ಮಡಿಕೇರಿ: ಕೆಪಿಸಿಸಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವ ಕೆ.ಎ. ಯಾಕುಬ್ ಅವರಿಗೆ ಬೆಂಬಲ ವ್ಯಕ್ತಪಡಿಸಿರುವ ಸುನ್ನಿ ಮಹಲ್‌ಗಳ ಒಕ್ಕೂಟದ ಕೊಡಗು ಜಿಲ್ಲಾ ಘಟಕ, ಅಲ್ಪಸಂಖ್ಯಾತರನ್ನು ಇದೇ ರೀತಿ ಕಡೆಗಣಿಸುತ್ತಾ ಬಂದರೆ ಮುಂಬರುವ ಎಲ್ಲಾ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನೋಟಾ ಮೂಲಕ ತಕ್ಕ ಪಾಠ ಕಲಿಸುವುದಾಗಿ ಎಚ್ಚರಿಕೆ ನೀಡಿದೆ.

ಮಡಿಕೇರಿಯ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಜಿಲ್ಲಾಧ್ಯಕ್ಷ ಸಿ.ಎಂ. ಹಮೀದ್ ಮೌಲವಿ, ಕಾಂಗ್ರೆಸ್ ಪಕ್ಷಕ್ಕಾಗಿ ಅಲ್ಪಸಂಖ್ಯಾತರು ಹಲವು ವರ್ಷಗಳಿಂದ ಶ್ರಮಿಸುತ್ತಿದ್ದರೂ, ಅವರ ಸಂವಿಧಾನಬದ್ಧ ಹಕ್ಕುಗಳು ಹಾಗೂ ಬೇಡಿಕೆಗಳಿಗೆ ಸೂಕ್ತ ಸ್ಪಂದನೆ ದೊರೆಯುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯಮಟ್ಟದಲ್ಲಿ ಸೂಕ್ತ ಸ್ಥಾನಮಾನ ದೊರೆಯದ ಹಿನ್ನೆಲೆಯಲ್ಲಿ ಬೇಸರಗೊಂಡು ಕೆಪಿಸಿಸಿಗೆ ರಾಜೀನಾಮೆ ಸಲ್ಲಿಸಿರುವ ಕೆ.ಎ. ಯಾಕುಬ್ ಅವರೊಂದಿಗೆ ಸರ್ವ ಅಲ್ಪಸಂಖ್ಯಾತರು ಇದ್ದಾರೆ. ಕಳೆದ 40 ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದಿರುವ ಯಾಕುಬ್ ಅವರು ಇಂದಿಗೂ ಸ್ವಂತ ಮನೆ ಅಥವಾ ನಿವೇಶನ ಹೊಂದಿಲ್ಲ. ಅವರಿಗೆ ರಾಜ್ಯಮಟ್ಟದ ಸ್ಥಾನಮಾನ ನೀಡುವಲ್ಲಿ ಕಾಂಗ್ರೆಸ್ ಪಕ್ಷ ವಿಫಲವಾಗಿದೆ. ಎಲ್ಲಾ ಮುಸ್ಲಿಮರು ಒಗ್ಗಟ್ಟಾಗಿ ಯಾಕುಬ್ ಅವರಿಗೆ ಸೂಕ್ತ ಸ್ಥಾನಮಾನ ನೀಡುವಂತೆ ಒತ್ತಾಯಿಸುತ್ತಿದ್ದೇವೆ. ಅಲ್ಪಸಂಖ್ಯಾತರನ್ನು ನಿರ್ಲಕ್ಷಿಸಿದರೆ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ. ಈ ವಿಚಾರದಲ್ಲಿ ಶಾಸಕರು, ಪಕ್ಷದ ವರಿಷ್ಠರು ಹಾಗೂ ಜಿಲ್ಲಾಧ್ಯಕ್ಷರು ಸೂಕ್ತವಾಗಿ ಸ್ಪಂದಿಸಬೇಕು ಎಂದು ಆಗ್ರಹಿಸಿದರು.

ಕಳೆದ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ನಡೆದ ಅಲ್ಪಸಂಖ್ಯಾತ ಮುಖಂಡರ ಸಭೆಯಲ್ಲಿ ಪಕ್ಷಕ್ಕೆ ಬೆಂಬಲ ಸೂಚಿಸುವ ವೇಳೆ ಅಲ್ಪಸಂಖ್ಯಾತರಿಗೆ ಸಂವಿಧಾನಬದ್ಧ ಅವಕಾಶಗಳು ಹಾಗೂ ಸೂಕ್ತ ಸ್ಥಾನಮಾನ ಕಲ್ಪಿಸುವಂತೆ ಮನವಿ ಮಾಡಲಾಗಿತ್ತು. ಅಧಿಕಾರಕ್ಕೆ ಬಂದರೆ ಖಚಿತವಾಗಿ ಎಲ್ಲಾ ಸ್ಥಾನಮಾನಗಳನ್ನು ನೀಡುವುದಾಗಿ ಭರವಸೆ ನೀಡಲಾಗಿತ್ತು. ಆದರೆ, ಇಲ್ಲಿಯವರೆಗೆ ಯಾವುದೇ ಸೂಕ್ತ ಸ್ಥಾನಮಾನ ಕಲ್ಪಿಸಿಲ್ಲ. ಇದರಿಂದ ಜಿಲ್ಲೆಯ ಅಲ್ಪಸಂಖ್ಯಾತರು ನೋವು ಅನುಭವಿಸುವಂತಾಗಿದೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲೇಬೇಕು ಎಂಬ ಉದ್ದೇಶದಿಂದ ಕೆ.ಎ. ಯಾಕುಬ್ ಅವರೊಂದಿಗೆ ನಾವೆಲ್ಲರೂ ಕೊಡಗು ಜಿಲ್ಲೆಯಾದ್ಯಂತ ಸ್ವಂತ ಖರ್ಚಿನಲ್ಲಿ ಪ್ರಚಾರ ಕಾರ್ಯ ನಡೆಸಿದ್ದೇವೆ. ಆದರೆ, ಪಕ್ಷ ಅಧಿಕಾರಕ್ಕೆ ಬಂದ ನಂತರ ಅಲ್ಪಸಂಖ್ಯಾತರ ಬೇಡಿಕೆಗಳಿಗೆ ಸ್ಪಂದನೆ ದೊರೆತಿಲ್ಲ. ‘ಅಡುಗೆ ಮಾಡಲು, ಬಡಿಸಲು ನಾವು ಬೇಕು; ಆದರೆ ಊಟಕ್ಕೆ ನಾವು ಬೇಡ’ ಎಂಬಂತಾಗಿದೆ ಎಂದು ಹಮೀದ್ ಮೌಲವಿ ಬೇಸರ ವ್ಯಕ್ತಪಡಿಸಿದರು.

ಅಲ್ಪಸಂಖ್ಯಾತರು ಗೆಲ್ಲುವ ಅವಕಾಶವಿದ್ದ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ ಅವರಿಗೆ ಅವಕಾಶ ಸಿಗದಂತೆ ನೋಡಿಕೊಳ್ಳಲಾಗಿದೆ. ಇನ್ನಾದರೂ ಸರ್ಕಾರ ಎಚ್ಚೆತ್ತುಕೊಂಡು ಜಿಲ್ಲಾ ಪಂಚಾಯಿತಿಯ ಆರು ಕ್ಷೇತ್ರಗಳನ್ನು ಅಲ್ಪಸಂಖ್ಯಾತರಿಗೆ ಮೀಸಲಿಡಬೇಕು. ಗ್ರಾಮ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿಗಳಲ್ಲಿಯೂ ಸೂಕ್ತ ಸ್ಥಾನಮಾನ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಹಿಂದಿನ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ಅಲ್ಪಸಂಖ್ಯಾತರು ಅಪಾರ ನೋವು ಅನುಭವಿಸಿದ್ದರು. ಈ ಹಿನ್ನೆಲೆಯಲ್ಲಿ ಅಲ್ಪಸಂಖ್ಯಾತರು ಒಗ್ಗಟ್ಟಾಗಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ, ಅದು ಅಧಿಕಾರಕ್ಕೆ ಬರುವಂತೆ ಮಾಡಿದ್ದರು. ಆದರೆ, ಇಂದು ಕಾಂಗ್ರೆಸ್ ಪಕ್ಷವೇ ಅಲ್ಪಸಂಖ್ಯಾತರನ್ನು ಸಂಪೂರ್ಣವಾಗಿ ಕಡೆಗಣಿಸಿದೆ ಎಂದು ಆರೋಪಿಸಿದರು.

ಅಲ್ಪಸಂಖ್ಯಾತರಿಗೆ ಸಂವಿಧಾನಬದ್ಧ ಹಕ್ಕುಗಳನ್ನು ನೀಡಬೇಕು ಎಂದು ಆಗ್ರಹಿಸಿದ ಅವರು, ಅಲ್ಪಸಂಖ್ಯಾತರ ಬೇಡಿಕೆಗಳನ್ನು ನಿರ್ಲಕ್ಷಿಸಿದರೆ ಮುಂಬರುವ ಚುನಾವಣೆಗಳಲ್ಲಿ ನೋಟಾಕ್ಕೆ ಮತ ಚಲಾಯಿಸುವ ಮೂಲಕ ತಕ್ಕ ಪಾಠ ಕಲಿಸಲಾಗುವುದು. ಇಲ್ಲವೇ ಪರ್ಯಾಯ ರಾಜಕೀಯ ಚಿಂತನೆಗಳನ್ನು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಸುನ್ನಿ ಮಹಲ್‌ಗಳ ಒಕ್ಕೂಟದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಎಂ. ಅಬ್ದುಲ್ ಕರೀಂ, ಕೋಶಾಧಿಕಾರಿ ರಫೀಕ್ ಹಾಜಿ, ಉಪಾಧ್ಯಕ್ಷ ಉಮ್ಮರ್ ಫೈಜ್ ಹಾಗೂ ಸದಸ್ಯ ಶಮೀರ್ ಕೆ.ಪಿ. ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *