ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನ ದಿನಾಚರಣೆ ಅಂಗವಾಗಿ ರಕ್ತದಾನಿಗಳಿಗೆ ಸನ್ಮಾನ

ಸುಳ್ಯ: ಸುಳ್ಯ ತಾಲೂಕು ಆಂಬುಲೆನ್ಸ್ ಚಾಲಕ-ಮಾಲಕ ಸಂಘದ ವತಿಯಿಂದ ಬೃಹತ್ ರಕ್ತದಾನ ಶಿಬಿರ ಹಾಗೂ ರಕ್ತದಾನಿಗಳಿಗೆ ಸನ್ಮಾನ ಕಾರ್ಯಕ್ರಮವು ನವೆಂಬರ್ 25ರಂದು ಸುಳ್ಯ ತಾಲೂಕು ಆಸ್ಪತ್ರೆಯ ಸಭಾಂಗಣದಲ್ಲಿ ನಡೆಯಿತು.

ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ, ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಪ್ರಾದೇಶಿಕ ರಕ್ತಪೂರಣ ಕೇಂದ್ರ ಹಾಗೂ ಸುಳ್ಯ ಸರ್ಕಾರಿ ತಾಲೂಕು ಆಸ್ಪತ್ರೆಯ ಸಹಭಾಗಿತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನ ದಿನಾಚರಣೆಯ ಅಂಗವಾಗಿ ನಡೆದ ಶಿಬಿರದಲ್ಲಿ ನೂರಾರು ಮಂದಿ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದರು. ಸುಳ್ಯ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಯೂ ಶಿಬಿರದಲ್ಲಿ ಪಾಲ್ಗೊಂಡು ರಕ್ತದಾನ ಮಾಡುವ ಮೂಲಕ ಮಾನವೀಯತೆ ಮೆರೆದರು.

ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ರಕ್ತದಾನದ ಮಹತ್ವದ ಕುರಿತು ಮಾತನಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಆಂಬುಲೆನ್ಸ್ ಚಾಲಕ-ಮಾಲಕರ ಸಂಘದ ಅಧ್ಯಕ್ಷ ರಫೀಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಪಿ.ಎಸ್. ಗಂಗಾಧರ, ಸುಡಾ ಅಧ್ಯಕ್ಷ ಕೆ.ಎಂ. ಮುಸ್ತಾಫ, ಸುಳ್ಯ ಪೊಲೀಸ್ ಠಾಣೆಯ ಎಎಸ್‌ಐ ತಾರಾನಾಥ, ಸುಳ್ಯ ಲಯನ್ಸ್ ಕ್ಲಬ್ ಅಧ್ಯಕ್ಷ ವಿನೋದ್ ಲಸ್ರಾದೋ, ನಿವೃತ್ತ ಸೈನಿಕರ ಸಂಘದ ಅಧ್ಯಕ್ಷ ಜಯಕರ ಮಡ್ತಿಲ, ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ರಾಧಾಕೃಷ್ಣ ಪರಿವಾರಕಾನ, ಶಾಹಿದ್ ಪಾರೆ, ಚಂದ್ರನ್ ಕೂಟೆಲ್ ಹಾಗೂ ಸುಳ್ಯ ತಾಲೂಕು ಆಡಳಿತ ವೈದ್ಯಾಧಿಕಾರಿ ಆಶಾ ಅಂಬಿಕಾರ್ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ರಕ್ತದಾನಿಗಳಾದ ಹ್ಯಾರಿಸ್ ಬೋರುಗುಡ್ಡೆ, ವಿದ್ಯಾಸಾಗರ್ ರಾವ್ ಹಾಗೂ ಶರತ್ ಕುಮಾರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಬ್ಲಡ್ ಬ್ಯಾಂಕ್ ಮುಖ್ಯಸ್ಥ ಶರತ್ ಕುಮಾರ್ ರಾವ್ ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿ ನವೀನ್ ವಂದಿಸಿದರು. ಸಿದ್ದಿಕ್ ಗೂನಡ್ಕ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *