ಇಬ್ಬರಿಗೆ ಗಂಭೀರ ಗಾಯ; ಮಂಡ್ಯ ಆಸ್ಪತ್ರೆಗೆ ದಾಖಲು
ಬೆಂಗಳೂರು–ಮೈಸೂರು ಹೆದ್ದಾರಿಯಲ್ಲಿ ಮುಂಜಾನೆ ಸಂಭವಿಸಿದ ದುರ್ಘಟನೆ
ಮಂಡ್ಯ: ಬೆಂಗಳೂರು–ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಡ್ಯ ಸಮೀಪ ನವೆಂಬರ್ 28ರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೇರಳದ ಕೋಯಿಕ್ಕೋಡ್ ಮೂಲದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಧಾರುಣ ಘಟನೆ ನಡೆದಿದೆ. ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರಲ್ಲಿ ಇಬ್ಬರು ಪುರುಷರು ಹಾಗೂ ಓರ್ವ ಮಹಿಳೆ ಸೇರಿದ್ದಾರೆ. ಮೃತ ಪುರುಷರನ್ನು ರಿಫೈಲ್ ಮತ್ತು ರಾಶಿಲ್ ಎಂದು ಗುರುತಿಸಲಾಗಿದ್ದು, ಮೃತಪಟ್ಟ ಮಹಿಳೆಯ ಗುರುತು ಇನ್ನಷ್ಟೇ ತಿಳಿದುಬರಬೇಕಿದೆ.



ಕೇರಳದ ಕೋಯಿಕ್ಕೋಡ್ ಮೂಲದ ಸ್ನೇಹಿತರ ತಂಡವೊಂದು ತಾರ್ ವಾಹನದಲ್ಲಿ ಬೆಂಗಳೂರಿನತ್ತ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.



ಅಪಘಾತದ ತೀವ್ರತೆಗೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿರುವ ಇಬ್ಬರನ್ನು ಸ್ಥಳೀಯರು ತಕ್ಷಣವೇ ಮಂಡ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.



ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಕೆಎಂಸಿಸಿ ಸಂಘಟನೆಯ ಕಾರ್ಯಕರ್ತರು ಸ್ಥಳಕ್ಕೆ ಧಾವಿಸಿದ್ದು, ಮೃತದೇಹಗಳ ರವಾನೆಗೆ ಅಗತ್ಯ ಸಹಕಾರ ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ.



ಘಟನೆಯಿಂದಾಗಿ ಮೃತರ ಕುಟುಂಬಸ್ಥರು ಹಾಗೂ ಸ್ನೇಹಿತರ ವಲಯದಲ್ಲಿ ಶೋಕದ ಛಾಯೆ ಆವರಿಸಿದೆ. ಅಪಘಾತಕ್ಕೆ ನಿಖರ ಕಾರಣ ಹಾಗೂ ಮೃತಪಟ್ಟ ಮಹಿಳೆಯ ಗುರುತು ಸೇರಿದಂತೆ ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ.









