ಕೆಪಿಸಿಸಿ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಘೋಷಣೆ – ಶಾಸಕದ್ವಯರು, ಜಿಲ್ಲಾಧ್ಯಕ್ಷರ ವಿರುದ್ಧ ಬೇಸರ
ಕೊಡಗು: ಕಾಂಗ್ರೆಸ್ ಪಕ್ಷಕ್ಕಾಗಿ ಹಲವು ವರ್ಷಗಳಿಂದ ದುಡಿದಿದ್ದರೂ ಸೂಕ್ತ ಸ್ಥಾನಮಾನ ಹಾಗೂ ಮನ್ನಣೆ ದೊರೆತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಕೊಡಗಿನ ಪ್ರಮುಖ ರಾಜಕೀಯ ಮುಖಂಡ ಹಾಗೂ ಸಮಾಜ ಸೇವಕ ಕೆ.ಎ. ಯಾಕೂಬ್ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ಕಾಂಗ್ರೆಸ್ ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದರೂ ತಮ್ಮನ್ನು ಪಕ್ಷದ ನಾಯಕರು ಸೂಕ್ತವಾಗಿ ಪರಿಗಣಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.



ಶಾಸಕದ್ವಯರು ಹಾಗೂ ಕಾಂಗ್ರೆಸ್ ಜಿಲ್ಲಾಧ್ಯಕ್ಷರು ತಮ್ಮನ್ನು ಕಡೆಗಣಿಸಿದ್ದಾರೆ. ರಾಜ್ಯಮಟ್ಟದ ಸ್ಥಾನಮಾನ ನೀಡುವುದಾದರೆ ನೀಡಲಿ, ಆದರೆ ಜಿಲ್ಲಾ ಮಟ್ಟದ ಸ್ಥಾನಮಾನ ತಮಗೆ ಬೇಡ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
“ಇನ್ನು ಮುಂದೆ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕುತ್ತೇನೆ, ಆದರೆ ಮನೆಯಲ್ಲೇ ಕುಳಿತುಕೊಳ್ಳುತ್ತೇನೆ. ಪಕ್ಷಕ್ಕಾಗಿ ಯಾವುದೇ ಕೆಲಸ ಮಾಡುವುದಿಲ್ಲ. ಪಕ್ಷಕ್ಕಾಗಿ ದುಡಿದರೂ ಸೂಕ್ತ ಸ್ಥಾನಮಾನ ಸಿಗದಿರುವುದು ನನ್ನ ಮನಸ್ಸಿಗೆ ತುಂಬಾ ನೋವುಂಟು ಮಾಡಿದೆ” ಎಂದು ಯಾಕೂಬ್ ಅಸಮಾಧಾನ ಹೊರಹಾಕಿದ್ದಾರೆ.



ಕೆ.ಎ. ಯಾಕೂಬ್ ಅವರು ಈ ಹಿಂದೆ ಕೊಡಗು ಜಿಲ್ಲಾ ವಕ್ಫ್ ಬೋರ್ಡ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ಜಿಲ್ಲೆಯ ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದಾರೆ. ಅಲ್ಪಸಂಖ್ಯಾತರ ಕಲ್ಯಾಣ ಮತ್ತು ಸಮುದಾಯದ ಅಭಿವೃದ್ಧಿ ಕಾರ್ಯಗಳಲ್ಲಿಯೂ ತೊಡಗಿಸಿಕೊಂಡಿದ್ದಾರೆ.


ಕೆಪಿಸಿಸಿ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುವ ಅವರ ನಿರ್ಧಾರ ಕೊಡಗು ಜಿಲ್ಲಾ ಕಾಂಗ್ರೆಸ್ ವಲಯದಲ್ಲಿ ರಾಜಕೀಯ ಚರ್ಚೆಗೆ ಕಾರಣವಾಗಿದೆ.
