ಬೆಂಗಳೂರು: ಮತಾಂತರ ನಿಷೇಧ ಕಾಯ್ದೆಯನ್ನು ರದ್ದುಗೊಳಿಸುವುದು, ಮುಸ್ಲಿಮರ 2ಬಿ ಮೀಸಲಾತಿಯನ್ನು ಮರುಸ್ಥಾಪಿಸುವುದು ಹಾಗೂ ದ್ವೇಷ ಭಾಷಣಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದು ಸೇರಿದಂತೆ ಕಾಂಗ್ರೆಸ್ ಪಕ್ಷವು ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನ. 9ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಹಕ್ಕೊತ್ತಾಯ ಸಮಾವೇಶ ಆಯೋಜಿಸಲಾಗಿದೆ ಎಂದು ಬೆಂಗಳೂರಿನ ಆರ್ಚ್‌ಬಿಷಪ್ ಡಾ. ಪೀಟರ್ ಮಚಾದೊ ತಿಳಿಸಿದ್ದಾರೆ.
ಶುಕ್ರವಾರ ನಗರದ ಪಾಲನಾ ಭವನದ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮುಸ್ಲಿಮ್ ಒಕ್ಕೂಟ, ಕರ್ನಾಟಕ ರಾಜ್ಯ ಪ್ರಾಂತ ರೈತ ಸಂಘ, ದಲಿತ ಸಂಘರ್ಷ ಸಮಿತಿ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರೊಂದಿಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು.
ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಕಾಯ್ದೆ-2022 (ಮತಾಂತರ ನಿಷೇಧ ಕಾಯ್ದೆ) ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ. ಈ ಕಾಯ್ದೆಯನ್ನು ಹಿಂಪಡೆಯುವುದಾಗಿ ಕಾಂಗ್ರೆಸ್ ಪಕ್ಷ ಚುನಾವಣಾ ಸಂದರ್ಭದಲ್ಲಿ ಭರವಸೆ ನೀಡಿತ್ತು. ವಿಧಾನ ಪರಿಷತ್ತಿನಲ್ಲಿ ಬಹುಮತ ದೊರೆತರೆ ಕಾಯ್ದೆಯನ್ನು ರದ್ದುಗೊಳಿಸುವುದಾಗಿ ತಿಳಿಸಿತ್ತು. ಅದರಂತೆ ಮುಂಬರುವ ಚಳಿಗಾಲದ ವಿಧಾನಮಂಡಲ ಅಧಿವೇಶನದಲ್ಲಿ ಕಾಯ್ದೆಯನ್ನು ರದ್ದುಗೊಳಿಸಬೇಕು ಎಂದು ಅವರು ಒತ್ತಾಯಿಸಿದರು.
ಮತಾಂತರ ನಿಷೇಧ ಕಾಯ್ದೆಯ ದುರುಪಯೋಗದಿಂದ ಸಮಾಜದ ಶಾಂತಿ, ಸೌಹಾರ್ದ ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುತ್ತಿದೆ. ಕ್ರೈಸ್ತರ ಪ್ರಾರ್ಥನಾ ಸಭೆಗಳು ಹಾಗೂ ಪಾದ್ರಿಗಳ ಮೇಲೆ ದಾಳಿ ನಡೆಸಿ ಕಿರುಕುಳ ನೀಡಲಾಗುತ್ತಿದೆ. ಇಂತಹ ದೌರ್ಜನ್ಯಗಳ ವಿರುದ್ಧ ದೂರು ನೀಡಿದರೂ ಕೆಲವು ಕಡೆ ಪೊಲೀಸರು ದೂರುಗಳನ್ನು ಸ್ವೀಕರಿಸುತ್ತಿಲ್ಲ ಎಂದು ಅವರು ಆರೋಪಿಸಿದರು.
ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರ ಅಧಿಕಾರಕ್ಕೆ ಬಂದು ಮೂರು ವರ್ಷ ಕಳೆದರೂ ಮತಾಂತರ ನಿಷೇಧ ಕಾಯ್ದೆಯನ್ನು ಹಿಂಪಡೆಯದಿರುವುದು ಖಂಡನೀಯ. ರಾಜ್ಯದಲ್ಲಿ ಧಾರ್ಮಿಕ ಸ್ವಾತಂತ್ರ್ಯವನ್ನು ರಕ್ಷಿಸಿ ಎಲ್ಲ ಸಮುದಾಯಗಳಿಗೂ ಸಮಾನ ನ್ಯಾಯ ಒದಗಿಸಬೇಕು. ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ದ್ವೇಷ, ಬೆದರಿಕೆ ಮತ್ತು ಹಿಂಸಾಚಾರದ ಘಟನೆಗಳನ್ನು ಸರಕಾರ ಗಂಭೀರವಾಗಿ ಪರಿಗಣಿಸಬೇಕು. ದ್ವೇಷ ಭಾಷಣ ಮಾಡುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಡಾ. ಪೀಟರ್ ಮಚಾದೊ ಆಗ್ರಹಿಸಿದರು.
ಕರ್ನಾಟಕ ರಾಜ್ಯ ಮುಸ್ಲಿಮ್ ಒಕ್ಕೂಟದ ಸಂಚಾಲಕ ಸುಹೇಲ್ ಅಹ್ಮದ್ ಮರೂರ್ ಮಾತನಾಡಿ, ಕಾಂಗ್ರೆಸ್ ಪಕ್ಷ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಹಲವು ಭರವಸೆಗಳು ಇನ್ನೂ ಈಡೇರಿಲ್ಲ. ಅಧಿಕಾರಕ್ಕೆ ಬಂದು ಮೂರು ವರ್ಷ ಕಳೆದರೂ ಅಲ್ಪಸಂಖ್ಯಾತರು ಹಾಗೂ ದಲಿತರ ಬೇಡಿಕೆಗಳಿಗೆ ನ್ಯಾಯ ಒದಗಿಸುವಲ್ಲಿ ಸರಕಾರ ವಿಫಲವಾಗಿದೆ. ವಿಶೇಷವಾಗಿ ಮುಸ್ಲಿಮರ 2ಬಿ ಮೀಸಲಾತಿ ಮರುಸ್ಥಾಪನೆ ಸೇರಿದಂತೆ ಹಲವು ಭರವಸೆಗಳು ಬಾಕಿ ಉಳಿದಿವೆ. ಈ ಹಿನ್ನೆಲೆಯಲ್ಲಿ ನ. 9ರಂದು ನಡೆಯಲಿರುವ ಹಕ್ಕೊತ್ತಾಯ ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಬೇಕು ಎಂದು ಕರೆ ನೀಡಿದರು.
ಕರ್ನಾಟಕವು ಧಾರ್ಮಿಕ, ಸಾಂಸ್ಕೃತಿಕ ಮತ್ತು ಭಾಷಿಕ ವೈವಿಧ್ಯತೆಯ ಶ್ರೀಮಂತ ಪರಂಪರೆಯನ್ನು ಹೊಂದಿದೆ. ವಿವಿಧ ಧರ್ಮ, ನಂಬಿಕೆ ಮತ್ತು ಸಮುದಾಯಗಳ ಜನರು ಘನತೆ ಹಾಗೂ ಪರಸ್ಪರ ಗೌರವದಿಂದ ಸಹಬಾಳ್ವೆ ನಡೆಸುವುದೇ ರಾಜ್ಯದ ನಿಜವಾದ ಶಕ್ತಿಯಾಗಿದೆ. ಸಾಂವಿಧಾನಿಕ ಮೌಲ್ಯಗಳ ಮೇಲಿನ ತನ್ನ ಬದ್ಧತೆಯನ್ನು ರಾಜ್ಯ ಸರಕಾರ ಸ್ಪಷ್ಟವಾದ ಶಾಸನಾತ್ಮಕ ಕ್ರಮಗಳ ಮೂಲಕ ಜಾರಿಗೊಳಿಸಬೇಕು ಎಂದು ಮುಖಂಡರು ಮನವಿ ಮಾಡಿದರು.
ಹಿಂದಿನ ಸರಕಾರ ಜಾರಿಗೆ ತಂದ ಜನವಿರೋಧಿ ಕಾನೂನುಗಳನ್ನು ರದ್ದುಗೊಳಿಸುವುದರ ಜತೆಗೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಧಾರ್ಮಿಕ ಸ್ವಾತಂತ್ರ್ಯ, ಮಾನವ ಘನತೆ, ಆರ್ಥಿಕ ಭದ್ರತೆ ಮತ್ತು ಸಮಾನತೆಯನ್ನು ಎತ್ತಿಹಿಡಿಯುವಂತೆ ಸರಕಾರ ಕ್ರಮ ವಹಿಸಬೇಕು ಎಂದು ಅವರು ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಸ್ಲಿಮ್ ಒಕ್ಕೂಟದ ಸಂಚಾಲಕ ಮುಹಮ್ಮದ್ ಯಾಹ್ಯಾ ದಾಮುದಿ, ಕರ್ನಾಟಕ ರಾಜ್ಯ ಪ್ರಾಂತ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಟಿ. ಯಶವಂತ್, ದಲಿತ ಸಂಘರ್ಷ ಸಮಿತಿ ಮುಖಂಡ ಬಸವರಾಜ ಕೌತಾಳ್, ಯುವ ಹೋರಾಟಗಾರರಾದ ಸರೋವರ್ ಬೆಂಕಿಕೆರೆ, ಐಶ್ವರ್ಯಾ ಸೇರಿದಂತೆ ವಿವಿಧ ಸಂಘಟನೆಗಳ ಪ್ರಮುಖರು ಉಪಸ್ಥಿತರಿದ್ದರು.
