿ ಸಂಚಾರಿ ನಿಯಮಗಳು ಹಾಗೂ ಸೈಬರ್ ಅಪರಾಧಗಳ ಕುರಿತು ಕಾನೂನು ಅರಿವು ಪಡೆದುಕೊಂಡರು.



ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸುಳ್ಯ ಪೊಲೀಸ್ ಠಾಣೆಯ ಉಪನಿರೀಕ್ಷಕ ಉದಯ ರವಿ ಅವರು ಸಂಚಾರಿ ನಿಯಮಗಳ ಪಾಲನೆಯ ಮಹತ್ವದ ಕುರಿತು ಮಾಹಿತಿ ನೀಡಿದರು.



18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಪೋಷಕರು ಯಾವುದೇ ವಾಹನ ಚಲಾಯಿಸಲು ಅವಕಾಶ ನೀಡಬಾರದು. ವಾಹನ ಚಾಲನೆ ಮಾಡುವವರು ಕಡ್ಡಾಯವಾಗಿ ಚಾಲನಾ ಪರವಾನಗಿ ಹೊಂದಿರಬೇಕು. ಸಂಚಾರಿ ನಿಯಮಗಳನ್ನು ಪ್ರತಿಯೊಬ್ಬರೂ ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಅವರು ತಿಳಿಸಿದರು.



ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸುವುದರಿಂದ ಅಪಘಾತ ಸಂಭವಿಸಿದ ಸಂದರ್ಭದಲ್ಲಿ ಜೀವಕ್ಕೆ ಅಪಾಯ ಉಂಟಾಗುವ ಸಾಧ್ಯತೆ ಹೆಚ್ಚಿರುತ್ತದೆ. ಆದ್ದರಿಂದ ಪ್ರತಿಯೊಬ್ಬ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ವಾಹನ ಚಾಲನೆ ಮಾಡುವಾಗ ನಿರ್ಲಕ್ಷ್ಯ ವಹಿಸದೆ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸುವ ಮೂಲಕ ಅಮೂಲ್ಯ ಜೀವಗಳನ್ನು ರಕ್ಷಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.



ಇದೇ ಸಂದರ್ಭದಲ್ಲಿ ಸಮಾಜದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸೈಬರ್ ಅಪರಾಧಗಳ ಬಗ್ಗೆಯೂ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದರು. ಅಪರಿಚಿತ ವ್ಯಕ್ತಿಗಳಿಂದ ಬರುವ ಕರೆಗಳು, ಸಂದೇಶಗಳು ಹಾಗೂ ಅನುಮಾನಾಸ್ಪದ ಲಿಂಕ್ಗಳ ಬಗ್ಗೆ ಎಚ್ಚರಿಕೆ ವಹಿಸಬೇಕು. ಯಾವುದೇ ಆಮಿಷಗಳಿಗೆ ಒಳಗಾಗಿ ತಮ್ಮ ಬ್ಯಾಂಕ್ ಖಾತೆ ವಿವರ, ಒಟಿಪಿ ಹಾಗೂ ವೈಯಕ್ತಿಕ ಮಾಹಿತಿಯನ್ನು ಅಪರಿಚಿತರಿಗೆ ನೀಡಬಾರದು ಎಂದು ತಿಳಿಸಿದರು.



ಗ್ರಾಮ ವ್ಯಾಪ್ತಿಯಲ್ಲಿ ಯಾವುದೇ ಕಾನೂನುಬಾಹಿರ ಚಟುವಟಿಕೆಗಳು ಅಥವಾ ಅನುಮಾನಾಸ್ಪದ ಘಟನೆಗಳು ಕಂಡುಬಂದಲ್ಲಿ ಸಾರ್ವಜನಿಕರು ತಕ್ಷಣ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ಪೊಲೀಸ್ ಇಲಾಖೆಯೊಂದಿಗೆ ಸಾರ್ವಜನಿಕರು ಸಹಕರಿಸುವ ಮೂಲಕ ಗ್ರಾಮದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಕೈಜೋಡಿಸಬೇಕು ಎಂದು ಮನವಿ ಮಾಡಿದರು.


ಸಭೆಯಲ್ಲಿ ಅಶ್ರಫ್ ಗುಂಡಿ, ದಯಾನಂದ ಕುರುಂಜಿ ಸೇರಿದಂತೆ ಸ್ಥಳೀಯ ಆಟೋ ಚಾಲಕರು, ಅಂಗಡಿ ಮತ್ತು ಹೋಟೆಲ್ ಮಾಲಕರು ಹಾಗೂ ನೂರಾರು ಮಂದಿ ಸಾರ್ವಜನಿಕರು ಭಾಗವಹಿಸಿದ್ದರು.
ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಲಾದ ಈ ಗ್ರಾಮ ಸಭೆಯು ಸಾರ್ವಜನಿಕರಲ್ಲಿ ಕಾನೂನು ಅರಿವು ಹಾಗೂ ರಸ್ತೆ ಸುರಕ್ಷತೆ ಮತ್ತು ಸೈಬರ್ ಅಪರಾಧಗಳ ಕುರಿತು ಜಾಗೃತಿ ಮೂಡಿಸುವಲ್ಲಿ ಮಹತ್ವದ ವೇದಿಕೆಯಾಯಿತು.




