ವಾಹನ ನಿಲ್ಲಿಸದೆ ಪರಾರಿಯಾದ ಚಾಲಕ; ಸಿಸಿಟಿವಿ ದೃಶ್ಯಾವಳಿ ಪರಿಶೀಲನೆಗೆ ಮುಂದಾದ ಪೊಲೀಸರು
ಮಾದಾಪುರ: ಗರಗುಂದೂರು ಗ್ರಾಮದ ಬಳಿ ನವೆಂಬರ್ 22ರ ಸಂಜೆ ಅಪರಿಚಿತ ವಾಹನವೊಂದು ಪಾದಚಾರಿ ಮಹಿಳೆಗೆ ಡಿಕ್ಕಿ ಹೊಡೆದು ಪರಾರಿಯಾಗಿರುವ ಘಟನೆ ನಡೆದಿದೆ.


ಘಟನೆಯಲ್ಲಿ ಗರಗುಂದೂರು ನಿವಾಸಿ ಲಕ್ಷ್ಮಿ ಎಂಬುವವರ ಕಾಲಿಗೆ ಗಂಭೀರ ಗಾಯಗಳಾಗಿವೆ. ತಕ್ಷಣ ಸ್ಥಳೀಯರು ಗಾಯಾಳುವನ್ನು ಮಾದಾಪುರ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ಘಟನೆಗೆ ಸಂಬಂಧಿಸಿದಂತೆ ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತವೆಸಗಿ ಪರಾರಿಯಾಗಿರುವ ವಾಹನ ಹಾಗೂ ಚಾಲಕನ ಪತ್ತೆಗಾಗಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಘಟನಾ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಸಂಗ್ರಹಿಸಿ ಪರಿಶೀಲಿಸುವ ಕಾರ್ಯ ನಡೆಯುತ್ತಿದೆ ಎಂದು ತಿಳಿದುಬಂದಿದೆ.






