ವಾರಾಂತ್ಯದ ಪ್ರವಾಸಕ್ಕೆ ಗೋಕರ್ಣಕ್ಕೆ ಬಂದಿದ್ದ ಬೆಂಗಳೂರಿನ ಐಟಿ ಕಂಪನಿಯ ಉದ್ಯೋಗಿಗಳು ದುಬ್ಬಣಶಶಿ ಕಡಲತೀರದಲ್ಲಿ ಭಾರಿ ಅಲೆಗೆ ಸಿಲುಕಿದ್ದಾರೆ. ಘಟನೆಯಲ್ಲಿ ಮೂವರು ಮೃತಪಟ್ಟಿದ್ದು, ಇಬ್ಬರನ್ನು ಜೀವರಕ್ಷಕ ಸಿಬ್ಬಂದಿ ರಕ್ಷಿಸಿದ್ದಾರೆ.

ಉತ್ತರ ಕನ್ನಡ, ನವೆಂಬರ್ 2: ವಾರಾಂತ್ಯದ ಪ್ರವಾಸಕ್ಕಾಗಿ ಗೋಕರ್ಣಕ್ಕೆ ಬಂದಿದ್ದ ಬೆಂಗಳೂರಿನ ಐಟಿ ಕಂಪನಿಯ ಉದ್ಯೋಗಿಗಳ ತಂಡಕ್ಕೆ ಭೀಕರ ದುರಂತ ಎದುರಾಗಿದೆ. ಗೋಕರ್ಣದ ದುಬ್ಬಣಶಶಿ ಕಡಲತೀರದಲ್ಲಿ ಸಮುದ್ರದ ಭಾರಿ ಅಲೆಗೆ ಸಿಲುಕಿ ಐವರು ಕೊಚ್ಚಿಹೋಗಿದ್ದು, ಈ ಪೈಕಿ ಮೂವರು ಮೃತಪಟ್ಟಿದ್ದಾರೆ. ಇಬ್ಬರನ್ನು ಜೀವರಕ್ಷಕ ಸಿಬ್ಬಂದಿ ರಕ್ಷಿಸಿದ್ದಾರೆ.

ಬೆಂಗಳೂರಿನ ಬೆಳ್ಳಂದೂರಿನಲ್ಲಿರುವ ಅಲೋರಿಯಾ ಇಕೋಸ್ಪೇಸ್ ಕಂಪನಿಯ 16 ಉದ್ಯೋಗಿಗಳ ತಂಡ ವಾರಾಂತ್ಯದ ಪ್ರವಾಸಕ್ಕಾಗಿ ಗೋಕರ್ಣಕ್ಕೆ ಆಗಮಿಸಿತ್ತು. ದುಬ್ಬಣಶಶಿ ಬೀಚ್‌ನಲ್ಲಿರುವ ಕೋಜೆ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದ ತಂಡದ ಕೆಲವರು ಸಮುದ್ರದಲ್ಲಿ ಆಟವಾಡಲು ನೀರಿಗಿಳಿದಿದ್ದರು. ಈ ವೇಳೆ ಏಕಾಏಕಿ ಅಪ್ಪಳಿಸಿದ ಭಾರಿ ಅಲೆ ಐವರನ್ನು ಸಮುದ್ರದೊಳಕ್ಕೆ ಎಳೆದೊಯ್ದಿದೆ.

ಘಟನೆ ತಿಳಿಯುತ್ತಿದ್ದಂತೆ ರೆಸಾರ್ಟ್‌ನ ಜೀವರಕ್ಷಕ ಸಿಬ್ಬಂದಿ ಹಾಗೂ ಸ್ಥಳೀಯ ಮೀನುಗಾರರು ತಕ್ಷಣವೇ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ನಾಲ್ವರನ್ನು ದಡಕ್ಕೆ ಕರೆತರಲಾಗಿದ್ದು, ತೀವ್ರ ಅಸ್ವಸ್ಥಗೊಂಡಿದ್ದ ಜಾರ್ಖಂಡ್ ಮೂಲದ 22 ವರ್ಷದ ಶೋಭಾ ದಾಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ತಂಡದ ನಾಯಕ ಮಹಮ್ಮದ್ ಅಕ್ರಮ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ.

ನಾಪತ್ತೆಯಾಗಿದ್ದ ಬೆಂಗಳೂರಿನ ಯುವಕನ ಮೃತದೇಹ ಪತ್ತೆ

ಇನ್ನು ಘಟನೆಯಲ್ಲಿ ಬೆಂಗಳೂರಿನ ಕಲ್ಯಾಣನಗರದ 24 ವರ್ಷದ ವಿಶ್ವ ಸಮುದ್ರದಲ್ಲಿ ನಾಪತ್ತೆಯಾಗಿದ್ದರು. ಇದೀಗ ಶೋಧ ಕಾರ್ಯಾಚರಣೆ ವೇಳೆ ಅವರ ಮೃತದೇಹ ಪತ್ತೆಯಾಗಿದೆ.

ನಿಶಾಂತ್ ಮತ್ತು ಮಹಮ್ಮದ್ ಖಾಸಿಂ ಅವರನ್ನು ಜೀವರಕ್ಷಕ ಸಿಬ್ಬಂದಿ ಸುರಕ್ಷಿತವಾಗಿ ರಕ್ಷಿಸಿದ್ದು, ಚಿಕಿತ್ಸೆ ಪಡೆದ ಬಳಿಕ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ನಡೆದ ಸ್ಥಳಕ್ಕೆ ಗೋಕರ್ಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಕಾರವಾರ ವೈದ್ಯಕೀಯ ಕಾಲೇಜಿನ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ಈ ಘಟನೆ ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಪ್ರವಾಸಿಗರ ಸುರಕ್ಷತೆಗೆ ಪೊಲೀಸರಿಂದ ಎಚ್ಚರಿಕೆ

ದುರಂತದ ಬೆನ್ನಲ್ಲೇ ಕಡಲತೀರಗಳಿಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆ ಕುರಿತು ರೆಸಾರ್ಟ್ ಹಾಗೂ ಹೋಮ್‌ಸ್ಟೇ ಮಾಲೀಕರಿಗೆ ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.

ಸಮುದ್ರದ ಅಲೆಗಳ ತೀವ್ರತೆ ಹಾಗೂ ಹವಾಮಾನ ಪರಿಸ್ಥಿತಿಯನ್ನು ಗಮನಿಸದೆ ನೀರಿಗಿಳಿಯುವುದು ಅಪಾಯಕಾರಿ ಎಂಬುದನ್ನು ಈ ಘಟನೆ ಮತ್ತೊಮ್ಮೆ ನೆನಪಿಸಿದೆ. ಪ್ರವಾಸಿಗರು ಕಡಲತೀರಗಳಲ್ಲಿ ಎಚ್ಚರಿಕೆ ವಹಿಸುವಂತೆ ಹಾಗೂ ಜೀವರಕ್ಷಕ ಸಿಬ್ಬಂದಿಯ ಸೂಚನೆಗಳನ್ನು ಪಾಲಿಸುವಂತೆ ಸಲಹೆ ನೀಡಲಾಗಿದೆ.

Leave a Reply

Your email address will not be published. Required fields are marked *