ಮಡಿಕೇರಿ: ಕೊಡವ ಸಮುದಾಯದ ಶ್ರೀಮಂತ ಇತಿಹಾಸ, ಸಂಸ್ಕೃತಿ, ಸಂಪ್ರದಾಯ ಹಾಗೂ ವಿಶಿಷ್ಟ ಜೀವನಶೈಲಿಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಮಹತ್ವಾಕಾಂಕ್ಷೆಯ ಕೊಡವ ಹೆರಿಟೇಜ್ ಸೆಂಟರ್ ಯೋಜನೆಗೆ ಮತ್ತಷ್ಟು ವೇಗ ದೊರೆತಿದೆ.

ಮಡಿಕೇರಿ ಸಮೀಪ ನಿರ್ಮಾಣಗೊಳ್ಳುತ್ತಿರುವ ಕೊಡವ ಹೆರಿಟೇಜ್ ಸೆಂಟರ್‌ನ ಮುಂದುವರಿದ ಕಾಮಗಾರಿಗಾಗಿ ₹5 ಕೋಟಿ ವೆಚ್ಚದಲ್ಲಿ ಟೆಂಡರ್ ಆಹ್ವಾನಿಸಲಾಗಿದೆ. ಬಹುದಿನಗಳಿಂದ ನಿರೀಕ್ಷೆಯಲ್ಲಿದ್ದ ಈ ಯೋಜನೆಯ ಕಾಮಗಾರಿಯನ್ನು ಮುಂದುವರಿಸಲು ಇದೀಗ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಯೋಜನೆಯ ಅನುಷ್ಠಾನದತ್ತ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಂತಾಗಿದೆ.

ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರು ಕೊಡವ ಸಮುದಾಯದ ಬಹುದಿನಗಳ ಆಶಯವಾಗಿರುವ ಈ ಯೋಜನೆ ಸಾಕಾರಗೊಳ್ಳಲು ನಿರಂತರವಾಗಿ ಪ್ರಯತ್ನಿಸುತ್ತಿದ್ದಾರೆ. ಇದೀಗ ಮುಂದುವರಿದ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಆರಂಭಗೊಂಡಿರುವುದು ಯೋಜನೆಯ ಪ್ರಗತಿಗೆ ಪೂರಕವಾಗಿದೆ.

ಕೊಡವ ಸಂಸ್ಕೃತಿ, ಸಂಪ್ರದಾಯ, ಇತಿಹಾಸ, ಕಲೆ ಹಾಗೂ ವಿಶಿಷ್ಟ ಪರಂಪರೆಯನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ತಲುಪಿಸುವುದು ಈ ಕೇಂದ್ರದ ಪ್ರಮುಖ ಉದ್ದೇಶವಾಗಿದೆ. ಅಲ್ಲದೆ, ಕೊಡವ ಸಮುದಾಯದ ಸಾಂಸ್ಕೃತಿಕ ವೈಭವವನ್ನು ಪ್ರವಾಸಿಗರಿಗೆ ಪರಿಚಯಿಸುವ ಮೂಲಕ ಕೊಡಗಿನ ಪ್ರಮುಖ ಸಾಂಸ್ಕೃತಿಕ ಹಾಗೂ ಪ್ರವಾಸಿ ಆಕರ್ಷಣೆಯ ತಾಣವಾಗಿ ಕೊಡವ ಹೆರಿಟೇಜ್ ಸೆಂಟರ್ ರೂಪುಗೊಳ್ಳುವ ನಿರೀಕ್ಷೆಯಿದೆ.

Leave a Reply

Your email address will not be published. Required fields are marked *