ಪಾಲಿಬೆಟ್ಟ: ತೋಟಕ್ಕೆ ಕದಿರು ಕಟ್ಟಲು ತೆರಳಿದ್ದ 50 ವರ್ಷದ ವ್ಯಕ್ತಿಯೊಬ್ಬರು ಕಾಡಾನೆ ದಾಳಿಗೆ ಬಲಿಯಾದ ಹೃದಯವಿದ್ರಾವಕ ಘಟನೆ ನವೆಂಬರ್ 25ರ ಗುರುವಾರ ಬೆಳ್ಳಂಬೆಳಗ್ಗೆ ಕೊಡಗು ಜಿಲ್ಲೆಯ ಪಾಲಿಬೆಟ್ಟ ಸಮೀಪದ ಚನ್ನಯ್ಯನಕೋಟೆಯ ಅಬ್ಬೂರು ಗ್ರಾಮದ ತಾರೀಕಟ್ಟೆಯಲ್ಲಿ ನಡೆದಿದೆ.

ಮೃತರನ್ನು ಅಬ್ಬೂರು ತಾರೀಕಟ್ಟೆ ನಿವಾಸಿ ಉಪ್ಪುಂಡಿ ಕೇಶವಯ್ಯ (50) ಎಂದು ಗುರುತಿಸಲಾಗಿದೆ.

ಬುಧವಾರ ರಾತ್ರಿ ಹುತ್ತರಿ ಹಬ್ಬವನ್ನು ಆಚರಿಸಿದ್ದ ಕೇಶವಯ್ಯ ಅವರು ಗುರುವಾರ ಬೆಳಗ್ಗೆ ಸುಮಾರು 7.30ರ ವೇಳೆಗೆ ಎಂದಿನಂತೆ ತಮ್ಮ ತೋಟಕ್ಕೆ ಕದಿರು ಕಟ್ಟಲು ತೆರಳಿದ್ದರು. ಈ ಸಂದರ್ಭದಲ್ಲಿ ಏಕಾಏಕಿ ಎದುರಾದ ಕಾಡಾನೆ ಅವರ ಮೇಲೆ ಭೀಕರ ದಾಳಿ ನಡೆಸಿದೆ. ದಾಳಿಯ ತೀವ್ರತೆಗೆ ಕೇಶವಯ್ಯ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿದ್ದಾರೆ. ಹುತ್ತರಿ ಹಬ್ಬದ ಸಂಭ್ರಮದ ಬೆನ್ನಲ್ಲೇ ಸಂಭವಿಸಿದ ಈ ದುರಂತದಿಂದ ಗ್ರಾಮದಲ್ಲಿ ಶೋಕದ ವಾತಾವರಣ ಆವರಿಸಿದೆ.

ಕೊಡಗು ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಕಾಡಾನೆಗಳ ಹಾವಳಿ ಹಾಗೂ ಹುಲಿಗಳ ಉಪಟಳ ಹೆಚ್ಚಾಗುತ್ತಿದ್ದು, ಗ್ರಾಮೀಣ ಭಾಗದ ಜನರು ಜೀವಭಯದಲ್ಲೇ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ. ತೋಟಗಳಿಗೆ ತೆರಳುವುದೂ ಅಪಾಯಕಾರಿಯಾಗಿ ಪರಿಣಮಿಸಿದ್ದು, ಕೃಷಿಕರು ಆತಂಕದಿಂದ ದಿನ ಕಳೆಯುವಂತಾಗಿದೆ.

ವನ್ಯಪ್ರಾಣಿಗಳ ದಾಳಿಯನ್ನು ತಡೆಗಟ್ಟಲು ಅರಣ್ಯ ಇಲಾಖೆ ಅಧಿಕಾರಿಗಳು ತಕ್ಷಣ ಸೂಕ್ತ ಕ್ರಮ ಕೈಗೊಂಡು, ಜನರ ಜೀವ ಮತ್ತು ಆಸ್ತಿಪಾಸ್ತಿಗಳ ರಕ್ಷಣೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು. ಅಲ್ಲದೆ, ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *