ಗೋಣಿಕೊಪ್ಪಲು: ಹಾಕಿ ಇಂಡಿಯಾ ಕೈಗ್ ಸ್ಪೋರ್ಟ್ಸ್ ಫೌಂಡೇಶನ್ ಹಾಗೂ ಕಾವೇರಿ ರಾಯಲ್ಸ್ ರಿಕ್ರಿಯೇಷನ್ ಅಸೋಸಿಯೇಷನ್ ವತಿಯಿಂದ ಗೋಣಿಕೊಪ್ಪಲುವಿನ ಕಾಲ್ಸ್ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿರುವ ಎರಡನೇ ಆವೃತ್ತಿಯ ಕೈಗ್ ಹಾಕಿ ಕಪ್ ಪಂದ್ಯಾವಳಿಗೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಇಂದು ಚಾಲನೆ ನೀಡಿದರು.

ಪಂದ್ಯಾವಳಿಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಶಾಸಕ ಪೊನ್ನಣ್ಣ ಅವರು, ಕೊಡಗು ಜಿಲ್ಲೆ ತನ್ನದೇ ಆದ ಹಲವು ವೈಶಿಷ್ಟ್ಯತೆಗಳಿಗೆ ಹೆಸರುವಾಸಿಯಾಗಿದ್ದು, ಅವುಗಳಲ್ಲಿ ಹಾಕಿ ಕ್ರೀಡೆ ಪ್ರಮುಖ ಸ್ಥಾನ ಪಡೆದಿದೆ. ಕೊಡಗಿನ ಅನೇಕ ಹಾಕಿ ಆಟಗಾರರು ದೇಶಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ. ಇಲ್ಲಿನ ಕ್ರೀಡಾ ಪ್ರತಿಭೆಗಳು ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳಲು ಇಂತಹ ಕ್ರೀಡಾಕೂಟಗಳು ಉತ್ತಮ ವೇದಿಕೆಯಾಗಿವೆ ಎಂದರು.

ಪಂದ್ಯಾವಳಿಯಲ್ಲಿ ಭಾಗವಹಿಸಿರುವ ಪ್ರತಿಯೊಬ್ಬ ಆಟಗಾರರೂ ತಮ್ಮ ಪ್ರತಿಭೆ ಹಾಗೂ ಸಾಮರ್ಥ್ಯವನ್ನು ಪ್ರದರ್ಶಿಸುವ ಮೂಲಕ ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿ ಜಿಲ್ಲೆಗೆ ಕೀರ್ತಿ ತರಲಿ ಎಂದು ಅವರು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಕೈಗ್ ಗ್ರೂಪ್‌ನ ಮುಖ್ಯಸ್ಥ ಕುಟ್ಟಂಡ ಸುದಿನ್ ಮಂದಣ್ಣ, ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಚೆಪ್ಪುಡೀರ ಅರುಣ್ ಮಾಚಯ್ಯ, ವಿಧಾನ ಪರಿಷತ್ ಸದಸ್ಯೆ ಮಂಡೇಪಂಡ ಸುಜಾ ಕುಶಾಲಪ್ಪ, ಒಲಿಂಪಿಯನ್ ಬಿ. ಸುಬ್ಬಯ್ಯ, ಅಂತರರಾಷ್ಟ್ರೀಯ ಹಾಕಿ ಆಟಗಾರ ಕೆ.ಕೆ. ಪೂಣಚ್ಚ, ಹಿರಿಯ ತರಬೇತುದಾರ ಬಿ.ಜೆ. ಕಾರ್ಯಪ್ಪ, ಹಾಕಿ ಕೂರ್ಗ್ ಅಧ್ಯಕ್ಷ ಲವಕುಮಾರ್, ಕಾವೇರಿ ರಾಯಲ್ಸ್ ರಿಕ್ರಿಯೇಷನ್ ಅಸೋಸಿಯೇಷನ್ ಅಧ್ಯಕ್ಷ ಸದಾ ಅಪ್ಪಚ್ಚು ಸೇರಿದಂತೆ ಹಲವು ಗಣ್ಯರು ಹಾಗೂ ಕ್ರೀಡಾಭಿಮಾನಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *