ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಎರಡು ಗಂಟೆಗಳ ಕಾಲಾವಕಾಶ ಮಾತ್ರ. ಹಸಿರು ಪಟಾಕಿಗಳ ಬಳಕೆ ಕಡ್ಡಾಯ, ಆಸ್ಪತ್ರೆ ಹಾಗೂ ಪೆಟ್ರೋಲ್ ಬಂಕ್‌ಗಳ ಬಳಿ ಪಟಾಕಿ ಸಿಡಿಸದಂತೆ ಬೆಂಗಳೂರು ನಗರ ಪೊಲೀಸರ ಸೂಚನೆ.

ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪರಿಸರ ಸ್ನೇಹಿ ಹಾಗೂ ಸುರಕ್ಷಿತ ಆಚರಣೆಗೆ ಸಾರ್ವಜನಿಕರು ಕಡ್ಡಾಯವಾಗಿ ಸುರಕ್ಷತಾ ನಿಯಮಗಳನ್ನು ಪಾಲಿಸಬೇಕು ಎಂದು ಬೆಂಗಳೂರು ನಗರ ಪೊಲೀಸರು ಸೂಚನೆ ನೀಡಿದ್ದಾರೆ. ಸುಪ್ರೀಂ ಕೋರ್ಟ್ ನಿರ್ದೇಶನದಂತೆ ರಾತ್ರಿ 8ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶವಿದ್ದು, ನಿಗದಿತ ಸಮಯ ಮೀರಿ ಪಟಾಕಿ ಸಿಡಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಸಂಬಂಧ ಭಾನುವಾರ ಪ್ರಕಟಣೆ ಹೊರಡಿಸಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ನಿಗದಿತ ಸಮಯ ಮೀರಿ ಪಟಾಕಿ ಸಿಡಿಸುವುದು ಅಥವಾ ಇತರ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS), ಸ್ಫೋಟಕ ಕಾಯ್ದೆ ಹಾಗೂ ಮಾಲಿನ್ಯ ನಿಯಂತ್ರಣ ಕಾಯ್ದೆ ಸೇರಿದಂತೆ ಅನ್ವಯವಾಗುವ ಕಾನೂನುಗಳ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಹಸಿರು ಪಟಾಕಿ ಬಳಕೆ ಕಡ್ಡಾಯ

ಸಾರ್ವಜನಿಕರು ಪರಿಸರ ಸ್ನೇಹಿ ಹಸಿರು ಪಟಾಕಿಗಳನ್ನು ಮಾತ್ರ ಖರೀದಿಸಿ ಬಳಸಬೇಕು. ಅಕ್ರಮವಾಗಿ ಪಟಾಕಿ ಮಾರಾಟ ಮಾಡುವುದು ಅಥವಾ ನಿಯಮಬಾಹಿರವಾಗಿ ಪಟಾಕಿ ಸಿಡಿಸುವುದು ಕಂಡುಬಂದಲ್ಲಿ ತಕ್ಷಣ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ.

ಅಲ್ಲದೆ, ಆಸ್ಪತ್ರೆಗಳು, ಪೆಟ್ರೋಲ್ ಬಂಕ್‌ಗಳು, ಗ್ಯಾಸ್ ಕೇಂದ್ರಗಳು, ಧಾರ್ಮಿಕ ಸ್ಥಳಗಳು, ವೃದ್ಧಾಶ್ರಮಗಳು ಹಾಗೂ ಮಕ್ಕಳ ಆರೈಕೆ ಕೇಂದ್ರಗಳ ಸುತ್ತಮುತ್ತ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ.

ಪಟಾಕಿ ಸಿಡಿಸುವಾಗ ಈ ಸುರಕ್ಷತಾ ಕ್ರಮ ಪಾಲಿಸಿ

ಪಟಾಕಿ ಸಿಡಿಸುವ ಸಂದರ್ಭದಲ್ಲಿ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು. ಕೈಗಳಿಗೆ ರಕ್ಷಣಾತ್ಮಕ ಕೈಗವಸು ಹಾಗೂ ಕಣ್ಣುಗಳಿಗೆ ಸುರಕ್ಷತಾ ಕನ್ನಡಕ ಧರಿಸುವಂತೆ ಪೊಲೀಸ್ ಇಲಾಖೆ ಸಲಹೆ ನೀಡಿದೆ.

ಅಗ್ನಿ ಅವಘಡ ಸಂಭವಿಸುವುದನ್ನು ತಡೆಯಲು ಮುನ್ನೆಚ್ಚರಿಕೆಯಾಗಿ ನೀರು, ಮರಳು ಹಾಗೂ ಅಗ್ನಿಶಾಮಕ ಉಪಕರಣಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು. ಯಾವುದೇ ಅವಘಡ ಸಂಭವಿಸಿದಲ್ಲಿ ತಕ್ಷಣ 112 ಅಥವಾ 108 ಸಹಾಯವಾಣಿಗೆ ಕರೆ ಮಾಡಿ ನೆರವು ಪಡೆಯಬೇಕು ಎಂದು ತಿಳಿಸಲಾಗಿದೆ.

ಮಕ್ಕಳ ಸುರಕ್ಷತೆಗೆ ಪೋಷಕರು ಗಮನಹರಿಸಿ

ಚಿಕ್ಕ ಮಕ್ಕಳು ಪೋಷಕರ ಮೇಲ್ವಿಚಾರಣೆಯಲ್ಲಿಯೇ ಪಟಾಕಿ ಸಿಡಿಸಬೇಕು. ಹಿರಿಯ ನಾಗರಿಕರು, ಅನಾರೋಗ್ಯ ಪೀಡಿತರು ಹಾಗೂ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಕಡಿಮೆ ಶಬ್ದದ ಹಸಿರು ಪಟಾಕಿಗಳನ್ನು ಬಳಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.

ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸುವುದರ ಜೊತೆಗೆ ಪರಿಸರ ಮತ್ತು ಸಾರ್ವಜನಿಕರ ಸುರಕ್ಷತೆಯನ್ನೂ ಗಮನದಲ್ಲಿಟ್ಟುಕೊಳ್ಳಬೇಕು. ನಿಯಮಗಳನ್ನು ಪಾಲಿಸುವ ಮೂಲಕ ಸುರಕ್ಷಿತ ಹಾಗೂ ಪರಿಸರ ಸ್ನೇಹಿ ದೀಪಾವಳಿ ಆಚರಿಸುವಂತೆ ಬೆಂಗಳೂರು ನಗರ ಪೊಲೀಸ್ ಇಲಾಖೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.

Leave a Reply

Your email address will not be published. Required fields are marked *