ಪ್ರೇಮ ಪ್ರಕರಣದಲ್ಲಿ ಜೈಲು ಸೇರಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಯುವಕ; ಯುವತಿಯ ಮನೆಯವರಿಂದ ಹಲ್ಲೆ ಆರೋಪ – ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ದುರಂತ

ಉಡುಪಿ: ಪ್ರೇಮ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಯುವತಿಯ ಮನೆಗೆ ತೆರಳಿ ಗಲಾಟೆ ನಡೆಸಿದ ಆರೋಪ ಎದುರಿಸುತ್ತಿದ್ದ ಹಾಗೂ ಯುವತಿಯ ಮನೆಯವರಿಂದ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಯುವಕನೊಬ್ಬ ಉಡುಪಿಯ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶೌಚಾಲಯದಲ್ಲಿ ಶುಕ್ರವಾರ ಸಂಜೆ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಮೃತ ಯುವಕನನ್ನು ಹಿಂದೂ ಜಾಗರಣ ವೇದಿಕೆಯ ನಾಯರ್‌ಕೋಡಿ ಘಟಕದ ಕಾರ್ಯಕರ್ತ ಪ್ರದೀಪ್ ಪೂಜಾರಿ ಎಂದು ಗುರುತಿಸಲಾಗಿದೆ.

ಪ್ರದೀಪ್ ಪೂಜಾರಿ ಕಳೆದ ಏಳು ವರ್ಷಗಳಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಎನ್ನಲಾಗಿದ್ದು, ಇತ್ತೀಚೆಗೆ ಯುವತಿ ಪ್ರೀತಿಯನ್ನು ನಿರಾಕರಿಸಿದ್ದಳು ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ 2025ರಲ್ಲಿ ಯುವತಿಯನ್ನು ಅಡ್ಡಗಟ್ಟಿ ಗಲಾಟೆ ನಡೆಸಿದ ಆರೋಪದ ಮೇಲೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಪ್ರದೀಪ್ ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದನು.

ಅ. 27ರಂದು ಮತ್ತೆ ಯುವತಿಯ ಮನೆಗೆ ತೆರಳಿ ಗಲಾಟೆ ನಡೆಸಿದ್ದಾನೆ ಎನ್ನಲಾಗಿದ್ದು, ಈ ವೇಳೆ ಯುವತಿಯ ಮನೆಯವರು ಆತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಅಲ್ಲದೆ, ಪ್ರದೀಪ್ ಪೂಜಾರಿ ಕೂಡ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ದೂರು ದಾಖಲಿಸಿದ್ದ ಎನ್ನಲಾಗಿದೆ.

ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಪ್ರದೀಪ್ ಅವರನ್ನು ಉಡುಪಿಯ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಶುಕ್ರವಾರ ಸಂಜೆ ಆಸ್ಪತ್ರೆಯ ಶೌಚಾಲಯದಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಪೊಲೀಸ್ ಠಾಣೆ ಎದುರು ಪ್ರತಿಭಟನೆ

ಯುವಕನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಡುಪಿ ನಗರ ಪೊಲೀಸ್ ಠಾಣೆಯ ಎದುರು ಜಮಾಯಿಸಿದರು. ಪ್ರದೀಪ್ ಪೂಜಾರಿಯ ಸಾವಿಗೆ ಕಾರಣರಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಘಟನೆಗೆ ಸಂಬಂಧಿಸಿದಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಸ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.

Leave a Reply

Your email address will not be published. Required fields are marked *