ಮಂಗಳೂರು: ಬೋಂದೆಲ್–ಪಚ್ಚನಾಡಿ ಪ್ರದೇಶದಲ್ಲಿ ಅಳವಡಿಸಲಾಗಿದ್ದ ಬ್ಯಾನರ್ ತೆರವುಗೊಳಿಸಿದ ವಿಚಾರವಾಗಿ ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳ ವಿರುದ್ಧ ಯುವ ಕಾಂಗ್ರೆಸ್ ನಾಯಕ ಗಿರೀಶ್ ಆಳ್ವ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂದು ಕುಟುಂಬ ಸಮೇತರಾಗಿ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ, ಕರ್ನಾಟಕ ಕಾಂಗ್ರೆಸ್ ಸರ್ಕಾರದ ಅನುದಾನದಲ್ಲಿ ನಿರ್ಮಾಣಗೊಂಡ ವಾಮಂಜೂರು–ಬೋಂದೆಲ್ ಕಾಂಕ್ರೀಟ್ ರಸ್ತೆಗೆ ಅನುದಾನ ಬಿಡುಗಡೆಗೊಳಿಸಿದ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿ ಅಳವಡಿಸಲಾಗಿದ್ದ ಬ್ಯಾನರ್ ಅನ್ನು ಪಾಲಿಕೆಯ ಸುಮಾರು 15 ಮಂದಿ ಅಧಿಕಾರಿಗಳು ತೆರವುಗೊಳಿಸುತ್ತಿರುವುದನ್ನು ಗಿರೀಶ್ ಆಳ್ವ ಗಮನಿಸಿದ್ದಾರೆ.
ತಕ್ಷಣ ಸ್ಥಳಕ್ಕೆ ತೆರಳಿದ ಅವರು, ಬ್ಯಾನರ್ ತೆರವು ವಿಚಾರದಲ್ಲಿ ಅಧಿಕಾರಿಗಳು ತಾರತಮ್ಯ ನೀತಿ ಅನುಸರಿಸುತ್ತಿರುವುದೇಕೆ ಎಂದು ಪ್ರಶ್ನಿಸಿದ್ದಾರೆ. ಪಾಲಿಕೆ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ಇತರ ಪಕ್ಷಗಳ ನಾಯಕರು ಅಳವಡಿಸಿರುವ ಬ್ಯಾನರ್ಗಳನ್ನೂ ಮೊದಲು ತೆರವುಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.
ಬ್ಯಾನರ್ ವಿಚಾರದಲ್ಲಿ ರಾಜಕೀಯ ಮಾಡದೆ, ಯಾವುದೇ ಪಕ್ಷದವರಾಗಿರಲಿ ಎಲ್ಲರಿಗೂ ಒಂದೇ ರೀತಿಯ ನಿಯಮಗಳನ್ನು ಪಾಲಿಸಬೇಕು. ಕಾನೂನು ಎಲ್ಲರಿಗೂ ಸಮಾನವಾಗಿರಬೇಕು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.



ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪಚ್ಚನಾಡಿ ವಾರ್ಡ್ನ ಹಲವು ಕಾಂಗ್ರೆಸ್ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿ ಗಿರೀಶ್ ಆಳ್ವ ಅವರಿಗೆ ಬೆಂಬಲ ಸೂಚಿಸಿದ್ದಾರೆ.



ಅಭಿವೃದ್ಧಿ ಕಾರ್ಯಗಳಿಗೆ ಅಭಿನಂದನೆ ಸಲ್ಲಿಸುವ ಉದ್ದೇಶದಿಂದ ಅಳವಡಿಸಲಾದ ಬ್ಯಾನರ್ಗಳ ವಿಚಾರದಲ್ಲಿ ರಾಜಕೀಯ ತಾರತಮ್ಯ ಮಾಡಬಾರದು. ಪಾಲಿಕೆ ವ್ಯಾಪ್ತಿಯಲ್ಲಿ ಕಾನೂನು ಎಲ್ಲರಿಗೂ ಸಮಾನವಾಗಿ ಅನ್ವಯವಾಗಬೇಕು ಎಂಬುದು ಗಿರೀಶ್ ಆಳ್ವ ಅವರ ಆಗ್ರಹವಾಗಿದೆ.



ಈ ಬ್ಯಾನರ್ ತೆರವು ಪ್ರಕರಣ ಇದೀಗ ಸ್ಥಳೀಯ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.








