ದಕ್ಷಿಣ ಕನ್ನಡ ಜಿಲ್ಲೆಯ ಬಿಳಿನೆಲೆಯಲ್ಲಿ ಘಟನೆ; 72 ವರ್ಷದ ಅನ್ನಮ್ಮ ಮೃತ್ಯು

ದಕ್ಷಿಣ ಕನ್ನಡ: ಚರ್ಚ್‌ನಲ್ಲಿ ಪ್ರಾರ್ಥನೆ ಮುಗಿಸಿ ಪತಿಯೊಂದಿಗೆ ಮನೆಗೆ ಹಿಂದಿರುಗಲು ರಸ್ತೆ ಬದಿಯಲ್ಲಿ ನಿಂತಿದ್ದ 72 ವರ್ಷದ ವೃದ್ಧೆಯೊಬ್ಬರಿಗೆ ಬೈಕ್ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ನವೆಂಬರ್ 14ರ ಸಂಜೆ ಬಿಳಿನೆಲೆ ಗ್ರಾಮದ ನೆಟ್ಟಣದಲ್ಲಿ ನಡೆದಿದೆ.

ಮೃತರನ್ನು ಬಿಳಿನೆಲೆ ಗ್ರಾಮದ ನೆಟ್ಟಣದ ಮೆರೋಂಜಿ ಮನೆ ನಿವಾಸಿ ಅನ್ನಮ್ಮ (72) ಎಂದು ಗುರುತಿಸಲಾಗಿದೆ.

ನವೆಂಬರ್ 14ರಂದು ಸಂಜೆ ಸುಮಾರು 5.30ರ ವೇಳೆಗೆ ಕ್ಷೇವಿಯರ್ ಹಾಗೂ ಅವರ ಪತ್ನಿ ಅನ್ನಮ್ಮ ಅವರು ನೆಟ್ಟಣದ ಸೈಂಟ್ ಮೇರೀಸ್ ಕ್ಯಾಥೋಲಿಕ್ ಚರ್ಚ್‌ಗೆ ಪ್ರಾರ್ಥನೆ ಸಲ್ಲಿಸಲು ತೆರಳಿದ್ದರು. ಪ್ರಾರ್ಥನೆ ಮುಗಿದ ಬಳಿಕ ಮನೆಗೆ ಹಿಂದಿರುಗುವ ಸಲುವಾಗಿ ಸುಬ್ರಹ್ಮಣ್ಯ–ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಬಳಿಗೆ ಬಂದಿದ್ದರು.

ಈ ಸಂದರ್ಭದಲ್ಲಿ ಅನ್ನಮ್ಮ ಅವರು ಚರ್ಚ್ ಸಮೀಪದ ಕನ್ಯಾಮರಿಯಮ್ಮನ ಪ್ರತಿಮೆಯ ಬಳಿ ತೆರಳಿ ಪ್ರಾರ್ಥನೆ ಸಲ್ಲಿಸಿ ಹರಕೆ ಹಾಕಿದ್ದರು. ಬಳಿಕ ರಸ್ತೆಯ ಇನ್ನೊಂದು ಬದಿಯಲ್ಲಿದ್ದ ಪತಿ ಕ್ಷೇವಿಯರ್ ಅವರ ಬಳಿಗೆ ತೆರಳಲು ರಸ್ತೆ ಬದಿಯಲ್ಲಿ ನಿಂತಿದ್ದ ವೇಳೆ, ನೆಟ್ಟಣ ಕಡೆಯಿಂದ ಸುಬ್ರಹ್ಮಣ್ಯ ಕಡೆಗೆ ಸುಜಿತ್ ಎಂಬವರು ಚಲಾಯಿಸಿಕೊಂಡು ಬರುತ್ತಿದ್ದ ಬೈಕ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಡಿಕ್ಕಿಯ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟ ಅನ್ನಮ್ಮ ಅವರ ತಲೆ ಹಾಗೂ ಕೈಗಳಿಗೆ ಗಂಭೀರ ಗಾಯಗಳಾಗಿದ್ದವು. ತಕ್ಷಣ ಅವರನ್ನು ಕಡಬದ ಜೆ.ಎಂ.ಜೆ. ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಲಾಯಿತು. ಬಳಿಕ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಮೃತರ ಪತಿ ಪಿ.ಪಿ. ಕ್ಷೇವಿಯರ್ ನೀಡಿದ ದೂರಿನ ಮೇರೆಗೆ ಕಡಬ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 139/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 281 (ಅಜಾಗರೂಕ ಚಾಲನೆ) ಹಾಗೂ 106 (ನಿರ್ಲಕ್ಷ್ಯದಿಂದ ಸಾವಿಗೆ ಕಾರಣವಾಗುವುದು) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *