AIUTUC ನೇತೃತ್ವದ ಅಹೋರಾತ್ರಿ ಧರಣಿ 8ನೇ ದಿನಕ್ಕೆ; ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರಿಸುವ ಎಚ್ಚರಿಕೆ

ಬೆಂಗಳೂರು: ಕೊರೆಯುವ ಚಳಿ, ನೂರಾರು ಸಂಕಷ್ಟಗಳ ನಡುವೆಯೂ ಆಶಾ ಕಾರ್ಯಕರ್ತೆಯರ ಹೋರಾಟ ಮಾತ್ರ ನಿಂತಿಲ್ಲ. ಮಾಸಿಕ ₹15 ಸಾವಿರ ಗೌರವಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ ಎಂಟನೇ ದಿನಕ್ಕೆ ಕಾಲಿಟ್ಟಿದೆ.

ರಾಜ್ಯದ 31 ಜಿಲ್ಲೆಗಳಿಂದ ಆಗಮಿಸಿರುವ ಸಾವಿರಾರು ಆಶಾ ಕಾರ್ಯಕರ್ತೆಯರು ಫ್ರೀಡಂ ಪಾರ್ಕ್ ಸುತ್ತಲೂ ಕೈ ಕೈ ಹಿಡಿದು ಮಾನವ ಸರಪಳಿ ನಿರ್ಮಿಸುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ತಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಘೋಷಣೆಗಳನ್ನು ಕೂಗಿ ಪ್ರತಿಭಟನೆ ತೀವ್ರಗೊಳಿಸಿದರು.

₹15 ಸಾವಿರ ಗೌರವಧನ, ನಿವೃತ್ತರಿಗೆ ₹5 ಲಕ್ಷ ಇಡಿಗಂಟು!

ಆಶಾ ಕಾರ್ಯಕರ್ತೆಯರಿಗೆ ತಕ್ಷಣವೇ ಮಾಸಿಕ ₹15,000 ಗೌರವಧನ ನಿಗದಿಪಡಿಸಬೇಕು. ನಿವೃತ್ತ ಆಶಾ ಕಾರ್ಯಕರ್ತೆಯರಿಗೆ ₹5 ಲಕ್ಷ ಇಡಿಗಂಟು ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಆರೋಗ್ಯ ಕ್ಷೇತ್ರದಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಆಶಾ ಕಾರ್ಯಕರ್ತೆಯರ ಶ್ರಮಕ್ಕೆ ತಕ್ಕ ಗೌರವ ಮತ್ತು ಆರ್ಥಿಕ ಭದ್ರತೆ ಒದಗಿಸಬೇಕು ಎಂಬುದು ಹೋರಾಟಗಾರರ ಪ್ರಮುಖ ಒತ್ತಾಯವಾಗಿದೆ.

ಬೇಡಿಕೆ ಈಡೇರುವವರೆಗೂ ಹೋರಾಟ

ಸರ್ಕಾರ ತಮ್ಮ ಬೇಡಿಕೆಗಳಿಗೆ ಸೂಕ್ತವಾಗಿ ಸ್ಪಂದಿಸುವವರೆಗೂ ಅಹೋರಾತ್ರಿ ಧರಣಿ ಮುಂದುವರಿಸುವುದಾಗಿ ಆಶಾ ಕಾರ್ಯಕರ್ತೆಯರು ಎಚ್ಚರಿಕೆ ನೀಡಿದ್ದಾರೆ. ಕೊರೆಯುವ ಚಳಿಯನ್ನೂ ಲೆಕ್ಕಿಸದೆ ಸಾವಿರಾರು ಮಹಿಳೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು, ಫ್ರೀಡಂ ಪಾರ್ಕ್ ಹೋರಾಟದ ಕೇಂದ್ರವಾಗಿ ಮಾರ್ಪಟ್ಟಿದೆ.

ಈ ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯಾಧ್ಯಕ್ಷ ಕೆ. ಸೋಮಶೇಖರ್ ಯಾದಗಿರಿ, ರಾಜ್ಯ ಕಾರ್ಯದರ್ಶಿ ಡಿ. ನಾಗಲಕ್ಷ್ಮಿ ಸೇರಿದಂತೆ ಸಂಘಟನೆಯ ಹಲವು ಪದಾಧಿಕಾರಿಗಳು ಹಾಗೂ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಸಾವಿರಾರು ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *