ಉಡುಪಿ: ಪ್ರೇಮ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ಮನೆಯವರು ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ, ಮನನೊಂದ ಯುವಕನೊಬ್ಬ ಚಿಕಿತ್ಸೆ ಪಡೆಯುತ್ತಿದ್ದ ಉಡುಪಿ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶೌಚಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ, ಆಕೆಯ ಸಹೋದರರು ಸೇರಿದಂತೆ ಹತ್ತಕ್ಕೂ ಹೆಚ್ಚು ಮಂದಿಯ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತ ಯುವಕನನ್ನು ಪೆರ್ಡೂರು ನಾಯರ್ಕೋಡಿಯ ಪ್ರದೀಪ್ ಪೂಜಾರಿ (27) ಎಂದು ಗುರುತಿಸಲಾಗಿದೆ. ಹಿಂದೂ ಜಾಗರಣ ವೇದಿಕೆಯ ನಾಯರ್ಕೋಡಿ ಘಟಕದ ಕಾರ್ಯಕರ್ತನಾಗಿದ್ದ ಪ್ರದೀಪ್, ಕಳೆದ ಎಂಟು ವರ್ಷಗಳಿಂದ ಶ್ರಾವ್ಯಾ ಶೆಟ್ಟಿ ಎಂಬ ಯುವತಿಯನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ.
ಮೂರು ಕಾರುಗಳಲ್ಲಿ ಬಂದು ಯುವಕನನ್ನು ಕರೆದೊಯ್ದ ಆರೋಪ
ಪೊಲೀಸ್ ದೂರಿನ ಪ್ರಕಾರ, ಅಕ್ಟೋಬರ್ 27ರಂದು ರಾತ್ರಿ ಸುಮಾರು 10 ಗಂಟೆಗೆ ಪ್ರದೀಪ್ ತನ್ನ ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಯುವತಿಯ ಸಹೋದರರಾದ ಪ್ರಸನ್ನ ಶೆಟ್ಟಿ, ಸುಧೀರ್ ಶೆಟ್ಟಿ, ಶೈಲೇಶ್ ಶೆಟ್ಟಿ, ಸನತ್, ಕೃಷ್ಣ ಸುಜಯ್ ಹಾಗೂ ಇತರರು ಮೂರು ಕಾರುಗಳಲ್ಲಿ ಆಗಮಿಸಿ ಆತನನ್ನು ಬಲವಂತವಾಗಿ ಯುವತಿಯ ಮನೆಗೆ ಕರೆದೊಯ್ದಿದ್ದಾರೆ ಎಂದು ಆರೋಪಿಸಲಾಗಿದೆ.
ಅಲ್ಲಿ ಪ್ರಸನ್ನ ಶೆಟ್ಟಿ ಬೆತ್ತದಿಂದ ಪ್ರದೀಪನ ಕಾಲು ಹಾಗೂ ಬೆನ್ನಿಗೆ ಹಲ್ಲೆ ನಡೆಸಿದ್ದು, ಇತರ ಆರೋಪಿಗಳು ಮರದ ದೊಣ್ಣೆಗಳಿಂದ ಹೊಡೆದು ಗಾಯಗೊಳಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ವಿಚಾರ ತಿಳಿದ ಪ್ರದೀಪನ ಸ್ನೇಹಿತರು ಯುವತಿಯ ಮನೆಗೆ ತೆರಳಿದ ಬಳಿಕ ಹಲ್ಲೆ ನಿಂತಿದೆ ಎನ್ನಲಾಗಿದೆ.
ಗಂಭೀರವಾಗಿ ಗಾಯಗೊಂಡಿದ್ದ ಪ್ರದೀಪನನ್ನು ಅಕ್ಟೋಬರ್ 28ರಂದು ಉಡುಪಿಯ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಿ ಒಳರೋಗಿಯಾಗಿ ಚಿಕಿತ್ಸೆ ನೀಡಲಾಗುತ್ತಿತ್ತು.
ಆಸ್ಪತ್ರೆಯಲ್ಲೇ ಆತ್ಮಹತ್ಯೆ
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಪ್ರದೀಪ್ ತನ್ನ ಸಹೋದರನ ಬಳಿ ಯುವತಿ ಹಾಗೂ ಆಕೆಯ ಮನೆಯವರು ನಡೆಸಿದ ಹಲ್ಲೆ ಮತ್ತು ಜೀವ ಬೆದರಿಕೆಯ ಕುರಿತು ನೋವು ತೋಡಿಕೊಂಡಿದ್ದ ಎನ್ನಲಾಗಿದೆ.
ಹಲ್ಲೆಯಿಂದ ಉಂಟಾದ ನೋವು ಹಾಗೂ ಮಾನಸಿಕ ಹಿಂಸೆಯಿಂದ ನೊಂದಿದ್ದ ಪ್ರದೀಪ್, ಅಕ್ಟೋಬರ್ 30ರಂದು ಸಂಜೆ ಸುಮಾರು 5.30ರ ವೇಳೆಗೆ ಆಸ್ಪತ್ರೆಯ ಶೌಚಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.
ಯುವತಿ ಸೇರಿದಂತೆ ಹತ್ತಕ್ಕೂ ಹೆಚ್ಚು ಮಂದಿಯ ವಿರುದ್ಧ ಪ್ರಕರಣ
ಮೃತ ಪ್ರದೀಪನ ಸಹೋದರ ದಿಲೀಪ್ ಕುಮಾರ್ ನೀಡಿದ ದೂರಿನ ಆಧಾರದ ಮೇಲೆ ಶ್ರಾವ್ಯಾ ಶೆಟ್ಟಿ, ಪ್ರಸನ್ನ ಶೆಟ್ಟಿ, ಸುಧೀರ್, ಶೈಲೇಶ್, ಶಶಾಂಕ್, ಕೃಷ್ಣ ಸುಜಯ್, ಸನತ್, ಹೊರರಾಜ್ಯದ ಇಬ್ಬರು ಕಾರ್ಮಿಕರು ಹಾಗೂ ಇತರರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಪರಾಧ ಕ್ರಮಾಂಕ 149/2026ರ ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 108 ಮತ್ತು 190ರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಯುವಕನ ವಿರುದ್ಧವೂ ಈ ಹಿಂದೆ ಪ್ರಕರಣ ದಾಖಲಾಗಿತ್ತು
ಇನ್ನೊಂದೆಡೆ, ಪ್ರದೀಪ್ ಪೂಜಾರಿ ಮದುವೆಯಾಗುವಂತೆ ನಿರಂತರ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಈ ಹಿಂದೆ ಯುವತಿ ದೂರು ನೀಡಿದ್ದಳು ಎನ್ನಲಾಗಿದೆ. ಈ ದೂರಿನ ಆಧಾರದ ಮೇಲೆ ಹಿರಿಯಡ್ಕ ಪೊಲೀಸರು ಪ್ರದೀಪನನ್ನು ಬಂಧಿಸಿದ್ದು, ಬಳಿಕ ಆತ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದನು.
ನಂತರ 2025ರ ನವೆಂಬರ್ನಲ್ಲಿ ಯುವತಿಯ ಮೇಲೆ ಅತ್ಯಾಚಾರ ಎಸಗಿರುವ ಆರೋಪವೂ ಪ್ರದೀಪ್ ವಿರುದ್ಧ ಕೇಳಿಬಂದಿತ್ತು. ಈ ಸಂಬಂಧ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆತನನ್ನು ಬಂಧಿಸಿದ್ದರು ಎಂದು ವರದಿಯಾಗಿದೆ.
ಒಟ್ಟಿನಲ್ಲಿ, ಪ್ರೇಮ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಹಲವು ದೂರು ಮತ್ತು ಪ್ರಕರಣಗಳನ್ನು ಎದುರಿಸಿದ್ದ ಪ್ರದೀಪ್ ಪೂಜಾರಿಯ ಸಾವಿನ ಕುರಿತು ಇದೀಗ ಮತ್ತೊಂದು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಯುವಕನ ಮೇಲೆ ಹಲ್ಲೆ ನಡೆಸಿದ ಆರೋಪ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪಗಳು ತನಿಖೆಯಿಂದ ದೃಢಪಡಬೇಕಿದೆ.
