ಜಾಗದ ತಕರಾರು ವಿಕೋಪಕ್ಕೆ; ಯುವಕನ ಮೇಲೆ ಗುಂಡಿನ ದಾಳಿ
ಆರೋಪಿ ರಮೇಶ್ ಬಂಧನ, ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲು
ಬೆಂಗಳೂರು ಗ್ರಾಮಾಂತರ: ಆಶ್ರಯ ಯೋಜನೆಯಡಿ ಬಡವರಿಗೆ ನಿವೇಶನ ಹಂಚಿಕೆ ಮಾಡಲು ಮೀಸಲಿಟ್ಟ ಜಾಗದ ವಿಚಾರವಾಗಿ ಉಂಟಾದ ವಿವಾದ ವಿಕೋಪಕ್ಕೆ ತಿರುಗಿ, ವ್ಯಕ್ತಿಯೊಬ್ಬರು ಗುಂಡು ಹಾರಿಸಿದ ಪರಿಣಾಮ 25 ವರ್ಷದ ಯುವಕ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕು ಸೋಲೂರು ಗ್ರಾಮದಲ್ಲಿ ನಡೆದಿದೆ.



ಮೃತ ಯುವಕನನ್ನು ಲಿಖಿತ್ ಗೌಡ (25) ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಗುಂಡು ಹಾರಿಸಿದ ಆರೋಪ ಎದುರಿಸುತ್ತಿರುವ ರಮೇಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ತನಿಖೆ ಮುಂದುವರಿಸಿದ್ದಾರೆ.



ಬಡವರಿಗೆ ನಿವೇಶನ ಹಂಚಿಕೆ ಮಾಡುವ ಉದ್ದೇಶದಿಂದ 3 ಎಕರೆ 25 ಗುಂಟೆ ಜಾಗ ಮಂಜೂರಾಗಿತ್ತು. ಈ ಜಾಗಕ್ಕೆ ಸಂಪರ್ಕ ಕಲ್ಪಿಸುವ 10 ಗುಂಟೆ ಜಾಗವನ್ನು ರಮೇಶ್ ಒತ್ತುವರಿ ಮಾಡಿಕೊಂಡಿದ್ದ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಒಂದು ವಾರದ ಹಿಂದೆಯೇ ಜಾಗದ ಸರ್ವೆ ನಡೆಸಿ ಗಡಿ ಕಲ್ಲುಗಳನ್ನು ನೆಡಲಾಗಿತ್ತು. ಈ ಪ್ರಕ್ರಿಯೆಗೆ ರಮೇಶ್ ಕೂಡ ಒಪ್ಪಿಗೆ ಸೂಚಿಸಿದ್ದ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ್ ತಿಳಿಸಿದ್ದಾರೆ.



ಶುಕ್ರವಾರ ಬೆಳಿಗ್ಗೆ ಆಶ್ರಯ ಯೋಜನೆಯ ನಿವೇಶನದ ಜಾಗವನ್ನು ಸಮತಟ್ಟು ಮಾಡಿ ಸ್ವಚ್ಛಗೊಳಿಸುವ ಉದ್ದೇಶದಿಂದ ಜೆಸಿಬಿ ಯಂತ್ರದೊಂದಿಗೆ ಸಿಬ್ಬಂದಿ ಸ್ಥಳಕ್ಕೆ ತೆರಳಿದ್ದರು. ಈ ವೇಳೆ ರಮೇಶ್ ತನ್ನ ಬಳಿಯಿದ್ದ ಡಬಲ್ ಬ್ಯಾರಲ್ ಗನ್ ಹಿಡಿದು ಸ್ಥಳಕ್ಕೆ ಬಂದು ಕಾಮಗಾರಿಗೆ ಆಕ್ಷೇಪ ವ್ಯಕ್ತಪಡಿಸಿದ್ದಾನೆ ಎನ್ನಲಾಗಿದೆ.



ಬಡವರಿಗೆ ನಿವೇಶನ ಒದಗಿಸುವ ಉದ್ದೇಶದಿಂದ ಈ ಕಾರ್ಯ ಕೈಗೊಳ್ಳಲಾಗುತ್ತಿದೆ ಎಂದು ಸ್ಥಳದಲ್ಲಿದ್ದವರು ಆತನಿಗೆ ತಿಳಿಹೇಳಲು ಪ್ರಯತ್ನಿಸಿದರೂ ಆತ ಒಪ್ಪದೆ ಮೊದಲು ಗಾಳಿಯಲ್ಲಿ ಗುಂಡು ಹಾರಿಸಿದ್ದಾನೆ ಎಂದು ತಿಳಿದುಬಂದಿದೆ.



ಬಳಿಕ ಅಲ್ಲಿಂದ ಸುಮಾರು 50 ಮೀಟರ್ ದೂರದಲ್ಲಿದ್ದ ತನ್ನ ಮನೆಗೆ ತೆರಳಿದ ರಮೇಶ್, ಮನೆಯ ಮುಂಭಾಗದಲ್ಲಿ ನಿಂತು ಘಟನೆಯನ್ನು ಮೊಬೈಲ್‌ನಲ್ಲಿ ವಿಡಿಯೋ ಮಾಡುತ್ತಿದ್ದ ಲಿಖಿತ್ ಗೌಡನ ಮೇಲೆ ಕಿಟಕಿಯಿಂದ ಗುಂಡು ಹಾರಿಸಿದ್ದಾನೆ ಎನ್ನಲಾಗಿದೆ.


ಗುಂಡು ಲಿಖಿತ್‌ನ ಹೊಟ್ಟೆಯ ಮೇಲ್ಭಾಗಕ್ಕೆ ತಗುಲಿದ್ದು, ಆತ ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ. ತಕ್ಷಣ ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ಮಾಡಲಾಯಿತಾದರೂ, ಮಾರ್ಗಮಧ್ಯೆಯೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಘಟನೆಯಿಂದ ಸೋಲೂರು ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿರುವ ಪೊಲೀಸರು ಘಟನೆಯ ಹಿಂದಿನ ಸಂಪೂರ್ಣ ಹಿನ್ನೆಲೆ ಹಾಗೂ ಇತರ ವಿವರಗಳ ಕುರಿತು ತನಿಖೆ ಕೈಗೊಂಡಿದ್ದಾರೆ.




