ನಿಗಮ ಮಂಡಳಿ, ಅನುಷ್ಠಾನ ಸಮಿತಿ ಹಾಗೂ ಪಕ್ಷದ ಹುದ್ದೆಗಳಲ್ಲಿ ಅವಕಾಶ ನೀಡುವಂತೆ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಗೆ ಮನವಿ
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಬಲವರ್ಧನೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ಕೊಡುಗೆ ಮಹತ್ವದ್ದಾಗಿದೆ. ಈ ಸಮುದಾಯಗಳಿಗೆ ನಿಗಮ ಮಂಡಳಿಗಳ ಅಧ್ಯಕ್ಷ ಮತ್ತು ನಿರ್ದೇಶಕ ಸ್ಥಾನಗಳು ಸೇರಿದಂತೆ ಸರ್ಕಾರದ ನಾಮನಿರ್ದೇಶನ ಹಾಗೂ ಪಕ್ಷದ ವಿವಿಧ ಹುದ್ದೆಗಳಲ್ಲಿ ಸೂಕ್ತ ಪ್ರಾತಿನಿಧ್ಯ ನೀಡಬೇಕೆಂದು ಕೊಡಗು ಅಹಿಂದ ಬಳಗ ಒತ್ತಾಯಿಸಿದೆ.


ಈ ಸಂಬಂಧ ಕೊಡಗು ಅಹಿಂದ ಬಳಗದ ಜಿಲ್ಲಾಧ್ಯಕ್ಷ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ನಾಪಂಡ ಮುತ್ತಪ್ಪ ಅವರ ನೇತೃತ್ವದಲ್ಲಿ ಕುಶಾಲನಗರದಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಅವರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಲಾಯಿತು.


ಕೊಡಗು ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಲ್ಪಸಂಖ್ಯಾತ ಸಮುದಾಯಗಳು ಕಾಂಗ್ರೆಸ್ ಪಕ್ಷದ ಪ್ರಮುಖ ಮತದಾರರಾಗಿದ್ದರೂ, ಪಕ್ಷದ ಹುದ್ದೆಗಳು ಮತ್ತು ಸರ್ಕಾರದ ನಾಮನಿರ್ದೇಶನದ ಸಂದರ್ಭದಲ್ಲಿ ಈ ಸಮುದಾಯಗಳಿಗೆ ಸಮರ್ಪಕ ಅವಕಾಶ ಕಲ್ಪಿಸಲಾಗುತ್ತಿಲ್ಲ. ಇದರಿಂದಾಗಿ ಈ ವರ್ಗಗಳು ಪಕ್ಷದಲ್ಲಿ ಕಡೆಗಣಿಸಲ್ಪಟ್ಟಿವೆ ಎಂದು ಮನವಿಯಲ್ಲಿ ಅಸಮಾಧಾನ ವ್ಯಕ್ತಪಡಿಸಲಾಗಿದೆ. ರಾಜ್ಯ ಸರ್ಕಾರದ ಉಳಿದ ಅವಧಿಯಲ್ಲಾದರೂ ಈ ಸಮುದಾಯಗಳಿಗೆ ಸೂಕ್ತ ಸ್ಥಾನಮಾನ ಕಲ್ಪಿಸಬೇಕೆಂದು ಆಗ್ರಹಿಸಲಾಗಿದೆ.


ಕೊಡಗು ಜಿಲ್ಲೆಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತ ಸಮುದಾಯಗಳಿಗೆ ತಲಾ ಒಬ್ಬರಂತೆ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನ ನೀಡಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ಮಹಿಳೆಯರಿಗೆ ತಲಾ ಒಬ್ಬರಂತೆ ನಿಗಮ ಮಂಡಳಿಗಳ ನಿರ್ದೇಶಕ ಸ್ಥಾನ ಕಲ್ಪಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.


ಅದೇ ರೀತಿ, ಕೊಡಗು ಜಿಲ್ಲೆಯ ಐದು ಅನುಷ್ಠಾನ ಸಮಿತಿಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಮಹಿಳೆಯರಿಗೆ ತಲಾ ಒಬ್ಬರಂತೆ ಅಧ್ಯಕ್ಷ ಸ್ಥಾನ ನೀಡಬೇಕು. ಜಿಲ್ಲೆಯ ಆರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಗಳ ಪೈಕಿ ಒಂದು ಸ್ಥಾನವನ್ನು ಪರಿಶಿಷ್ಟ ಜಾತಿ ಸಮುದಾಯಕ್ಕೆ ಮೀಸಲಿಡಬೇಕು ಎಂದು ಆಗ್ರಹಿಸಲಾಗಿದೆ.


ಸಾಮಾಜಿಕ ನ್ಯಾಯ ಮತ್ತು ಸಮಾನ ಪ್ರಾತಿನಿಧ್ಯದ ಆಶಯದಂತೆ ಅಹಿಂದ ಸಮುದಾಯಗಳಿಗೆ ಸೂಕ್ತ ಸ್ಥಾನಮಾನ ಕಲ್ಪಿಸುವುದರಿಂದ ಪಕ್ಷದ ಸಂಘಟನೆ ಮತ್ತಷ್ಟು ಬಲಗೊಳ್ಳಲಿದೆ. ಈ ನಿಟ್ಟಿನಲ್ಲಿ ಅಹಿಂದ ಬಳಗ ಸಲ್ಲಿಸಿರುವ ಮನವಿಯನ್ನು ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ನಾಪಂಡ ಮುತ್ತಪ್ಪ ಮನವಿ ಮಾಡಿದರು.


ಈ ಸಂದರ್ಭದಲ್ಲಿ ಕೊಡಗು ಅಹಿಂದ ಬಳಗದ ಪ್ರಧಾನ ಕಾರ್ಯದರ್ಶಿ ಟಿ.ಇ. ಸುರೇಶ್, ಉಪಾಧ್ಯಕ್ಷ ಅರುಣ್ ರಾವ್, ಸಂಘಟನಾ ಕಾರ್ಯದರ್ಶಿ ರವಿ ಅಜ್ಜಳ್ಳಿ ಹಾಗೂ ಸದಸ್ಯರಾದ ರಜಾಕ್ ಕುಶಾಲನಗರ ಮತ್ತು ಶಾಹಿದ್ ಉಪಸ್ಥಿತರಿದ್ದರು.
