ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಾರ್ವಜನಿಕ ರಸ್ತೆಗಳಲ್ಲಿ ನಡೆಯುತ್ತಿರುವ ಪ್ರೀ-ವೆಡ್ಡಿಂಗ್ ಫೋಟೋಶೂಟ್‌ಗಳ ವಿಚಾರ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಅರಮನೆ ಸಮೀಪದ ದೊಡ್ಡ ಗಡಿಯಾರ ವೃತ್ತದ ಬಳಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 17 ವರ್ಷದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ವೈಷ್ಣವಿ ಮೃತಪಟ್ಟಿದ್ದಾರೆ. ಮಗಳೊಂದಿಗೆ ಸ್ಕೂಟರ್‌ನಲ್ಲಿ ಪ್ರಯಾಣಿಸುತ್ತಿದ್ದ ತಂದೆ ವೆಂಕಟೇಶ್ ನಾಯಕ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಫೋಟೋಶೂಟ್‌ಗಳ ನಡುವೆ ಸಂಭವಿಸಿದ ದುರಂತ?

ಅಪಘಾತ ಸಂಭವಿಸಿದ ಸ್ಥಳದಲ್ಲಿ ಏಕಕಾಲದಲ್ಲಿ ಸುಮಾರು 10ರಿಂದ 15 ಜೋಡಿಗಳ ಪ್ರೀ-ವೆಡ್ಡಿಂಗ್ ಹಾಗೂ ಪ್ರಚಾರದ ಫೋಟೋಶೂಟ್‌ಗಳು ನಡೆಯುತ್ತಿದ್ದವು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ರಸ್ತೆ ಬದಿ ಹಾಗೂ ಜನನಿಬಿಡ ವೃತ್ತದ ಸಮೀಪ ಕ್ಯಾಮೆರಾ, ಲೈಟಿಂಗ್ ಉಪಕರಣಗಳನ್ನು ಬಳಸಿ ಚಿತ್ರೀಕರಣ ನಡೆಸುತ್ತಿದ್ದುದರಿಂದ ವಾಹನ ಸವಾರರು ಮತ್ತು ಬಸ್ ಚಾಲಕರ ಗಮನ ಬೇರೆಡೆಗೆ ಸೆಳೆಯಲ್ಪಟ್ಟಿರಬಹುದು ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇದೇ ಸಂದರ್ಭದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿನಿ ವೈಷ್ಣವಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆದರೆ ಅಪಘಾತಕ್ಕೆ ನಿಖರ ಕಾರಣವೇನು ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.

ಪೊಲೀಸ್ ಇಲಾಖೆಯ ವಿರುದ್ಧ ಸಾರ್ವಜನಿಕರ ಆಕ್ರೋಶ

ಮೈಸೂರಿನ ಪ್ರಮುಖ ಪ್ರವಾಸಿ ತಾಣಗಳು ಹಾಗೂ ಪಾರಂಪರಿಕ ಕಟ್ಟಡಗಳ ಸುತ್ತಮುತ್ತ ಯಾವುದೇ ನಿಯಂತ್ರಣವಿಲ್ಲದೆ ನಡೆಯುತ್ತಿರುವ ಪ್ರೀ-ವೆಡ್ಡಿಂಗ್ ಫೋಟೋಶೂಟ್‌ಗಳು ಮತ್ತು ರೀಲ್ಸ್ ಚಿತ್ರೀಕರಣದಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ. ಈ ಕುರಿತು ಈ ಹಿಂದೆಯೂ ಹಲವು ದೂರುಗಳನ್ನು ನೀಡಿದ್ದರೂ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅನಿಯಂತ್ರಿತ ಫೋಟೋಶೂಟ್‌ಗಳಿಗೆ ಕಡಿವಾಣ ಯಾವಾಗ?

ತಂದೆಯ ಕಣ್ಣೆದುರೇ ಮಗಳನ್ನು ಕಳೆದುಕೊಂಡ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ. ಸಾರ್ವಜನಿಕ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಗುವ ರೀತಿಯಲ್ಲಿ ನಡೆಯುವ ಫೋಟೋಶೂಟ್‌ಗಳಿಗೆ ತಕ್ಷಣವೇ ಕಡಿವಾಣ ಹಾಕಬೇಕು. ಪ್ರವಾಸಿ ತಾಣಗಳು ಹಾಗೂ ಜನನಿಬಿಡ ವೃತ್ತಗಳಲ್ಲಿ ಚಿತ್ರೀಕರಣ ನಡೆಸಲು ಸೂಕ್ತ ನಿಯಮಗಳನ್ನು ರೂಪಿಸಿ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಸಾರ್ವಜನಿಕರು ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *