ಸುಳ್ಯ: ಅರಂತೋಡು ಮತ್ತು ತೊಡಿಕಾನ ಗ್ರಾಮಗಳ ವ್ಯಾಪ್ತಿಯಲ್ಲಿ ನಿರಂತರವಾಗಿ ಎದುರಾಗುತ್ತಿರುವ ವಿದ್ಯುತ್ ಕಡಿತ ಹಾಗೂ ಮೆಸ್ಕಾಂ ಲೈನ್‌ಮೆನ್‌ಗಳ ಕೊರತೆಯನ್ನು ನೀಗಿಸುವಂತೆ ಆಗ್ರಹಿಸಿ, ಅರಂತೋಡು ಮತ್ತು ತೊಡಿಕಾನ ಗ್ರಾಮ ಕಾಂಗ್ರೆಸ್ ಸಮಿತಿಗಳ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ರಾಮಯ್ಯ ಅವರಿಗೆ ಸುಳ್ಯದಲ್ಲಿ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಕಾಂಗ್ರೆಸ್ ಮುಖಂಡರು ಮಾತನಾಡಿ, ಅರಂತೋಡು ಮತ್ತು ತೊಡಿಕಾನ ಭಾಗಗಳಲ್ಲಿ ಯಾವುದೇ ಮುನ್ಸೂಚನೆಯಿಲ್ಲದೆ ನಿರಂತರವಾಗಿ ವಿದ್ಯುತ್ ಕಡಿತಗೊಳ್ಳುತ್ತಿದ್ದು, ಇದರಿಂದ ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ರೈತರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ತಿಳಿಸಿದರು. ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ಸಮಯದಲ್ಲಿ ವಿದ್ಯುತ್ ಪೂರೈಕೆಯಾಗದ ಕಾರಣ ಬೆಳೆಗಳಿಗೆ ಹಾನಿಯಾಗುವ ಆತಂಕವೂ ಎದುರಾಗಿದೆ ಎಂದು ಅವರು ಗಮನ ಸೆಳೆದರು.

ಇದಲ್ಲದೆ, ವಿದ್ಯುತ್ ಮಾರ್ಗಗಳ ದುರಸ್ತಿ ಮತ್ತು ನಿರ್ವಹಣೆಗೆ ಅಗತ್ಯವಿರುವಷ್ಟು ಲೈನ್‌ಮೆನ್‌ಗಳಿಲ್ಲದೆ ಸಮಸ್ಯೆ ಮತ್ತಷ್ಟು ಗಂಭೀರವಾಗಿದೆ. ಗಾಳಿ-ಮಳೆಯಿಂದ ವಿದ್ಯುತ್ ಮಾರ್ಗಗಳಿಗೆ ಹಾನಿಯಾದಾಗ ಅಥವಾ ತಾಂತ್ರಿಕ ದೋಷಗಳು ಉಂಟಾದಾಗ, ಸಿಬ್ಬಂದಿ ಕೊರತೆಯಿಂದಾಗಿ ದುರಸ್ತಿ ಕಾರ್ಯ ವಿಳಂಬವಾಗುತ್ತಿದೆ. ಇದರಿಂದ ಗ್ರಾಮಸ್ಥರು ಕೆಲವೊಮ್ಮೆ ದಿನಗಟ್ಟಲೆ ವಿದ್ಯುತ್ ಇಲ್ಲದೆ ಕಳೆಯುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಮುಖಂಡರು ದೂರಿದರು.

ಆದ್ದರಿಂದ, ಸಂಬಂಧಪಟ್ಟ ಮೆಸ್ಕಾಂ ಉನ್ನತಾಧಿಕಾರಿಗಳೊಂದಿಗೆ ಚರ್ಚಿಸಿ ಅರಂತೋಡು ಮತ್ತು ತೊಡಿಕಾನ ಗ್ರಾಮಗಳಿಗೆ ಹೆಚ್ಚುವರಿ ಲೈನ್‌ಮೆನ್‌ಗಳನ್ನು ತಕ್ಷಣ ನಿಯೋಜಿಸಬೇಕು ಹಾಗೂ ನಿರಂತರ ವಿದ್ಯುತ್ ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಯಿತು.

ಮನವಿ ಸ್ವೀಕರಿಸಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ರಾಮಯ್ಯ ಅವರು, ಗ್ರಾಮಸ್ಥರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಗಮನಹರಿಸಿ, ಸಂಬಂಧಪಟ್ಟ ಮೆಸ್ಕಾಂ ಅಧಿಕಾರಿಗಳು ಹಾಗೂ ಇಲಾಖೆಯ ಸಚಿವರೊಂದಿಗೆ ಚರ್ಚಿಸಿ ಸಮಸ್ಯೆ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಅರಂತೋಡು ಗ್ರಾಮ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಾಲಕೃಷ್ಣ ರೈ, ಪ್ರಧಾನ ಕಾರ್ಯದರ್ಶಿ ಅಮೀರ್ ಕುಕ್ಕುಂಬಳ, ಮಾಜಿ ಗ್ರಾಮ ಪಂಚಾಯತ್ ಸದಸ್ಯ ರವೀಂದ್ರ ಪೂಜಾರಿ, ಮೆಸ್ಕಾಂ ಸಲಹಾ ಸಮಿತಿ ಸದಸ್ಯ ತಾಜುದ್ದೀನ್ ಅರಂತೋಡು ಜುಬೇರ್, ವೆಂಕಟರಮಣ ಮೆರ್ಕಜೆ, ಹರ್ಷಿತ್ ಕೊಡಂಕೆರಿ, ಶ್ರೀನಿವಾಸ ಪೆತ್ತಜೆ, ಮುಸ್ತಫಾ, ಯತೀಶ್ ಬಾಜಿನಡ್ಕ, ಅಬೂಬಕ್ಕರ್ ಪಾರೆಕ್ಕಲ್ ಸೇರಿದಂತೆ ಪ್ರಮುಖ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ : ತಾಜುದ್ದೀನ್ ಎಸ್ ಅರಂತೋಡು

Leave a Reply

Your email address will not be published. Required fields are marked *