ಸಿಎಂ ನಿವಾಸ ಹಾಗೂ ವಿಧಾನಸೌಧದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರದ ನಿವಾಸ ಹಾಗೂ ವಿಧಾನಸೌಧದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿದ ಘಟನೆ ಶುಕ್ರವಾರ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಸದಾಶಿವನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.



ಬಂಧಿತ ಆರೋಪಿಯನ್ನು ಕಾರ್ತಿಕ್ ಎಂದು ಗುರುತಿಸಲಾಗಿದೆ. ಆರೋಪಿ ಕಾರ್ತಿಕ್ ನಮ್ಮ ಯಾತ್ರಿ ಆ್ಯಪ್ ಮೂಲಕ ಆಟೋ ಬುಕ್ ಮಾಡಿ, ಚಾಲಕ ಭಗವಂತರಾಯ ಅವರಿಗೆ ಮುಖ್ಯಮಂತ್ರಿ ನಿವಾಸದ ಮುಂಭಾಗದ ಬ್ಯಾರಿಕೇಡ್ ಬಳಿ ಬರುವಂತೆ ಸೂಚಿಸಿದ್ದ ಎನ್ನಲಾಗಿದೆ.



ಅದರಂತೆ ಸ್ಥಳಕ್ಕೆ ಆಗಮಿಸಿದ ಆಟೋ ಚಾಲಕ, ಕಾರ್ತಿಕ್‌ಗೆ ಕರೆ ಮಾಡಿ ತಾನು ತಲುಪಿರುವುದಾಗಿ ತಿಳಿಸಿದ್ದಾರೆ. ಈ ವೇಳೆ ಅಲ್ಲಿದ್ದ ಪೊಲೀಸರಿಗೆ ಮೊಬೈಲ್ ಫೋನ್ ನೀಡುವಂತೆ ಕಾರ್ತಿಕ್ ಸೂಚಿಸಿದ್ದಾನೆ.



ಆಟೋ ಚಾಲಕ ಪೊಲೀಸರಿಗೆ ಮೊಬೈಲ್ ನೀಡಿದ ಬಳಿಕ, ಸದಾಶಿವನಗರದಲ್ಲಿರುವ ಮುಖ್ಯಮಂತ್ರಿ ನಿವಾಸ ಹಾಗೂ ವಿಧಾನಸೌಧದಲ್ಲಿ ಬಾಂಬ್ ಇಟ್ಟಿರುವುದಾಗಿ ಕಾರ್ತಿಕ್ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಅಲ್ಲದೆ, ಮುಖ್ಯಮಂತ್ರಿ ಅವರ ಬೆಂಗಾವಲು ಪಡೆ ತೆರಳುವ ಸಂದರ್ಭದಲ್ಲಿ ಸ್ಫೋಟ ಸಂಭವಿಸಲಿದೆ ಎಂದು ಹೇಳಿದ್ದಾನೆ ಎಂದು ತಿಳಿದುಬಂದಿದೆ.



ಘಟನೆಗೆ ಸಂಬಂಧಿಸಿದಂತೆ ತಕ್ಷಣ ಕಾರ್ಯಪ್ರವೃತ್ತರಾದ ಸದಾಶಿವನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.



ಆರೋಪಿಯ ವರ್ತನೆ ಹಾಗೂ ಹಿನ್ನೆಲೆಯ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದು, ಈ ಹಿಂದೆಯೂ ಹಲವು ಬಾರಿ ಬೆದರಿಕೆ ಕರೆಗಳನ್ನು ಮಾಡಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ. ಪ್ರಕರಣದ ಕುರಿತು ಹೆಚ್ಚಿನ ವಿವರಗಳು ತನಿಖೆಯಿಂದ ತಿಳಿದುಬರಬೇಕಿದೆ.




