ಉಡುಪಿ: ಜಿಲ್ಲೆಯಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿರುವ ಪ್ರದೀಪ್ ಪೂಜಾರಿ ಆತ್ಮಹತ್ಯೆ ಹಾಗೂ ಅದಕ್ಕೆ ಸಂಬಂಧಿಸಿದ ಪ್ರಕರಣಗಳಿಗೆ ಸಂಬಂಧಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಮಹತ್ವದ ಸ್ಪಷ್ಟನೆ ನೀಡಿದ್ದಾರೆ. ಅತ್ಯಾಚಾರ ಸಂತ್ರಸ್ತೆಯ ಫೋಟೋ ಹಾಗೂ ಖಾಸಗಿ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಈಗಾಗಲೇ ಸಂತ್ರಸ್ತೆಯ ಫೋಟೋಗಳನ್ನು ಹಂಚಿಕೊಂಡಿರುವ 150 ಸಾಮಾಜಿಕ ಜಾಲತಾಣಗಳ ಖಾತೆಗಳನ್ನು ಪತ್ತೆಹಚ್ಚಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಕರಣದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ರೀತಿಯ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ, ಇದುವರೆಗೆ ನಡೆದ ಇಲಾಖಾ ತನಿಖೆಯಲ್ಲಿ ಲಭ್ಯವಾದ ಸಾಕ್ಷ್ಯಗಳು ಹಾಗೂ ವಾಸ್ತವಾಂಶಗಳನ್ನು ಮಾಧ್ಯಮಗಳ ಮುಂದೆ ಹಂಚಿಕೊಂಡಿದ್ದಾರೆ.

ಸಂತ್ರಸ್ತೆಯ ದೂರಿನ ಆಧಾರದಲ್ಲಿ ಮೂರು ಪ್ರಕರಣ ದಾಖಲು!

2025ರ ನವೆಂಬರ್ 10ರಂದು ಸಂತ್ರಸ್ತೆ ಸ್ಕೂಟರ್‌ನಲ್ಲಿ ತೆರಳುತ್ತಿದ್ದಾಗ ಕಾರಿನಲ್ಲಿ ಬಂದ ಪ್ರದೀಪ್ ಪೂಜಾರಿ ಆಕೆಯನ್ನು ಅಡ್ಡಗಟ್ಟಿ, ತನ್ನನ್ನು ಮದುವೆಯಾಗಬೇಕು. ಇಲ್ಲವಾದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪ್ರದೀಪ್ ಪೂಜಾರಿಯನ್ನು ಬಂಧಿಸಲಾಗಿತ್ತು.

ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಪ್ರದೀಪ್ ಪೂಜಾರಿ, 2025ರ ನವೆಂಬರ್ 29ರಂದು ಬೆಳಗ್ಗೆ ಸಂತ್ರಸ್ತೆ ಶಾಲೆಗೆ ಕೆಲಸಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ದೊಡ್ಡಪಾದೆ ಪ್ರದೇಶದಲ್ಲಿ ಆಕೆಯನ್ನು ಅರಣ್ಯದೊಳಗೆ ಎಳೆದುಕೊಂಡು ಹೋಗಿ, ತಲೆಯ ಮೇಲೆ ಕಲ್ಲು ಹಾಕುವುದಾಗಿ ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿತ್ತು.

ಈ ಸಂಬಂಧ ಮತ್ತೊಂದು ಪ್ರಕರಣ ದಾಖಲಾಗಿದ್ದು, ಕೇವಲ ಸಂತ್ರಸ್ತೆಯ ಹೇಳಿಕೆಯ ಆಧಾರದಲ್ಲಿ ಮಾತ್ರವಲ್ಲದೆ, ವೈದ್ಯಕೀಯ ವರದಿ ಹಾಗೂ ತಜ್ಞರ ವೈಜ್ಞಾನಿಕ ಸಾಕ್ಷ್ಯಗಳ ಆಧಾರದಲ್ಲಿಯೂ ಲೈಂಗಿಕ ದೌರ್ಜನ್ಯ ನಡೆದಿರುವುದು ದೃಢಪಟ್ಟಿತ್ತು. ಹೀಗಾಗಿ ಪ್ರಕರಣದಲ್ಲಿ ಆರೋಪಪಟ್ಟಿ ಸಲ್ಲಿಸಲಾಗಿದೆ ಎಂದು ಎಸ್‌ಪಿ ತಿಳಿಸಿದ್ದಾರೆ.

ಘಟನೆಯ ಬಳಿಕ ಸಂತ್ರಸ್ತೆ ಮೂರು ದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಆಕೆಯ ಮೈಮೇಲಿನ ಗಾಯಗಳು ಹಾಗೂ ವೈದ್ಯಕೀಯ ಸಾಕ್ಷ್ಯಗಳನ್ನೂ ತನಿಖೆಯಲ್ಲಿ ಪರಿಗಣಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.

ಸಂತ್ರಸ್ತೆಯ ಮನೆಗೆ ನುಗ್ಗಿ ಹತ್ಯೆಗೆ ಯತ್ನ ಆರೋಪ!

ಮೂರನೇ ಪ್ರಕರಣಕ್ಕೆ ಸಂಬಂಧಿಸಿದಂತೆ, 2026ರ ನವೆಂಬರ್ 28ರಂದು ರಾತ್ರಿ ಸಂತ್ರಸ್ತೆ ಸ್ನಾನ ಮುಗಿಸಿ ಹೊರಬರುತ್ತಿದ್ದ ವೇಳೆ ಪ್ರದೀಪ್ ಪೂಜಾರಿ ಖಾರದ ಪುಡಿ, ಬಟ್ಟೆ ಸೇರಿದಂತೆ ಇತರ ವಸ್ತುಗಳನ್ನು ತೆಗೆದುಕೊಂಡು ಬಂದು ಹತ್ಯೆಗೆ ಯತ್ನಿಸಿದ್ದಾನೆ ಎಂಬ ಆರೋಪವಿದೆ.

ಈ ವೇಳೆ ಸಂತ್ರಸ್ತೆಯ ತಾಯಿಯ ಮೇಲೆಯೂ ಖಾರದ ಪುಡಿ ಎರಚಿದ್ದಾನೆ ಎನ್ನಲಾಗಿದೆ. ಘಟನೆಯನ್ನು ಗಮನಿಸಿದ ಸ್ಥಳೀಯರು ಸ್ಥಳಕ್ಕೆ ಧಾವಿಸಿದಾಗ, ಈ ಹಿಂದೆ ಸಂತ್ರಸ್ತೆಯೊಂದಿಗೆ ಸಂಬಂಧದಲ್ಲಿದ್ದ ಸಂದರ್ಭದಲ್ಲಿ ತೆಗೆದಿದ್ದ ಖಾಸಗಿ ಫೋಟೋಗಳನ್ನು ಪ್ರದೀಪ್ ಪೂಜಾರಿ ತೋರಿಸಿದ್ದಾನೆ ಎಂದು ಎಸ್‌ಪಿ ತಿಳಿಸಿದ್ದಾರೆ.

ಇದಲ್ಲದೆ, ಸಂತ್ರಸ್ತೆ ರೆಕಾರ್ಡ್ ಮಾಡಿದ್ದ ಆಡಿಯೋದಲ್ಲಿಯೂ ಪ್ರದೀಪ್ ಪೂಜಾರಿ ಕೊಲೆ ಮಾಡುವ ಉದ್ದೇಶದಿಂದ ಬಂದಿರುವುದಾಗಿ ಹೇಳಿರುವುದು ಸ್ಪಷ್ಟವಾಗಿ ಕೇಳಿಬರುತ್ತದೆ ಎಂದು ವಿವರಿಸಿದ್ದಾರೆ.

ಕಿಟ್‌ಟ್ರ್ಯಾಪ್ ಮಾಡಿ ಹಲ್ಲೆ ನಡೆಸಿದ ಆರೋಪಕ್ಕೆ ಪೊಲೀಸರ ಸ್ಪಷ್ಟನೆ!

ಪ್ರದೀಪ್ ಪೂಜಾರಿಯನ್ನು ಸ್ಥಳಕ್ಕೆ ಕರೆಸಿ ಹಲ್ಲೆ ಮಾಡಲಾಗಿದೆ, ಕಿಟ್‌ಟ್ರ್ಯಾಪ್ ಮಾಡಿ ಹೊಡೆಯಲಾಗಿದೆ ಎಂಬಿತ್ಯಾದಿ ಆರೋಪಗಳು ಹರಿದಾಡುತ್ತಿವೆ. ಆದರೆ, ಸದ್ಯದ ತನಿಖೆಯಲ್ಲಿ ಇಂತಹ ಆರೋಪಗಳಿಗೆ ಯಾವುದೇ ಸತ್ಯಾಂಶ ಕಂಡುಬಂದಿಲ್ಲ ಎಂದು ಎಸ್‌ಪಿ ಸ್ಪಷ್ಟಪಡಿಸಿದ್ದಾರೆ.

ಘಟನಾ ಸ್ಥಳದಲ್ಲಿ ಖಾರದ ಪುಡಿ ಹಾಗೂ ಹಲ್ಲೆಗೆ ಬಳಸಲಾಗಿದೆ ಎನ್ನಲಾದ ಬಟ್ಟೆ ಸೇರಿದಂತೆ ಹಲವು ವಸ್ತುಗಳು ಪತ್ತೆಯಾಗಿವೆ. ವಿಡಿಯೋ ಮತ್ತು ಆಡಿಯೋ ಸಾಕ್ಷ್ಯಗಳೂ ಲಭ್ಯವಾಗಿವೆ. ಸಂತ್ರಸ್ತೆ ಹಾಗೂ ಆಕೆಯ ತಾಯಿ ಆಸ್ಪತ್ರೆಗೆ ದಾಖಲಾಗಿರುವುದೂ ದೃಢಪಟ್ಟಿದೆ ಎಂದು ತಿಳಿಸಿದ್ದಾರೆ.

ಮೂರನೇ ಘಟನೆ ನಡೆದ ಸಂದರ್ಭದಲ್ಲಿ ಸಂತ್ರಸ್ತೆಯ ತಾಯಿ ಸಂಬಂಧಿಕರಿಗೆ ಕರೆ ಮಾಡಿದ್ದರು. ಬಳಿಕ ಸ್ಥಳಕ್ಕೆ ಬಂದ 7ರಿಂದ 8 ಮಂದಿ ಪ್ರದೀಪ್ ಪೂಜಾರಿ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆಯ ನಂತರ ಸ್ಥಳಕ್ಕೆ ಬಂದ ಪೊಲೀಸರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಎಸ್‌ಪಿ ಮಾಹಿತಿ ನೀಡಿದ್ದಾರೆ.

ಸಬ್ ಇನ್ಸ್‌ಪೆಕ್ಟರ್ ವಿರುದ್ಧ ಕ್ರಮ; ಕರ್ತವ್ಯಲೋಪದ ತನಿಖೆ!

ಆಸ್ಪತ್ರೆಯಲ್ಲಿದ್ದಾಗ ಪ್ರದೀಪ್ ಪೂಜಾರಿ ದೂರು ಬರೆದು ನೀಡಿದ್ದರೂ, ಪೊಲೀಸರು ಎಫ್‌ಐಆರ್ ದಾಖಲಿಸುವ ಬದಲು ಎನ್‌ಸಿ ಪ್ರಕರಣ ದಾಖಲಿಸಿಕೊಂಡಿದ್ದರು. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಇಲಾಖೆ, ಸಂಬಂಧಪಟ್ಟ ಸಬ್ ಇನ್ಸ್‌ಪೆಕ್ಟರ್ ವಿರುದ್ಧ ಕ್ರಮ ಕೈಗೊಂಡಿದೆ.

ಸಬ್ ಇನ್ಸ್‌ಪೆಕ್ಟರ್ ಅವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ ಪಶ್ಚಿಮ ವಲಯದ ಐಜಿಪಿ ಕಚೇರಿಯಲ್ಲಿ ವರದಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ. ಅವರ ವಿರುದ್ಧ ತನಿಖೆ ನಡೆಯುತ್ತಿದ್ದು, ಕರ್ತವ್ಯಲೋಪ ಸಾಬೀತಾದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹರಿರಾಮ್ ಶಂಕರ್ ತಿಳಿಸಿದ್ದಾರೆ.

ಅಲ್ಲದೆ, ಅವರನ್ನು ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಮುಂದುವರಿಸುವುದಿಲ್ಲ. ಪೊಲೀಸ್ ಇಲಾಖೆಯಿಂದ ಕೈಗೊಳ್ಳಬಹುದಾದ ಕ್ರಮಗಳನ್ನು ಈಗಾಗಲೇ ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣದ ತನಿಖೆ ಮುಂದುವರಿಕೆ!

ಪ್ರದೀಪ್ ಪೂಜಾರಿ ಸಾವಿನ ಬಳಿಕ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಮತ್ತೊಂದು ಪ್ರಕರಣವನ್ನೂ ದಾಖಲಿಸಲಾಗಿದೆ. ಈ ಪ್ರಕರಣದ ತನಿಖೆಯನ್ನು ಹಿರಿಯಡ್ಕ ಪೊಲೀಸ್ ಠಾಣೆಯ ಬದಲಿಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ನಡೆಸಲಾಗುತ್ತಿದೆ.

ಇನ್ಸ್‌ಪೆಕ್ಟರ್ ಮಹೇಶ್ ಪ್ರಸಾದ್ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು, ಪೊಲೀಸ್ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ತನಿಖೆಗೆ ಸಮಯ ಹಿಡಿದರೂ ಎಲ್ಲಾ ಆರೋಪಿಗಳ ವಿರುದ್ಧ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರನ್ನು ಬಂಧಿಸಲಾಗುವುದು. ಕಾನೂನನ್ನು ಕೈಗೆತ್ತಿಕೊಳ್ಳುವವರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಪಿ ಎಚ್ಚರಿಕೆ ನೀಡಿದ್ದಾರೆ.

ಸಂತ್ರಸ್ತೆಯ ಫೋಟೋ ಹಂಚಿಕೊಂಡರೆ ಕಠಿಣ ಕ್ರಮ: 150 ಖಾತೆಗಳ ಪತ್ತೆ!

ಕಳೆದ ಎರಡು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಸಂತ್ರಸ್ತೆಯ ಫೋಟೋ ಹಾಗೂ ಖಾಸಗಿ ಚಿತ್ರಗಳನ್ನು ಹಂಚಿಕೊಂಡು ಆಕೆಯ ತೇಜೋವಧೆ ಮಾಡಲಾಗುತ್ತಿದೆ. ಅತ್ಯಾಚಾರ ಸಂತ್ರಸ್ತೆಯ ಗುರುತು ಬಹಿರಂಗಪಡಿಸುವುದು ಕಾನೂನುಬಾಹಿರ ಕೃತ್ಯವಾಗಿದೆ.

ಈಗಾಗಲೇ ಸಂತ್ರಸ್ತೆಯ ಫೋಟೋಗಳನ್ನು ಹಂಚಿಕೊಂಡಿರುವ ಸುಮಾರು 150 ಸಾಮಾಜಿಕ ಜಾಲತಾಣಗಳ ಖಾತೆಗಳನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಸತ್ಯಾಸತ್ಯತೆ ಪರಿಶೀಲಿಸದೆ ಸುಳ್ಳು ಮಾಹಿತಿಗಳನ್ನು ಹರಡುವವರು ಹಾಗೂ ಸಂತ್ರಸ್ತೆಯ ಖಾಸಗಿ ಚಿತ್ರಗಳನ್ನು ಹಂಚಿಕೊಳ್ಳುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಪಿ ಹರಿರಾಮ್ ಶಂಕರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

Leave a Reply

Your email address will not be published. Required fields are marked *