ಬೆಂಗಳೂರು : ಮದುವೆಯ ಸಂಭ್ರಮದಲ್ಲಿದ್ದ ಮಂಡ್ಯ ಜಿಲ್ಲೆಯ ನಾಗಮಂಗಲದ ಕುಟುಂಬವೊಂದರಲ್ಲಿ ಇದೀಗ ಸೂತಕದ ಛಾಯೆ ಆವರಿಸಿದೆ. ಮದುವೆಯ ಆಮಂತ್ರಣ ಪತ್ರಿಕೆ ಹಂಚಲು ಸ್ಕೂಟಿಯಲ್ಲಿ ತೆರಳುತ್ತಿದ್ದ ಇಬ್ಬರು ಯುವತಿಯರು ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ನಾಗಮಂಗಲ ತಾಲೂಕಿನ ಐತನಹಳ್ಳಿ ಗ್ರಾಮದ ಸಿಂಧುಶ್ರೀ (27) ಹಾಗೂ ಅವರ ಅತ್ತೆಯ ಮಗಳು ವಿದ್ಯಾ (19) ಎಂದು ಗುರುತಿಸಲಾಗಿದೆ.


ಸಿಂಧುಶ್ರೀ ಅವರ ವಿವಾಹ ನವೆಂಬರ್ 16ರಂದು ನಿಗದಿಯಾಗಿತ್ತು. ಇದಕ್ಕೂ ಮುನ್ನ ಭಾನುವಾರ ಆರತಕ್ಷತೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಬಂಧುಗಳಿಗೆ ಆಮಂತ್ರಣ ಪತ್ರಿಕೆ ಹಂಚಲು ಸಿಂಧುಶ್ರೀ ಅವರು ಕಾಲೇಜು ವಿದ್ಯಾರ್ಥಿನಿಯಾಗಿದ್ದ ವಿದ್ಯಾ ಜೊತೆ ಸ್ಕೂಟಿಯಲ್ಲಿ ತೆರಳುತ್ತಿದ್ದರು.


ಬುಧವಾರ ಮಧ್ಯಾಹ್ನ ಸುಮಾರು 3.30ರ ವೇಳೆಗೆ ಮೈಸೂರು ರಸ್ತೆಯ ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದ ಬಳಿ ಹಿಂಬದಿಯಿಂದ ವೇಗವಾಗಿ ಬಂದ ಟ್ರಕ್ ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಸ್ತೆಗೆ ಬಿದ್ದ ಇಬ್ಬರ ಮೇಲೂ ಟ್ರಕ್ನ ಚಕ್ರ ಹರಿದ ಪರಿಣಾಮ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.


ಅಪಘಾತ ಸಂಭವಿಸುತ್ತಿದ್ದಂತೆ ಟ್ರಕ್ ಚಾಲಕ ವಾಹನವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ರಾಜಸ್ಥಾನ ನೋಂದಣಿ ಸಂಖ್ಯೆಯ ಟ್ರಕ್ ಅನ್ನು ಬ್ಯಾಟರಾಯನಪುರ ಸಂಚಾರ ಪೊಲೀಸರು ವಶಕ್ಕೆ ಪಡೆದಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಪರಾರಿಯಾಗಿರುವ ಚಾಲಕನ ಪತ್ತೆಗೆ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.


ಇನ್ನೇನು ಕೆಲವೇ ದಿನಗಳಲ್ಲಿ ವಧುವಾಗಬೇಕಿದ್ದ ಸಿಂಧುಶ್ರೀ ಹಾಗೂ ಕಾಲೇಜು ಶಿಕ್ಷಣ ಪಡೆಯುತ್ತಿದ್ದ ವಿದ್ಯಾ ಅವರ ದುರಂತ ಸಾವು ಕುಟುಂಬಸ್ಥರು ಮತ್ತು ಬಂಧುಮಿತ್ರರಲ್ಲಿ ತೀವ್ರ ಶೋಕಕ್ಕೆ ಕಾರಣವಾಗಿದೆ.



