ಆಂಧ್ರಪ್ರದೇಶದ ಅನಂತಪುರದಲ್ಲಿ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಚೈನ್ಸಾದಿಂದ ಹಲ್ಲೆ ನಡೆಸಿದ್ದ ಆರೋಪಿ ಹೇಮಂತ್ ಬಂಧನದ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದ್ದು, ಗಂಭೀರವಾಗಿ ಗಾಯಗೊಂಡಿರುವ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅನಂತಪುರ, ನವೆಂಬರ್ 2: ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ಶಾಲೆಯ ತರಗತಿಯೊಳಗೆ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಚೈನ್ಸಾ (ಸರಪಳಿ ಗರಗಸ) ಬಳಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಪ್ರಕರಣದ ಪ್ರಮುಖ ಆರೋಪಿ ಹೇಮಂತ್ ಪರಾರಿಯಾಗಲು ಯತ್ನಿಸಿದಾಗ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡಿರುವ ಆರೋಪಿಯನ್ನು ಅನಂತಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಕ್ಟೋಬರ್ 31ರಂದು ರಾಪ್ತಾಡುವಿನ ಜಿಲ್ಲಾ ಪರಿಷತ್ ಪ್ರೌಢಶಾಲೆಯಲ್ಲಿ 10ನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಆರೋಪಿ ಚೈನ್ಸಾದಿಂದ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯ ಪತ್ತೆಗಾಗಿ ಪೊಲೀಸರು ವಿಶೇಷ ತಂಡಗಳನ್ನು ರಚಿಸಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದರು.

ಭಾನುವಾರ ಆತ್ಮಕೂರು ಅರಣ್ಯ ಪ್ರದೇಶದಲ್ಲಿ ಆರೋಪಿ ಇರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ತಕ್ಷಣ ಸ್ಥಳಕ್ಕೆ ತೆರಳಿದ ಪೊಲೀಸರು ಆತನನ್ನು ಬಂಧಿಸಲು ಮುಂದಾಗಿದ್ದಾರೆ. ಈ ವೇಳೆ ಹೇಮಂತ್ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ ಎನ್ನಲಾಗಿದೆ.

ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದ್ದು, ವರದಿಗಳ ಪ್ರಕಾರ ಒಟ್ಟು ಆರು ಸುತ್ತು ಗುಂಡು ಹಾರಿಸಲಾಗಿದೆ. ಇದರಿಂದ ಗಾಯಗೊಂಡ ಆರೋಪಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ವರದಿಯಾಗಿದೆ.

ಮದುವೆ ಪ್ರಸ್ತಾಪ ತಿರಸ್ಕರಿಸಿದ್ದಕ್ಕೆ ವಿದ್ಯಾರ್ಥಿನಿಯ ಮೇಲೆ ದಾಳಿ?

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿ ಹೇಮಂತ್ ವಿದ್ಯಾರ್ಥಿನಿಯೊಬ್ಬಳನ್ನು ಮದುವೆಯಾಗುವಂತೆ ಒತ್ತಾಯಿಸುತ್ತಿದ್ದ ಎನ್ನಲಾಗಿದೆ. ಆದರೆ ವಿದ್ಯಾರ್ಥಿನಿ ಆತನ ಮದುವೆ ಪ್ರಸ್ತಾಪವನ್ನು ತಿರಸ್ಕರಿಸಿದ್ದರಿಂದ ಆಕ್ರೋಶಗೊಂಡು ಶಾಲೆಗೆ ನುಗ್ಗಿ ಚೈನ್ಸಾದಿಂದ ಹಲ್ಲೆ ನಡೆಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಈ ವೇಳೆ ತನ್ನ ಸಹಪಾಠಿಯನ್ನು ರಕ್ಷಿಸಲು ಮುಂದಾದ ಮತ್ತೊಬ್ಬ ವಿದ್ಯಾರ್ಥಿನಿಯ ಮೇಲೂ ಆರೋಪಿ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಘಟನೆಯಲ್ಲಿ ಗಾಯಗೊಂಡ ಇಬ್ಬರು ವಿದ್ಯಾರ್ಥಿನಿಯರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿನಿ ಬೆಂಗಳೂರಿಗೆ ಸ್ಥಳಾಂತರ

ಚೈನ್ಸಾ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡ ವಿದ್ಯಾರ್ಥಿನಿಗೆ ಆರಂಭದಲ್ಲಿ ಅನಂತಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ವಿಶೇಷ ವೈದ್ಯಕೀಯ ವ್ಯವಸ್ಥೆಯೊಂದಿಗೆ ವೈದ್ಯರ ತಂಡದ ಸಹಿತ ಬೆಂಗಳೂರಿನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಆಂಧ್ರಪ್ರದೇಶದ ಆರೋಗ್ಯ ಸಚಿವ ಸತ್ಯಕುಮಾರ್ ಯಾದವ್ ತಿಳಿಸಿದ್ದಾರೆ.

ವಿದ್ಯಾರ್ಥಿನಿಯ ಬಲಗೈಗೆ ತೀವ್ರ ಹಾನಿಯಾಗಿದ್ದು, ಮುಖ, ಕುತ್ತಿಗೆ, ತಲೆ ಹಾಗೂ ಭುಜದ ಭಾಗಗಳಲ್ಲೂ ಗಂಭೀರ ಗಾಯಗಳಾಗಿವೆ. ಅಲ್ಲದೆ, ಹಲವು ಮೂಳೆ ಮುರಿತಗಳು ಹಾಗೂ ರಕ್ತನಾಳಗಳಿಗೆ ಹಾನಿಯಾಗಿರುವುದಾಗಿ ವೈದ್ಯಕೀಯ ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.

ಶಾಲೆಯ ಭದ್ರತೆ ಬಗ್ಗೆಯೂ ತನಿಖೆ

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ. ಆರೋಪಿ ಶಾಲೆಯೊಳಗೆ ಹೇಗೆ ಪ್ರವೇಶಿಸಿದ, ದಾಳಿಗೆ ಬಳಸಿದ ಚೈನ್ಸಾವನ್ನು ಎಲ್ಲಿಂದ ತಂದಿದ್ದ ಹಾಗೂ ದಾಳಿಯ ಹಿಂದಿನ ಸಂಪೂರ್ಣ ಕಾರಣವೇನು ಎಂಬ ಅಂಶಗಳ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

ಶಾಲೆಯಂತಹ ಸುರಕ್ಷಿತ ಸ್ಥಳದಲ್ಲೇ ವಿದ್ಯಾರ್ಥಿನಿಯರ ಮೇಲೆ ಇಂತಹ ಭೀಕರ ದಾಳಿ ನಡೆದಿರುವುದು ಪೋಷಕರು ಮತ್ತು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಪ್ರಕರಣದ ಎಲ್ಲ ಆಯಾಮಗಳ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಮಾಹಿತಿ ಬಹಿರಂಗವಾಗುವ ನಿರೀಕ್ಷೆಯಿದೆ.

Leave a Reply

Your email address will not be published. Required fields are marked *