ಆಸ್ಪತ್ರೆಯಲ್ಲಿನ ವಿವಿಧ ಸಮಸ್ಯೆಗಳ ಕುರಿತು ಸದಸ್ಯರಿಂದ ಮಾಹಿತಿ ಪಡೆದ ಶಾಸಕರು; ತಕ್ಷಣ ಪರಿಹಾರ ಕಂಡುಕೊಳ್ಳಲು ಅಧಿಕಾರಿಗಳಿಗೆ ಸೂಚನೆ

ಸೋಮವಾರಪೇಟೆ: ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಸಭೆಯು ಶಾಸಕ ಡಾ. ಮಂತರ್ ಗೌಡ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಆಸ್ಪತ್ರೆಯಲ್ಲಿನ ವಿವಿಧ ಸಮಸ್ಯೆಗಳ ಕುರಿತು ಸಮಿತಿ ಸದಸ್ಯರಿಂದ ಮಾಹಿತಿ ಪಡೆದ ಶಾಸಕರು, ಅವುಗಳನ್ನು ಪರಿಹರಿಸಲು ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿದರು.

ಆಸ್ಪತ್ರೆಯಲ್ಲಿ 14 ಮಂದಿ ವೈದ್ಯರಿದ್ದರೂ ಕೆಲವೊಮ್ಮೆ ವೈದ್ಯರು ಕರ್ತವ್ಯಕ್ಕೆ ಹಾಜರಾಗದಿರುವುದರಿಂದ ರೋಗಿಗಳಿಗೆ ತೊಂದರೆಯಾಗುತ್ತಿದೆ. ಇಂತಹ ಸಂದರ್ಭಗಳಲ್ಲಿ ಆಡಳಿತ ವೈದ್ಯಾಧಿಕಾರಿಗಳು ಅಥವಾ ಜಿಲ್ಲಾ ವೈದ್ಯಾಧಿಕಾರಿಗಳ ಗಮನಕ್ಕೆ ತರುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಸಮಿತಿ ಸದಸ್ಯ ರವೀಶ್ ಸಭೆಯಲ್ಲಿ ಶಾಸಕರ ಗಮನಕ್ಕೆ ತಂದರು.

ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ಡಾ. ಮಂತರ್ ಗೌಡ ಅವರು ತಕ್ಷಣವೇ ಹಾಜರಾತಿ ಪುಸ್ತಕವನ್ನು ತರಿಸಿ ವೈದ್ಯರ ಹಾಜರಾತಿ ಹಾಗೂ ಕರ್ತವ್ಯ ನಿಯೋಜನೆಯನ್ನು ಪರಿಶೀಲಿಸಿದರು. ಬಳಿಕ ಮಾತನಾಡಿದ ಅವರು, ಎಲ್ಲಾ ವೈದ್ಯರು ತಮ್ಮ ಕರ್ತವ್ಯವನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕು. ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗಿ ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡಬೇಕು ಎಂದು ಸೂಚಿಸಿದರು. ವೈದ್ಯಾಧಿಕಾರಿಗಳು ಆಸ್ಪತ್ರೆಯಲ್ಲಿ ಸಮಯಪಾಲನೆ ಹಾಗೂ ಕರ್ತವ್ಯ ನಿರ್ವಹಣೆಯ ಬಗ್ಗೆ ನಿಗಾ ವಹಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಆಸ್ಪತ್ರೆಯ ಉಪಕರಣಗಳಾದ ನೂತನ ವಾಷಿಂಗ್ ಮೆಷಿನ್, ಡ್ರೈಯರ್ ಮೆಷಿನ್, ಅತ್ಯಾಧುನಿಕ ಎಕ್ಸ್‌ರೇ ಯಂತ್ರಗಳ ಅಳವಡಿಕೆ ಸೇರಿದಂತೆ ಸಿಬ್ಬಂದಿಗಳ ವೇತನ ವಿಳಂಬದ ಕುರಿತು ಸುದೀರ್ಘ ಚರ್ಚೆ ನಡೆಯಿತು.

ಆಸ್ಪತ್ರೆಯಲ್ಲಿನ ಸಮಸ್ಯೆಗಳನ್ನು ಖುದ್ದಾಗಿ ಪರಿಶೀಲಿಸಿ, ಅವುಗಳಿಗೆ ತಕ್ಷಣ ಸೂಕ್ತ ಪರಿಹಾರ ಕಂಡುಕೊಳ್ಳುವಂತೆ ಸಭೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾ ವೈದ್ಯಾಧಿಕಾರಿ ಸತೀಶ್ ಅವರಿಗೆ ಶಾಸಕರು ಸೂಚನೆ ನೀಡಿದರು.

ಸಭೆಯಲ್ಲಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಝಮೀರ್ ಅಹಮದ್, ಸಮಿತಿ ಸದಸ್ಯರಾದ ರಮೇಶ್, ಮಹೇಶ್ ಹಣಕೋಡು, ಸೈಮನ್, ಮಂಜುಳಾ, ಹರೀಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *