ನಾಟಕ ಪ್ರದರ್ಶನದ ವೇಳೆ ನಡೆದ ಗಲಾಟೆ ಹಾಗೂ ದೂರು-ಪ್ರತಿದೂರುಗಳ ಹಿನ್ನೆಲೆಯಲ್ಲಿ ಬನಶಂಕರಿ ಪೊಲೀಸರ ಕ್ರಮ. ಮುಂದಿನ ಆದೇಶದವರೆಗೆ ಸುಚಿತ್ರ ಸಿನಿಮಾ ಮತ್ತು ಸಾಂಸ್ಕೃತಿಕ ಅಕಾಡೆಮಿಯಲ್ಲಿ ಯಾವುದೇ ನಾಟಕ ಪ್ರದರ್ಶಿಸದಂತೆ ಸೂಚನೆ.
ಬೆಂಗಳೂರು, ನವೆಂಬರ್ 2: ‘ಗಾಂಧಿ ಹತ್ಯೆಯ ಸತ್ಯ’ ನಾಟಕ ಪ್ರದರ್ಶನದ ವೇಳೆ ನಡೆದ ಗಲಾಟೆ ಇದೀಗ ಮತ್ತೊಂದು ತಿರುವು ಪಡೆದುಕೊಂಡಿದೆ. ಬೆಂಗಳೂರಿನ ಬನಶಂಕರಿಯಲ್ಲಿರುವ ಸುಚಿತ್ರ ಸಿನಿಮಾ ಮತ್ತು ಸಾಂಸ್ಕೃತಿಕ ಅಕಾಡೆಮಿಯಲ್ಲಿ ಮುಂದಿನ ಆದೇಶದವರೆಗೆ ಯಾವುದೇ ನಾಟಕ ಪ್ರದರ್ಶನ ನಡೆಸದಂತೆ ಬನಶಂಕರಿ ಪೊಲೀಸರು ತಾತ್ಕಾಲಿಕ ನಿರ್ಬಂಧ ವಿಧಿಸಿದ್ದಾರೆ.
ಅಕ್ಟೋಬರ್ 31ರಂದು ಅಕಾಡೆಮಿಯಲ್ಲಿ ನಡೆದ ‘ಗಾಂಧಿ ಹತ್ಯೆಯ ಸತ್ಯ’ ನಾಟಕ ಪ್ರದರ್ಶನದ ವೇಳೆ ಗಲಾಟೆ ನಡೆದಿತ್ತು. ಈ ಸಂಬಂಧ ಎರಡೂ ಕಡೆಯಿಂದ ದೂರು ಹಾಗೂ ಪ್ರತಿದೂರುಗಳು ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಪ್ರಕರಣದ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ನಾಟಕ ಪ್ರದರ್ಶನಗಳನ್ನು ತಾತ್ಕಾಲಿಕವಾಗಿ ಮುಂದೂಡುವಂತೆ ಪೊಲೀಸರು ಸೂಚಿಸಿದ್ದಾರೆ.
ಪೊಲೀಸರ ಆದೇಶದಲ್ಲಿ ಏನಿದೆ?
ಸುಚಿತ್ರ ಸಿನಿಮಾ ಮತ್ತು ಸಾಂಸ್ಕೃತಿಕ ಅಕಾಡೆಮಿಯಲ್ಲಿ ಅಕ್ಟೋಬರ್ 31ರಂದು ನಡೆದ ನಾಟಕ ಪ್ರದರ್ಶನಕ್ಕೆ ಸಂಬಂಧಿಸಿದಂತೆ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ಮತ್ತು ಪ್ರತಿದೂರುಗಳು ದಾಖಲಾಗಿವೆ. ಪ್ರಕರಣದ ತನಿಖೆ ಪ್ರಗತಿಯಲ್ಲಿರುವುದರಿಂದ ಮುಂದಿನ ಆದೇಶದವರೆಗೆ ಅಕಾಡೆಮಿಯಲ್ಲಿ ಯಾವುದೇ ನಾಟಕ ಪ್ರದರ್ಶನ ನಡೆಸಬಾರದು ಎಂದು ಪೊಲೀಸರು ಸೂಚಿಸಿದ್ದಾರೆ.
ಪೊಲೀಸರ ಸೂಚನೆಯನ್ನು ಉಲ್ಲಂಘಿಸಿ ನಾಟಕ ಪ್ರದರ್ಶನ ನಡೆಸಿದರೆ ಹಾಗೂ ಇದರಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾದರೆ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಅಕ್ಟೋಬರ್ 31ರಂದು ಸುಚಿತ್ರ ಅಕಾಡೆಮಿಯಲ್ಲಿ ನಡೆದಿದ್ದೇನು?
ಅಕ್ಟೋಬರ್ 31ರಂದು ಬನಶಂಕರಿಯ ಸುಚಿತ್ರ ಸಿನಿಮಾ ಮತ್ತು ಸಾಂಸ್ಕೃತಿಕ ಅಕಾಡೆಮಿಯಲ್ಲಿ ‘ಗಾಂಧಿ ಹತ್ಯೆಯ ಸತ್ಯ’ ನಾಟಕ ಪ್ರದರ್ಶನ ಆಯೋಜಿಸಲಾಗಿತ್ತು. ಈ ವೇಳೆ ನಾಟಕದಲ್ಲಿ ಮಹಾತ್ಮ ಗಾಂಧೀಜಿ ವಿರುದ್ಧ ಆಕ್ಷೇಪಾರ್ಹ ಸಂಭಾಷಣೆಗಳನ್ನು ಬಳಸಲಾಗಿದೆ ಎಂದು ಆರೋಪಿಸಿ ಗಲಾಟೆ ನಡೆದಿತ್ತು.
ಮೈಸೂರು ರಂಗಾಯಣದ ಮಾಜಿ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಅವರ ಮುಖಕ್ಕೆ ಮಸಿ ಬಳಿಯಲಾಗಿತ್ತು. ಬಳಿಕ ಮಾತಿನ ಚಕಮಕಿ ತೀವ್ರಗೊಂಡು ಅವರನ್ನು ಎಳೆದಾಡಲಾಗಿದೆ ಎಂಬ ಆರೋಪವೂ ಕೇಳಿಬಂದಿತ್ತು.
ಘಟನೆಗೆ ಸಂಬಂಧಿಸಿದಂತೆ ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ಮತ್ತು ಪ್ರತಿದೂರುಗಳು ದಾಖಲಾಗಿವೆ.
ಈ ಬೆಳವಣಿಗೆಯ ಬೆನ್ನಲ್ಲೇ ಪೊಲೀಸರು ಸುಚಿತ್ರ ಅಕಾಡೆಮಿಯಲ್ಲಿ ನಾಟಕ ಪ್ರದರ್ಶನಗಳಿಗೆ ತಾತ್ಕಾಲಿಕ ನಿರ್ಬಂಧ ವಿಧಿಸಿದ್ದು, ಮುಂದಿನ ಆದೇಶದವರೆಗೆ ಈ ನಿರ್ಬಂಧ ಮುಂದುವರಿಯಲಿದೆ.
