ಪೊಲೀಸ್ ತನಿಖಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ: ಡಿಜಿಪಿ ಡಾ. ಎಂ.ಎ. ಸಲೀಂ ಅವರಿಂದ ಹೊಸ ಮಾರ್ಗಸೂಚಿ
ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೋಟ್ಯಂತರ ರೂಪಾಯಿಗಳ ವಂಚನೆ ಹಾಗೂ ಆರ್ಥಿಕ ಅಪರಾಧ ಪ್ರಕರಣಗಳ ತನಿಖೆಗೆ ಸಂಬಂಧಿಸಿದಂತೆ ಕರ್ನಾಟಕ ಪೊಲೀಸ್ ಇಲಾಖೆ ಮಹತ್ವದ ಸ್ಪಷ್ಟೀಕರಣ ಹೊರಡಿಸಿದೆ. ಇನ್ನು ಮುಂದೆ ಒಂದು ಕೋಟಿಗೂ ಅಧಿಕ ಮೊತ್ತದ ಆರ್ಥಿಕ ಅಪರಾಧ ಪ್ರಕರಣಗಳ ತನಿಖೆಯನ್ನು ಪೊಲೀಸ್ ಇನ್ಸ್ಪೆಕ್ಟರ್ ಅಥವಾ ಅದಕ್ಕಿಂತ ಮೇಲಿನ ಹುದ್ದೆಯ ಅಧಿಕಾರಿಗಳೇ ನಡೆಸಬೇಕಾಗುತ್ತದೆ.



ಈ ಕುರಿತು ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಡಾ. ಎಂ.ಎ. ಸಲೀಂ ಅವರು ತಿದ್ದುಪಡಿ ಆದೇಶ (ಕೊರಿಜೆಂಡಮ್) ಹೊರಡಿಸಿದ್ದಾರೆ. ಹೊಸ ಮಾರ್ಗಸೂಚಿಯಂತೆ, ಒಂದು ಕೋಟಿ ರೂಪಾಯಿವರೆಗಿನ ವಂಚನೆ, ಹಣ ದುರುಪಯೋಗ ಹಾಗೂ ಇತರ ಆರ್ಥಿಕ ಅಪರಾಧ ಪ್ರಕರಣಗಳ ತನಿಖೆಯನ್ನು ಪೊಲೀಸ್ ಉಪನಿರೀಕ್ಷಕರು (ಪಿಎಸ್ಐ) ನಡೆಸಬಹುದಾಗಿದೆ. ಒಂದು ಕೋಟಿಗೂ ಅಧಿಕ ಮೊತ್ತದ ಪ್ರಕರಣಗಳ ತನಿಖೆಯನ್ನು ಪೊಲೀಸ್ ವೃತ್ತ ನಿರೀಕ್ಷಕರು (ಪಿಐ) ಅಥವಾ ಅದಕ್ಕಿಂತ ಮೇಲಿನ ಹಂತದ ಅಧಿಕಾರಿಗಳು ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ.



ಪೊಲೀಸ್ ಮುಖ್ಯ ಕಚೇರಿಯ ಸ್ಥಾಯಿ ಆದೇಶ ಸಂಖ್ಯೆ 1006ರ (ಪರಿಷ್ಕೃತ) ಅನ್ವಯ ಹಾಗೂ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (BNSS) ಸೆಕ್ಷನ್ 30ರ ಉಲ್ಲೇಖದೊಂದಿಗೆ ಈ ಸ್ಪಷ್ಟೀಕರಣ ಹೊರಡಿಸಲಾಗಿದೆ. ಈ ಹಿಂದೆ ಹೊರಡಿಸಲಾಗಿದ್ದ ಆದೇಶದಲ್ಲಿ ಪ್ರಕರಣಗಳ ಹಣಕಾಸಿನ ಮಿತಿಯನ್ನು ಮಾತ್ರ ನಿಗದಿಪಡಿಸಲಾಗಿತ್ತು. ಆದರೆ, ಯಾವ ಹಂತದ ಅಧಿಕಾರಿಗಳು ತನಿಖೆ ನಡೆಸಬೇಕು ಎಂಬ ಬಗ್ಗೆ ಸ್ಪಷ್ಟತೆ ಇರಲಿಲ್ಲ.



ಇದೀಗ ಹೊಸ ಆದೇಶದ ಮೂಲಕ ತನಿಖಾಧಿಕಾರಿಗಳ ಹುದ್ದೆ ಹಾಗೂ ಹಣಕಾಸಿನ ಮಿತಿಯನ್ನು ಸ್ಪಷ್ಟವಾಗಿ ನಿಗದಿಪಡಿಸಲಾಗಿದೆ. ರಾಜ್ಯದ ಎಲ್ಲ ಪೊಲೀಸ್ ಘಟಕಗಳ ಅಧಿಕಾರಿಗಳು ಈ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚನೆ ನೀಡಲಾಗಿದೆ.



ಆದೇಶದ ಪ್ರತಿಯನ್ನು ರಾಜ್ಯದ ಎಲ್ಲ ಪೊಲೀಸ್ ಘಟಕಗಳು ಹಾಗೂ ಇಲಾಖೆಯ ವಿವಿಧ ಕಚೇರಿಗಳಿಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.
