ಗೋಣಿಕೊಪ್ಪಲು: ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಗೋಣಿಕೊಪ್ಪಲಿನ ಬಸ್ ನಿಲ್ದಾಣದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು, SIR ಪ್ರಕ್ರಿಯೆಯ ಹೆಸರಿನಲ್ಲಿ ಅರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ಕೈಬಿಡುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿ ಕೇಂದ್ರ ಸರ್ಕಾರದ ನಿಲುವನ್ನು ತೀವ್ರವಾಗಿ ಖಂಡಿಸಿದರು.

SIR ಪ್ರಕ್ರಿಯೆಯ ಮೂಲಕ ಬಡವರು, ಕೂಲಿ ಕಾರ್ಮಿಕರು, ಅಲ್ಪಸಂಖ್ಯಾತರು, ದಲಿತರು ಹಾಗೂ ಹಿಂದುಳಿದ ವರ್ಗಗಳ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಪ್ರಯತ್ನ ನಡೆಯುತ್ತಿದೆ. ಇದು ಪ್ರಜಾಪ್ರಭುತ್ವಕ್ಕೆ ಮಾಡುತ್ತಿರುವ ದೊಡ್ಡ ದ್ರೋಹವಾಗಿದೆ ಎಂದು ಶಾಸಕ ಪೊನ್ನಣ್ಣ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ಮತದಾನದ ಹಕ್ಕು ದೊರೆಯಬೇಕು. ಯಾವುದೇ ಕಾರಣಕ್ಕೂ ನೈಜ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು. ಜನರ ಸಂವಿಧಾನಬದ್ಧ ಮತದಾನದ ಹಕ್ಕನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಬೀದಿಗಿಳಿದು ಹೋರಾಟ ನಡೆಸಲಿದೆ ಎಂದು ಅವರು ಎಚ್ಚರಿಕೆ ನೀಡಿದರು.

SIR ವಿರುದ್ಧ ಘೋಷಣೆ, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ

ಪ್ರತಿಭಟನೆಯಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಧ್ವಜಗಳನ್ನು ಹಿಡಿದು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ‘SIR ವಾಪಸ್ ಪಡೆಯಿರಿ’, ‘ಮತದಾರರ ಹಕ್ಕು ರಕ್ಷಿಸಿ’ ಎಂಬ ಘೋಷಣೆಗಳನ್ನು ಕೂಗುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಗೋಣಿಕೊಪ್ಪಲು ಬಸ್ ನಿಲ್ದಾಣದ ಮುಂಭಾಗದಲ್ಲಿ ಧರಣಿ ನಡೆಸಿದ ಪ್ರತಿಭಟನಾಕಾರರು, ಅರ್ಹ ಮತದಾರರ ಹಕ್ಕುಗಳಿಗೆ ಯಾವುದೇ ಧಕ್ಕೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಭಾಗಿ

ಪ್ರತಿಭಟನೆಯಲ್ಲಿ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಎ.ಜೆ. ಬಾಬು, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ ಹಾಗೂ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೌಕತ್ ಆಲಿ ಸೇರಿದಂತೆ ವಿವಿಧ ಘಟಕಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

ಇದಲ್ಲದೆ, ವಿವಿಧ ವಲಯಗಳ ಅಧ್ಯಕ್ಷರು, ಬೂತ್ ಅಧ್ಯಕ್ಷರು, ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷರು, ಸದಸ್ಯರು ಹಾಗೂ ಪದಾಧಿಕಾರಿಗಳು, ಒಬಿಸಿ, ಎಸ್‌ಟಿ ಮತ್ತು ಅಲ್ಪಸಂಖ್ಯಾತರ ಘಟಕಗಳ ಅಧ್ಯಕ್ಷರು, ಸದಸ್ಯರು ಹಾಗೂ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಪಟ್ಟಣ ಪಂಚಾಯತ್‌ನ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು, ಯುವ ಕಾಂಗ್ರೆಸ್ ಅಧ್ಯಕ್ಷರು, ಸದಸ್ಯರು ಮತ್ತು ಪದಾಧಿಕಾರಿಗಳು ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಪ್ರತಿಭಟನೆಗೆ ಬೆಂಬಲ ಸೂಚಿಸಿದರು.

Leave a Reply

Your email address will not be published. Required fields are marked *